
ವಿಜಯಪುರ, 05 ಜೂನ್ (ಹಿ.ಸ.) :
ಆಂಕರ್ : ಭೀಮಾ ತೀರ ಪ್ರದೇಶದಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದ್ದು, ವಿಜಯಪುರ ನಗರದಲ್ಲಿ ಮತ್ತೊಮ್ಮೆ ಕಾನೂನು ಸುವ್ಯವಸ್ಥೆ ಕುರಿತು ಪ್ರಶ್ನೆಗಳು ಉದ್ಭವಿಸುವಂತಾಗಿದೆ. ನಗರದ ಇಟ್ಟಂಗಿಹಾಳ ದಡ್ಡಿ ಸಮೀಪ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ಯುವಕ ಧನ್ವಂತ್ ಗಂಭೀರವಾಗಿ ಗಾಯಗೊಂಡಿದ್ದು, ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಲಭ್ಯ ಮಾಹಿತಿಯ ಪ್ರಕಾರ, ಧನ್ವಂತ್ ಎಂಬಾತ ತನ್ನ ಕೆಲಸ ಕಾರ್ಯಗಳಲ್ಲಿ ನಿರತರಾಗಿದ್ದ ವೇಳೆ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಕೋರರು ಸತತವಾಗಿ ಗುಂಡು ಹಾರಿಸಿದ್ದು, ಎರಡು ಗುಂಡುಗಳು ಧನ್ವಂತ್ಗೆ ತಗುಲಿವೆ. ದಾಳಿಯ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಸ್ಥಳದಲ್ಲಿ ಕೆಲಕಾಲ ಭೀತಿಯ ವಾತಾವರಣ ನಿರ್ಮಾಣಗೊಂಡಿತ್ತು.
ಗುಂಡಿನ ದಾಳಿಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಸಾರ್ವಜನಿಕರು ಘಟನಾ ಸ್ಥಳದತ್ತ ಧಾವಿಸಿದ್ದು, ಗಾಯಾಳುವನ್ನು ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದೆ. ವೈದ್ಯರು ಗಾಯಾಳುವಿಗೆ ತುರ್ತು ಚಿಕಿತ್ಸೆ ನೀಡುತ್ತಿದ್ದು, ಆರೋಗ್ಯ ಸ್ಥಿತಿಯ ಬಗ್ಗೆ ನಿಗಾ ವಹಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಆರೋಗ್ಯ ವಿಚಾರಿಸಿದರು. ಅಲ್ಲದೆ ಘಟನೆಯ ಕುರಿತು ಪ್ರಾಥಮಿಕ ಮಾಹಿತಿ ಪಡೆದು ತನಿಖೆಯನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇತ್ತೀಚಿನ ದಿನಗಳಲ್ಲಿ ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚಾಗುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆತಂಕ ವ್ಯಕ್ತವಾಗುತ್ತಿದೆ. ನಗರದ ಮಧ್ಯಭಾಗದಲ್ಲೇ ನಡೆದ ಈ ಗುಂಡಿನ ದಾಳಿ ನಾಗರಿಕರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಇನ್ನಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ವಿಜಯಪುರ ಪೊಲೀಸರು ದಾಳಿಯ ಹಿಂದಿನ ಉದ್ದೇಶ, ವೈಯಕ್ತಿಕ ವೈಷಮ್ಯ ಅಥವಾ ಇತರೆ ಕಾರಣಗಳ ಬಗ್ಗೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯ ಮುಂದುವರಿಸಲಾಗಿದೆ.
ಗುಂಡಿನ ದಾಳಿಯ ನಿಖರ ಕಾರಣ ತನಿಖೆಯಿಂದಷ್ಟೇ ಹೊರಬೀಳಬೇಕಿದ್ದು, ಈ ಘಟನೆ ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭದ್ರತಾ ವ್ಯವಸ್ಥೆ ಮತ್ತು ಅಪರಾಧ ನಿಯಂತ್ರಣ ಕುರಿತು ಚರ್ಚೆಗೆ ಕಾರಣವಾಗಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande