
ನವದೆಹಲಿ, 05 ಜೂನ್ (ಹಿ.ಸ.) :
ಆ್ಯಂಕರ್ : ತಮಿಳುನಾಡಿನ ಪ್ರಮುಖ ರಾಜಕಾರಣಿ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅಂಗೀಕರಿಸಿದ್ದಾರೆ.
ಈ ಕುರಿತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪ್ರಕಟಣೆ ಹೊರಡಿಸಿ ಮಾಹಿತಿ ನೀಡಿದ್ದಾರೆ. ಪ್ರಕಟಣೆಯ ಪ್ರಕಾರ, ಅಣ್ಣಾಮಲೈ ಸಲ್ಲಿಸಿದ್ದ ರಾಜೀನಾಮೆಯನ್ನು ರಾಷ್ಟ್ರೀಯ ಅಧ್ಯಕ್ಷರು ಅಧಿಕೃತವಾಗಿ ಸ್ವೀಕರಿಸಿದ್ದಾರೆ.
ಅಣ್ಣಾಮಲೈ ಅವರು ಇಂದು ಮಧ್ಯಾಹ್ನ ಮಹತ್ವದ ರಾಜಕೀಯ ಘೋಷಣೆ ಮಾಡುವ ಸಾಧ್ಯತೆ ಇದೆ. ಗುರುವಾರ ಸಾಮಾಜಿಕ ಜಾಲತಾಣದಲ್ಲಿ ಅವರು, ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ನನ್ನ ಮನದ ಮಾತನ್ನು ಹಂಚಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದರು. ಇದರಿಂದ ಅವರು ಹೊಸ ರಾಜಕೀಯ ದಾರಿಯನ್ನು ಆಯ್ಕೆ ಮಾಡಲಿದ್ದಾರೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿದೆ. ಕೆಲವರು ಅವರು ಹೊಸ ರಾಜಕೀಯ ಪಕ್ಷವನ್ನು ಘೋಷಿಸಬಹುದು ಎಂಬ ಊಹೆಯನ್ನೂ ವ್ಯಕ್ತಪಡಿಸುತ್ತಿದ್ದಾರೆ.
ಕಳೆದ ಕೆಲವು ತಿಂಗಳುಗಳಿಂದ ಅಣ್ಣಾಮಲೈ ಅವರು ಬಿಜೆಪಿಯ ಕೆಲವು ನಿರ್ಧಾರಗಳ ಬಗ್ಗೆ ಅಸಮಾಧಾನ ಹೊಂದಿದ್ದರು ಎಂದು ಹೇಳಲಾಗುತ್ತಿದೆ. ವಿಶೇಷವಾಗಿ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಪಕ್ಷದೊಂದಿಗೆ ಕ್ಷೇತ್ರ ಹಂಚಿಕೆ ವಿಚಾರದಲ್ಲಿ ಅವರು ಅಸಮಾಧಾನಗೊಂಡಿದ್ದರು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಅವರು ಸೋಮವಾರ ನವದೆಹಲಿಗೆ ಭೇಟಿ ನೀಡಿದ್ದರು. ಮಂಗಳವಾರ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದರು. ಇದೇ ವೇಳೆ ಐದು ಪುಟಗಳ ರಾಜೀನಾಮೆ ಪತ್ರವನ್ನೂ ಸಲ್ಲಿಸಿದ್ದರು.
ಬಳಿಕ ಪಕ್ಷದ ಉನ್ನತ ನಾಯಕರೊಂದಿಗೆ ಮತ್ತಷ್ಟು ಮಾತುಕತೆ ನಡೆಯುವ ನಿರೀಕ್ಷೆಯಲ್ಲಿದ್ದ ಅಣ್ಣಾಮಲೈ ಅವರಿಗೆ ಯಾವುದೇ ಸ್ಪಷ್ಟ ಭರವಸೆ ದೊರೆಯದ ಕಾರಣ, ಪಕ್ಷ ತೊರೆಯುವ ನಿರ್ಧಾರವನ್ನು ಅಂತಿಮಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.