
ಬೆಂಗಳೂರು, 05 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಹೊಸ ಸಚಿವ ಸಂಪುಟಕ್ಕೆ ಖಾತೆ ಹಂಚಿಕೆ ನಡೆದ ಬೆನ್ನಲ್ಲೇ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.
ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುವ ಬಗ್ಗೆ ಹಿಂದೆ ನೀಡಿದ್ದ ಭರವಸೆ ಈಡೇರಿಲ್ಲ ಎಂಬ ಕಾರಣವನ್ನು ಅವರು ಬಹಿರಂಗಪಡಿಸಿದ್ದಾರೆ.
ಶುಕ್ರವಾರ ಬೆಂಗಳೂರಿನ ಕೋರಮಂಗಲದಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ, ಜಲಸಂಪನ್ಮೂಲ ಇಲಾಖೆ ನೀಡಿದ್ದೇ ರಾಜೀನಾಮೆಯ ಏಕೈಕ ಕಾರಣವಲ್ಲ ಎಂದು ಸ್ಪಷ್ಟಪಡಿಸಿದರು. ಹಿಂದೆ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಈಗ ಆ ಮಾತು ಉಳಿಸಿಕೊಳ್ಳಲಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಹೊರತು ಕಾಂಗ್ರೆಸ್ ಪಕ್ಷಕ್ಕೆ ಅಲ್ಲ. ಪಕ್ಷವನ್ನು ಬಿಡುವ ಪ್ರಶ್ನೆಯೇ ಇಲ್ಲ. ನಾನು ಕಾಂಗ್ರೆಸ್ ಶಾಸಕನಾಗಿಯೇ ಮುಂದುವರಿಯುತ್ತೇನೆ ಎಂದು ಅವರು ಹೇಳಿದರು.
ರಾಮಲಿಂಗಾ ರೆಡ್ಡಿ ತಮ್ಮ ರಾಜಕೀಯ ಪಯಣವನ್ನು ಉಲ್ಲೇಖಿಸಿ, ಕಳೆದ 53 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿದ್ದೇನೆ. ಪಕ್ಷ ನನಗೆ ಅನೇಕ ಅವಕಾಶಗಳನ್ನು ನೀಡಿದೆ. ಆದರೆ ಸಚಿವ ಸ್ಥಾನಕ್ಕಾಗಿ ಅಥವಾ ನಿರ್ದಿಷ್ಟ ಖಾತೆಗಾಗಿ ನಾನು ಎಂದಿಗೂ ಯಾರ ಬಳಿಯೂ ಮನವಿ ಮಾಡಿಲ್ಲ ಎಂದು ತಿಳಿಸಿದರು.
ನನಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆಯೂ ಯಾವುದೇ ವೈಯಕ್ತಿಕ ಅಸಮಾಧಾನ ಇಲ್ಲ. ನಾನು ರಾಜೀನಾಮೆ ನೀಡಿರುವ ನಿಜವಾದ ಕಾರಣ ಜನರಿಗೆ ತಿಳಿಯಬೇಕು ಎಂಬ ಉದ್ದೇಶದಿಂದ ಈ ವಿಷಯವನ್ನು ಬಹಿರಂಗಪಡಿಸಿದ್ದೇನೆ ಎಂದರು.
ನಾನು ಯಾವತ್ತೂ ಯಾವುದೇ ಮುಖ್ಯಮಂತ್ರಿಯ ಬಳಿಗೆ ಹೋಗಿ ಸಚಿವ ಸ್ಥಾನ ಕೇಳಿಲ್ಲ. ಈ ಬಾರಿಯೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬಳಿಯಾಗಲಿ ಅಥವಾ ಪಕ್ಷದ ಹೈಕಮಾಂಡ್ ಬಳಿಯಾಗಲಿ ಯಾವುದೇ ಬೇಡಿಕೆ ಇಟ್ಟಿರಲಿಲ್ಲ. ಆದರೆ, ಡಿ.ಕೆ. ಶಿವಕುಮಾರ್ ಅವರು ಹಿಂದೆ ಮುಖ್ಯಮಂತ್ರಿಯಾದ ಬಳಿಕ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ನಿಮಗೇ ನೀಡುತ್ತೇನೆ ಎಂದು ಮಾತು ಕೊಟ್ಟಿದ್ದರು. ಈಗ ಆ ಮಾತು ಈಡೇರಿಲ್ಲ ಎಂದು ರಾಮಲಿಂಗಾ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.