
ಬಾಗಲಕೋಟೆ, 05 ಜೂನ್ (ಹಿ.ಸ.) :
ಆಂಕರ್ : ಮುಂಬರುವ ಚುನಾವಣೆಗಳನ್ನು ಪಾರದರ್ಶಕ, ನಿಷ್ಪಕ್ಷಪಾತ ಹಾಗೂ ಸುಸೂತ್ರವಾಗಿ ನಡೆಸುವ ಉದ್ದೇಶದಿಂದ ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ವಿಶೇಷ ಸಂಕ್ಷಿಪ್ತ ಪರಿಷ್ಕರಣಾ (ಎಸ್ಐಆರ್) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಮತದಾರರ ಪಟ್ಟಿಯನ್ನು ಸಂಪೂರ್ಣವಾಗಿ ಅಚ್ಚುಕಟ್ಟಾಗಿ ಸಿದ್ಧಪಡಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬಾಗಲಕೋಟೆ ಜಿಲ್ಲೆಯ ಮುಧೋಳ ತಹಸೀಲ್ದಾರ ಡಾ. ಚಿಕ್ಕಪ್ಪ ನಾಯಕ ತಿಳಿಸಿದ್ದಾರೆ.
ನಗರದ ತಹಸೀಲ್ದಾರ್ ಕಚೇರಿಯಲ್ಲಿ ಇಂದೂ ಕೂಡ ಆಯೋಜಿಸಿದ್ದ ಸಭೆಯಲ್ಲಿಮ ತನಾಡಿದ ಅವರು, ಮತದಾರರ ಪಟ್ಟಿ ಆರೋಗ್ಯಕರ ಹಾಗೂ ದೋಷರಹಿತವಾಗಿರುವುದು ಚುನಾವಣಾ ಆಯೋಗದ ಪ್ರಮುಖ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಮೃತಪಟ್ಟವರು, ಬೇರೆಡೆಗೆ ಸ್ಥಳಾಂತರಗೊಂಡವರು ಹಾಗೂ ಒಂದಕ್ಕಿಂತ ಹೆಚ್ಚು ಕಡೆಗಳಲ್ಲಿ ಹೆಸರು ನೋಂದಾಯಿಸಿಕೊಂಡಿರುವ ಅನರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವ ಕಾರ್ಯ ಕೈಗೊಳ್ಳಲಾಗುವುದು. ಅದೇ ವೇಳೆ ಅರ್ಹ ಮತದಾರರು ಯಾವುದೇ ಕಾರಣಕ್ಕೂ ಪಟ್ಟಿಯಿಂದ ಹೊರಗುಳಿಯದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಲಿದ್ದಾರೆ ಎಂದು ಹೇಳಿದರು.
ಮತದಾರರ ಮಾಹಿತಿಯನ್ನು ಸಮರ್ಪಕವಾಗಿ ಸಂಗ್ರಹಿಸುವ ಸಲುವಾಗಿ ಜೂನ್ 30ರಿಂದ ಜುಲೈ 29ರವರೆಗೆ ಮನೆ ಮನೆ ಸಮೀಕ್ಷೆ ನಡೆಸಲಾಗುವುದು. ಈ ಅವಧಿಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒ) ಪ್ರಿ-ಪ್ರಿಂಟೆಡ್ ಫಾರ್ಮ್ಗಳೊಂದಿಗೆ ಮನೆಗಳಿಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸಲಿದ್ದಾರೆ. ಒಂದು ವೇಳೆ ಮೊದಲ ಬಾರಿ ಭೇಟಿ ನೀಡಿದಾಗ ಮನೆಯವರು ಲಭ್ಯವಿಲ್ಲದಿದ್ದರೆ, ಕನಿಷ್ಠ ಮೂರು ಬಾರಿ ಭೇಟಿ ನೀಡಿ ಅಗತ್ಯ ಮಾಹಿತಿಯನ್ನು ಸಂಗ್ರಹಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಸಮೀಕ್ಷೆ ಕಾರ್ಯವನ್ನು ತಂತ್ರಜ್ಞಾನ ಆಧಾರಿತವಾಗಿ ನಡೆಸಲು ಫಾರ್ಮ್ಗಳಲ್ಲಿ ಕ್ಯೂಆರ್ ಕೋಡ್ ವ್ಯವಸ್ಥೆ ಅಳವಡಿಸಲಾಗಿದೆ. ಬಿಎಲ್ಒಗಳು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಮಾಹಿತಿಯನ್ನು ನೇರವಾಗಿ ಡಿಜಿಟಲ್ ರೂಪದಲ್ಲಿ ದಾಖಲಿಸಲಿದ್ದು, ಇದರಿಂದ ದೋಷರಹಿತ ಮತ್ತು ವೇಗದ ಮಾಹಿತಿ ಸಂಗ್ರಹಕ್ಕೆ ಅನುಕೂಲವಾಗಲಿದೆ ಎಂದರು.
ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ನಂತರ ಸಾರ್ವಜನಿಕರಿಗೆ ಒಂದು ತಿಂಗಳ ಕಾಲ ತಮ್ಮ ಹೆಸರುಗಳನ್ನು ಪರಿಶೀಲಿಸಿಕೊಳ್ಳಲು ಅವಕಾಶ ಕಲ್ಪಿಸಲಾಗುತ್ತದೆ. ಹೆಸರು ಸೇರ್ಪಡೆ ಆಗದೇ ಇದ್ದರೆ, ತಿದ್ದುಪಡಿ ಅಗತ್ಯವಿದ್ದರೆ ಅಥವಾ ಯಾವುದೇ ಆಕ್ಷೇಪಣೆಗಳಿದ್ದರೆ ಅವುಗಳನ್ನು ಸಲ್ಲಿಸಲು ಅವಕಾಶ ನೀಡಲಾಗುವುದು. ಎಲ್ಲ ಅರ್ಹ ನಾಗರಿಕರು ಈ ಅವಕಾಶವನ್ನು ಬಳಸಿಕೊಂಡು ತಮ್ಮ ಮತದಾರರ ಹಕ್ಕನ್ನು ಖಚಿತಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಮತದಾರರ ಪಟ್ಟಿ ಪರಿಷ್ಕರಣೆಯಂತಹ ಮಹತ್ವದ ಕಾರ್ಯದಲ್ಲಿ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ. ಯಾವುದೇ ಸುಳ್ಳು ವದಂತಿಗಳು ಅಥವಾ ತಪ್ಪು ಮಾಹಿತಿಗಳಿಗೆ ಕಿವಿಗೊಡದೆ, ಚುನಾವಣಾ ಆಯೋಗದ ಅಧಿಕೃತ ಸೂಚನೆಗಳ ಪ್ರಕಾರ ನಡೆಯುವ ಪ್ರಕ್ರಿಯೆಗೆ ಸಹಕರಿಸಬೇಕು ಎಂದು ತಹಸೀಲ್ದಾರ್ ಕೋರಿದರು.
ಈ ಕಾರ್ಯ ಯಶಸ್ವಿಯಾಗಿ ಪೂರ್ಣಗೊಳ್ಳಲು ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಸಹಕಾರವನ್ನೂ ಕೋರಲಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಎಲ್ಲಾ ಹಂತದ ಅಧಿಕಾರಿಗಳಿಗೆ ಈಗಾಗಲೇ ತರಬೇತಿ ನೀಡಲಾಗಿದ್ದು, ನಿಗದಿತ ವೇಳಾಪಟ್ಟಿಯಂತೆ ಕಾರ್ಯ ಪೂರ್ಣಗೊಳಿಸಿ ಅಕ್ಟೋಬರ್ 7ರೊಳಗೆ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸುವ ಗುರಿ ಹೊಂದಲಾಗಿದೆ ಎಂದು ಡಾ. ಚಿಕ್ಕಪ್ಪ ನಾಯಕ ಮಾಹಿತಿ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande