ಇಳಕಲ್ಲದಲ್ಲಿ ಮತ್ತೆ ಕಳ್ಳರ ಅಟ್ಟಹಾಸ ; ಸಿಸಿಟಿವಿಯಲ್ಲಿ ಸೆರೆಗೊಂಡ ಚಲನವಲನ, ನಿವಾಸಿಗಳಲ್ಲಿ ಆತಂಕ
ಬಾಗಲಕೋಟೆ, 07 ಜೂನ್ (ಹಿ.ಸ.) : ಆಂಕರ್ : ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದಲ್ಲಿ ಕೆಲ ದಿನಗಳಿಂದ ಕಳ್ಳತನ ಪ್ರಕರಣಗಳಿಂದ ಮುಕ್ತವಾಗಿ ಶಾಂತವಾಗಿದ್ದ ಮತ್ತೆ ಕಳ್ಳರ ಗ್ಯಾಂಗ್ ಸಕ್ರಿಯವಾಗಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ನಗರದ ದರ್ಗಾ ಸಮೀಪದ ಟೀಚರ್ಸ್ ಕಾಲೋನಿಯಲ್ಲಿ ನಡೆದ ಕಳ್ಳತನ ಪ್ರಕರ
ಕಳ್ಳತನ


ಬಾಗಲಕೋಟೆ, 07 ಜೂನ್ (ಹಿ.ಸ.) :

ಆಂಕರ್ : ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದಲ್ಲಿ ಕೆಲ ದಿನಗಳಿಂದ ಕಳ್ಳತನ ಪ್ರಕರಣಗಳಿಂದ ಮುಕ್ತವಾಗಿ ಶಾಂತವಾಗಿದ್ದ ಮತ್ತೆ ಕಳ್ಳರ ಗ್ಯಾಂಗ್ ಸಕ್ರಿಯವಾಗಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ನಗರದ ದರ್ಗಾ ಸಮೀಪದ ಟೀಚರ್ಸ್ ಕಾಲೋನಿಯಲ್ಲಿ ನಡೆದ ಕಳ್ಳತನ ಪ್ರಕರಣವು ನಿವಾಸಿಗಳ ನೆಮ್ಮದಿಯನ್ನು ಕದಡಿದ್ದು, ಕಳ್ಳರ ಚಲನವಲನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

ಮಧ್ಯರಾತ್ರಿ ನಡೆದ ಘಟನೆಯಲ್ಲಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದಿದ್ದ ಮೂವರು ಕಳ್ಳರು ಟೀಚರ್ಸ್ ಕಾಲೋನಿಯನ್ನು ಗುರಿಯಾಗಿಸಿಕೊಂಡಿದ್ದಾರೆ. ಮೊದಲು ಕಾಲೋನಿಯಲ್ಲಿದ್ದ ಎರಡು ಬೈಕ್ಗಳನ್ನು ಕಳವು ಮಾಡಿದ ಆರೋಪಿಗಳು ಬಳಿಕ ಒಂದು ಮನೆಯ ಬೀಗ ಒಡೆದು ಒಳನುಗ್ಗಿ, ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ಕದ್ದೊಯ್ದಿದ್ದಾರೆ ಎಂದು ತಿಳಿದುಬಂದಿದೆ.

ಕಳ್ಳತನದ ವೇಳೆ ಕಳ್ಳರು ಅತ್ಯಂತ ಎಚ್ಚರಿಕೆಯಿಂದ ವರ್ತಿಸಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡುಬಂದಿದೆ. ಮುಖ ಮುಚ್ಚಿಕೊಂಡು ಬಂದಿದ್ದ ಆರೋಪಿಗಳು ತಮ್ಮ ಗುರುತು ಪತ್ತೆಯಾಗದಂತೆ ಮುನ್ನೆಚ್ಚರಿಕೆ ವಹಿಸಿರುವುದು ಗೋಚರಿಸಿದೆ. ಆದಾಗ್ಯೂ, ಅವರ ಚಲನವಲನ ಹಾಗೂ ಕಳ್ಳತನದ ಕೃತ್ಯ ಕ್ಯಾಮೆರಾದಲ್ಲಿ ದಾಖಲಾಗಿರುವುದರಿಂದ ತನಿಖೆಗೆ ಮಹತ್ವದ ಸುಳಿವು ದೊರೆತಿದೆ.

ಬೆಳಿಗ್ಗೆ ಕಳ್ಳತನ ನಡೆದಿರುವುದು ತಿಳಿಯುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆಯ ಮಾಲೀಕರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.

ಟೀಚರ್ಸ್ ಕಾಲೋನಿಯಲ್ಲಿ ನಡೆದ ಈ ಘಟನೆ ಸಾರ್ವಜನಿಕರಲ್ಲಿ ಭದ್ರತೆ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಕಳೆದ ಕೆಲವು ತಿಂಗಳುಗಳಿಂದ ನಗರದಲ್ಲಿ ಕಳ್ಳತನ ಪ್ರಕರಣಗಳು ಕಡಿಮೆಯಾಗಿದ್ದರೂ, ಇದೀಗ ಮತ್ತೆ ಕಳ್ಳರ ಗ್ಯಾಂಗ್ ಸಕ್ರಿಯವಾಗಿರುವುದು ನಿವಾಸಿಗಳಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ರಾತ್ರಿ ವೇಳೆ ಪೊಲೀಸ್ ಗಸ್ತು ಹೆಚ್ಚಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ, ಬೀದಿ ದೀಪಗಳ ಸಮರ್ಪಕ ನಿರ್ವಹಣೆ ಹಾಗೂ ರಾತ್ರಿ ಗಸ್ತು ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ. ಕಳ್ಳತನದಂತಹ ಪ್ರಕರಣಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿ ಬಂದಿದೆ.

ಪ್ರಕರಣದ ತನಿಖೆ ಮುಂದುವರಿದಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿರುವ ದೃಶ್ಯಗಳ ಆಧಾರದ ಮೇಲೆ ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂಬ ವಿಶ್ವಾಸವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಕಳ್ಳರ ಬಂಧನ ಹಾಗೂ ಕಳುವಾದ ವಸ್ತುಗಳ ಪತ್ತೆಗೆ ವಿಶೇಷ ತಂಡ ಕಾರ್ಯನಿರ್ವಹಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande