
ನವದೆಹಲಿ, 07 ಜೂನ್ (ಹಿ.ಸ.) :
ಆ್ಯಂಕರ್ : ವಿಶ್ವ ಆಹಾರ ಸುರಕ್ಷತಾ ದಿನದ ಅಂಗವಾಗಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ದೇಶದ ಜನತೆಗೆ ಶುಭಾಶಯ ಕೋರಿದ್ದು, ಆರೋಗ್ಯಕರ ಭವಿಷ್ಯಕ್ಕಾಗಿ ಸುರಕ್ಷಿತ ಮತ್ತು ಪೌಷ್ಟಿಕ ಆಹಾರದ ಮಹತ್ವವನ್ನು ಒತ್ತಿ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಈ ವರ್ಷದ ವಿಶ್ವ ಆಹಾರ ಸುರಕ್ಷತಾ ದಿನದ ಘೋಷವಾಕ್ಯ “ಸಮಸ್ಯೆಯಿಂದ ಪರಿಹಾರದವರೆಗೆ – ಎಲ್ಲೆಡೆ ಸುರಕ್ಷಿತ ಆಹಾರ” ಎಂಬುದಾಗಿದ್ದು, ಹೊಲದಿಂದ ತಟ್ಟೆಯವರೆಗೆ ಆಹಾರದ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಅಗತ್ಯವನ್ನು ಎತ್ತಿ ತೋರಿಸುತ್ತದೆ ಎಂದು ತಿಳಿಸಿದ್ದಾರೆ.
ಆಹಾರ ಉತ್ಪಾದನೆ, ಸಂಗ್ರಹಣೆ, ಸಾಗಣೆ ಹಾಗೂ ಬಳಕೆಯ ಪ್ರತಿಯೊಂದು ಹಂತದಲ್ಲೂ ಸ್ವಚ್ಛತೆ ಮತ್ತು ವೈಜ್ಞಾನಿಕ ವಿಧಾನಗಳನ್ನು ಅನುಸರಿಸುವ ಮೂಲಕ ಸುರಕ್ಷಿತ ಆಹಾರವನ್ನು ಒದಗಿಸಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆರೋಗ್ಯಕರ ಜೀವನಶೈಲಿಯ ಕರೆಯನ್ನು ಉಲ್ಲೇಖಿಸಿದ ನಡ್ಡಾ, ಕುಟುಂಬಗಳು ತಮ್ಮ ಅಡುಗೆ ಎಣ್ಣೆ ಬಳಕೆಯನ್ನು ಶೇಕಡಾ 10ರಷ್ಟು ಕಡಿಮೆ ಮಾಡಬೇಕು ಹಾಗೂ ಸಮತೋಲಿತ ಮತ್ತು ಪೌಷ್ಟಿಕ ಆಹಾರ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು ಎಂದು ಪ್ರಧಾನಿ ಕರೆ ನೀಡಿದ್ದಾರೆ ಎಂದು ಹೇಳಿದರು.
ಆರೋಗ್ಯಕರ ಆಹಾರ ಪದ್ಧತಿ ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲದೆ, ಸದೃಢ ಮತ್ತು ಸ್ವಾವಲಂಬಿ ಭಾರತದ ನಿರ್ಮಾಣಕ್ಕೂ ನೆರವಾಗಲಿದೆ ಎಂದು ನಡ್ಡಾ ತಿಳಿಸಿದ್ದಾರೆ.
ವಿಶ್ವ ಆಹಾರ ಸುರಕ್ಷತಾ ದಿನದ ಅಂಗವಾಗಿ ಆಹಾರದ ಗುಣಮಟ್ಟ, ಸುರಕ್ಷತೆ ಮತ್ತು ಪೌಷ್ಟಿಕಾಂಶದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದ್ದು, ಪ್ರತಿಯೊಬ್ಬರೂ ಆರೋಗ್ಯಕರ ಆಹಾರ ಪದ್ಧತಿಯನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.