
ಬೆಂಗಳೂರು, 08 ಜೂನ್ (ಹಿ.ಸ.) :
ಆ್ಯಂಕರ್ : ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ (50) ಅವರು ಭಾನುವಾರ ರಾತ್ರಿ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾದರು.
ಮಾಹಿತಿಯ ಪ್ರಕಾರ, ಭಾನುವಾರ ರಾತ್ರಿ ಇದ್ದಕ್ಕಿದ್ದಂತೆ ತೀವ್ರ ಹೃದಯಾಘಾತಕ್ಕೊಳಗಾದ ಸೂರಜ್ ಹೆಗ್ಡೆ ಅವರನ್ನು ತಕ್ಷಣವೇ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.
ಸೂರಜ್ ಹೆಗ್ಡೆ ಅವರು ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ ಮೊಮ್ಮಗರಾಗಿದ್ದರು. ರಾಜಕೀಯ ಕುಟುಂಬದ ಹಿನ್ನೆಲೆಯಿಂದ ಬಂದಿದ್ದರೂ, ತಮ್ಮದೇ ಆದ ಸಂಘಟನಾ ಸಾಮರ್ಥ್ಯ ಹಾಗೂ ಪಕ್ಷನಿಷ್ಠೆಯಿಂದ ಕಾಂಗ್ರೆಸ್ ನಲ್ಲಿ ಪ್ರಮುಖ ಸ್ಥಾನವನ್ನು ಗಳಿಸಿದ್ದರು.
ರಾಷ್ಟ್ರೀಯ ಯುವ ಕಾಂಗ್ರೆಸ್ನ ವಿವಿಧ ಜವಾಬ್ದಾರಿಗಳ ಮೂಲಕ ರಾಜಕೀಯ ಜೀವನ ಆರಂಭಿಸಿದ ಅವರು ನಂತರ ಎಐಸಿಸಿ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು.
ತಮಿಳುನಾಡು ಹಾಗೂ ಪುದುಚೇರಿ ಕಾಂಗ್ರೆಸ್ ಸಂಘಟನೆಯ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿ ಪಕ್ಷ ಸಂಘಟನೆಯನ್ನು ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಇತ್ತೀಚೆಗೆ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.