
ವಿಜಯಪುರ, 08 ಜೂನ್ (ಹಿ.ಸ.) :
ಆಂಕರ್ : ವಿಜಯಪುರ ನಗರದ ಸೊಲ್ಲಾಪುರ ರಸ್ತೆಯಲ್ಲಿರುವ ಬ್ಯಾಂಕ್ ಶಾಖೆಯ ಎದುರು ಹಾಡುಹಗಲೇ ನಡೆದ ವಂಚನೆ ಪ್ರಕರಣವೊಂದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ತುರ್ತಾಗಿ ಹಣದ ಅವಶ್ಯಕತೆ ಇದೆ ಪೋನ್ ಪೇ ಮಾಡುತ್ತೇನೆ ಹಣ ಕೊಡಿ ಎಂದು ನಂಬಿಸಿ ವ್ಯಕ್ತಿಯೊಬ್ಬರಿಂದ ₹18 ಸಾವಿರ ಪಡೆದು ಖದೀಮನೊಬ್ಬ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ.
ಲಭ್ಯವಾದ ಮಾಹಿತಿಯ ಪ್ರಕಾರ, ಬ್ಯಾಂಕ್ ಎದುರು ನಿಂತಿದ್ದ ವ್ಯಕ್ತಿಯೊಬ್ಬನ ಬಳಿ ಅಪರಿಚಿತ ವ್ಯಕ್ತಿ ಬಂದು ತನಗೆ ತುರ್ತಾಗಿ ಹಣದ ಅವಶ್ಯಕತೆ ಇದೆ ಎಂದು ಹೇಳಿದ್ದಾನೆ. ತನ್ನ ಮೊಬೈಲ್ನಿಂದ ಹಣ ವರ್ಗಾವಣೆ ಮಾಡುತ್ತೇನೆ, ನೀವು ನಗದು ನೀಡಿ ಎಂದು ನಂಬಿಸುವ ಪ್ರಯತ್ನ ನಡೆಸಿದ್ದಾನೆ. ಆತನ ಮಾತುಗಳನ್ನು ನಂಬಿದ ವ್ಯಕ್ತಿ ₹18,000 ನಗದು ಹಣವನ್ನು ನೀಡಿದ್ದಾನೆ ಎನ್ನಲಾಗಿದೆ.
ಆದರೆ, ಹಣ ಪಡೆದ ಕೆಲವೇ ಕ್ಷಣಗಳಲ್ಲಿ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಹಣ ವರ್ಗಾವಣೆಯಾಗಿದೆ ಎಂದು ತೋರಿಸಲು ಕೆಲವು ತಂತ್ರಗಳನ್ನು ಬಳಸಿದ್ದಾನೆ ಎನ್ನುವ ಶಂಕೆ ವ್ಯಕ್ತವಾಗಿದ್ದು, ನಂತರ ಖಾತೆಗೆ ಯಾವುದೇ ಹಣ ಜಮೆಯಾಗದಿರುವುದು ತಿಳಿದಾಗ ವಂಚನೆ ನಡೆದಿರುವುದು ಗೊತ್ತಾಗಿದೆ.
ಘಟನೆ ನಡೆದಿರುವ ಸ್ಥಳ ನಗರದ ಪ್ರಮುಖ ವಾಣಿಜ್ಯ ಪ್ರದೇಶವಾಗಿದ್ದು, ದಿನವಿಡೀ ಜನಸಂದಣಿ ಇರುವ ಪ್ರದೇಶದಲ್ಲಿ ಈ ರೀತಿಯ ವಂಚನೆ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಬ್ಯಾಂಕ್ಗೆ ಆಗಮಿಸುವ ಗ್ರಾಹಕರನ್ನು ಗುರಿಯಾಗಿಸಿಕೊಂಡು ಇಂತಹ ಖದೀಮರು ಕಾರ್ಯಾಚರಿಸುತ್ತಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಆದರ್ಶನಗರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಬ್ಯಾಂಕ್ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಆರೋಪಿ ಚಲನವಲನಗಳು ಸಿಸಿಟಿವಿಯಲ್ಲಿ ಸೆರೆಯಾಗಿರುವ ಸಾಧ್ಯತೆ ಇದ್ದು, ತನಿಖೆಗೆ ಇದು ನೆರವಾಗಲಿದೆ ಎಂದು ಹೇಳಲಾಗಿದೆ.
ಪೊಲೀಸರು ಹಾಗೂ ಸಾರ್ವಜನಿಕರು ಬ್ಯಾಂಕ್ ಗ್ರಾಹಕರಿಗೆ ಎಚ್ಚರಿಕೆ ನೀಡಿದ್ದು, ಅಪರಿಚಿತ ವ್ಯಕ್ತಿಗಳ ಮಾತುಗಳನ್ನು ನಂಬಿ ಯಾವುದೇ ಹಣಕಾಸಿನ ವ್ಯವಹಾರ ನಡೆಸಬಾರದು ಎಂದು ಸೂಚಿಸಿದ್ದಾರೆ. ವಿಶೇಷವಾಗಿ ನಗದು ಹಣ ನೀಡುವ ಮುನ್ನ ಬ್ಯಾಂಕ್ ಖಾತೆಗೆ ಹಣ ಜಮೆಯಾಗಿದೆ ಎಂಬುದನ್ನು ಖಚಿತಪಡಿಸಿಕೊಂಡ ನಂತರವೇ ವ್ಯವಹಾರ ನಡೆಸಬೇಕು ಎಂದು ಸಲಹೆ ನೀಡಿದ್ದಾರೆ.
ಈ ಘಟನೆ ನಗರದಲ್ಲಿ ಹೆಚ್ಚುತ್ತಿರುವ ಸೈಬರ್ ಹಾಗೂ ನೇರ ಹಣಕಾಸು ವಂಚನೆ ಪ್ರಕರಣಗಳ ಬಗ್ಗೆ ಮತ್ತೊಮ್ಮೆ ಎಚ್ಚರಿಕೆ ಗಂಟೆ ಮೊಳಗಿಸಿದ್ದು, ಸಾರ್ವಜನಿಕರು ಹೆಚ್ಚಿನ ಜಾಗರೂಕತೆ ವಹಿಸುವ ಅಗತ್ಯವಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande