
ಅಂಚಿಪುರ (ಬಿಡದಿ), 08 ಜೂನ್ (ಹಿ.ಸ.) :
ಆ್ಯಂಕರ್ : ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಬೈರಮಂಗಲ ಹಾಗೂ ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಸ್ತಾವಿತ ಗ್ರೇಟರ್ ಬೆಂಗಳೂರು ಸಮಗ್ರ ಟೌನ್ಶಿಪ್ (ಜಿಬಿಐಟಿ) ಯೋಜನೆ ವಿರುದ್ಧ ಹೋರಾಟ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸಲು ತೆರಳುತ್ತದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಅಂಚಿಪುರ ಗ್ರಾಮದಲ್ಲಿ ರೈತರು ಆತ್ಮೀಯ ಸ್ವಾಗತ ಕೋರಿದರು.
ಈ ಸಂದರ್ಭದಲ್ಲಿ ರೈತರು, ಸರ್ಕಾರದ ಪ್ರಸ್ತಾವಿತ ಟೌನ್ಶಿಪ್ ಯೋಜನೆಯಿಂದ ತಲೆಮಾರುಗಳಿಂದ ಉಳುಮೆ ಮಾಡಿಕೊಂಡು ಬಂದಿರುವ ತಮ್ಮ ಕೃಷಿ ಭೂಮಿಗಳು ಸ್ವಾಧೀನವಾಗುವ ಆತಂಕ ಎದುರಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
ನೂರಾರು ವರ್ಷಗಳಿಂದ ಕೃಷಿ ಚಟುವಟಿಕೆಗಳಿಗೆ ಆಧಾರವಾಗಿರುವ ಭೂಮಿಯನ್ನು ಕಳೆದುಕೊಳ್ಳುವ ಭೀತಿ ಗ್ರಾಮಸ್ಥರಲ್ಲಿ ಹೆಚ್ಚಾಗಿದೆ ಎಂದು ಅವರು ತಿಳಿಸಿದರು.
ರೈತರ ಅಹವಾಲುಗಳನ್ನು ಆಲಿಸಿದ ಯತ್ನಾಳ್ ಅವರು, ಬಿಡದಿ ಭಾಗದ ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದರು.
ರೈತರ ಹಕ್ಕುಗಳ ರಕ್ಷಣೆಗಾಗಿ ವಿಧಾನ ಮಂಡಲದ ಒಳಗೂ ಹೊರಗೂ ಹೋರಾಟ ನಡೆಸುವುದಾಗಿ ಅವರು ಹೇಳಿದರು.
“ರೈತರ ಜೀವನಾಧಾರವಾದ ಭೂಮಿಯನ್ನು ಕಸಿದುಕೊಳ್ಳುವ ಯಾವುದೇ ಕ್ರಮವನ್ನು ನಾವು ವಿರೋಧಿಸುತ್ತೇವೆ. ರೈತರ ಹಿತಾಸಕ್ತಿಗೆ ಧಕ್ಕೆಯಾಗದಂತೆ ಹೋರಾಟ ಮುಂದುವರಿಸಲಾಗುವುದು” ಎಂದು ಯತ್ನಾಳ್ ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.