
ಬೆಂಗಳೂರು, 08 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯ ಸರ್ಕಾರ ಕೃಷಿ ಕ್ಷೇತ್ರದ ಪ್ರಮುಖ ಯೋಜನೆಗಳಿಗೆ ಅನುದಾನ ಕಡಿತಗೊಳಿಸುವ ಮೂಲಕ ರೈತರ ಹಿತಾಸಕ್ತಿಗೆ ಧಕ್ಕೆ ಉಂಟು ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.
ಸಣ್ಣ ನೀರಾವರಿ, ಕೃಷಿ ಯಾಂತ್ರೀಕರಣ ಹಾಗೂ ತಾಡಪತ್ರಿ ವಿತರಣೆಯಂತಹ ಮಹತ್ವದ ಯೋಜನೆಗಳಿಗೆ ಶೇ.50ರಷ್ಟು ಅನುದಾನ ಕಡಿತಗೊಳಿಸಿರುವುದು ರೈತರ ಬೆನ್ನುಮೂಳೆ ಮುರಿಯುವ ಕ್ರಮವಾಗಿದೆ ಎಂದು ಬಿಜೆಪಿ ಟೀಕಿಸಿದೆ.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಉದ್ದೇಶಿಸಿ ಬಿಜೆಪಿ, ಅನ್ನದಾತರ ಬದುಕು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಕೃಷಿ ವಲಯದ ಅನುದಾನ ಕಡಿತಗೊಳಿಸುವುದು ಸರ್ಕಾರದ ರೈತ ವಿರೋಧಿ ಧೋರಣೆಯನ್ನು ತೋರಿಸುತ್ತದೆ ಎಂದು ಆರೋಪಿಸಿದೆ.
ಕೇಂದ್ರ ಸರ್ಕಾರದಿಂದ ದೊರೆಯುವ ಅನುದಾನವನ್ನು ಮಾತ್ರ ಬಳಸಿಕೊಂಡು, ರಾಜ್ಯ ಸರ್ಕಾರ ತನ್ನ ಪಾಲಿನ ಹಣವನ್ನು ಸಮರ್ಪಕವಾಗಿ ಬಿಡುಗಡೆ ಮಾಡುತ್ತಿಲ್ಲ. ಇದರಿಂದ ರೈತರು ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ಹೇಳಿದೆ.
ಒಂದು ಕಡೆ ರೈತಪರ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಸರ್ಕಾರ, ಮತ್ತೊಂದು ಕಡೆ ಕೃಷಿ ಕ್ಷೇತ್ರದ ಯೋಜನೆಗಳಿಗೆ ಅನುದಾನ ಕಡಿತಗೊಳಿಸಿ ರೈತರನ್ನು ಸಂಕಷ್ಟಕ್ಕೆ ದೂಡುತ್ತಿದೆ. “ಒಂದು ಕೈಯಲ್ಲಿ ಕೊಟ್ಟು, ಇನ್ನೊಂದು ಕೈಯಲ್ಲಿ ಕಸಿದುಕೊಳ್ಳುವುದೇ ಕಾಂಗ್ರೆಸ್ನ ನಿಜವಾದ ಗ್ಯಾರಂಟಿ” ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ರಾಜ್ಯದ ರೈತರ ಹಿತಾಸಕ್ತಿಯನ್ನು ಕಾಪಾಡಲು ಕೃಷಿ ಇಲಾಖೆಯ ಯೋಜನೆಗಳಿಗೆ ಪೂರ್ಣ ಪ್ರಮಾಣದ ಅನುದಾನ ಒದಗಿಸಬೇಕು ಹಾಗೂ ಬಾಕಿ ಇರುವ ರಾಜ್ಯದ ಪಾಲಿನ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಬಿಜೆಪಿ ಸರ್ಕಾರವನ್ನು ಆಗ್ರಹಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.