
ವಿಜಯಪುರ, 08 ಜೂನ್ (ಹಿ.ಸ.) :
ಆಂಕರ್ : ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಶಿವಾನಂದ ಪಾಟೀಲ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಿ ಕ್ಷೇತ್ರದ ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿ ಬಳಗದ ವತಿಯಿಂದ ಬೃಹತ್ ಹೋರಾಟ ಮತ್ತು ಹಕ್ಕೊತ್ತಾಯ ಪ್ರದರ್ಶನ ನಡೆಯಿತು.
ಹೋರಾಟದ ಆರಂಭಕ್ಕೂ ಮುನ್ನ ಬಸವನಬಾಗೇವಾಡಿಯ ಐತಿಹಾಸಿಕ ಶ್ರೀ ಬಸವೇಶ್ವರ ದೇವಾಲಯದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಒಗ್ಗೂಡಿ, ಜಗಜ್ಯೋತಿ ಬಸವಣ್ಣನವರ ಜನ್ಮಸ್ಥಳದ ಮೂಲನಂದೀಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು. ಶಿವಾನಂದ ಪಾಟೀಲ್ ಅವರ ರಾಜಕೀಯ ಯಶಸ್ಸು ಹಾಗೂ ಕ್ಷೇತ್ರದ ಅಭಿವೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದ ಬಳಿಕ, ಅಲ್ಲಿಂದಲೇ ಬೃಹತ್ ಪ್ರತಿಭಟನಾ ಮೆರವಣಿಗೆಯ ಮೂಲಕ ಹೋರಾಟದ ವೇದಿಕೆಯನ್ನು ತಲುಪಿದರು.
ಮೆರವಣಿಗೆಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಶಿವಾನಂದ ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಘೋಷಣೆಗಳನ್ನು ಕೂಗಿ ಸರ್ಕಾರ ಹಾಗೂ ಪಕ್ಷದ ಹೈಕಮಾಂಡ್ ಗಮನ ಸೆಳೆಯುವ ಪ್ರಯತ್ನ ನಡೆಸಿದರು. ಪ್ರತಿಭಟನೆಯಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಜನರು, ಮುಖಂಡರು ಹಾಗೂ ಮಹಿಳೆಯರು ಸಹ ಭಾಗವಹಿಸಿದ್ದು ವಿಶೇಷವಾಗಿತ್ತು.
ಹೋರಾಟದ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಶಂಕರಗೌಡ ಬಿರಾದಾರ, ಶಿವಾನಂದ ಪಾಟೀಲ್ ಅವರು ಉತ್ತರ ಕರ್ನಾಟಕ ಭಾಗದ ಪ್ರಭಾವಿ ನಾಯಕರು ಹಾಗೂ ಅನುಭವಿ ರಾಜಕಾರಣಿಯಾಗಿದ್ದು, ತಮ್ಮ ಸಚಿವ ಅವಧಿಯಲ್ಲಿ ಹಾಗೂ ಶಾಸಕರಾಗಿ ಕ್ಷೇತ್ರದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.
“ಶಿವಾನಂದ ಪಾಟೀಲ್ ಅವರು ಸುದೀರ್ಘ ರಾಜಕೀಯ ಅನುಭವ ಹೊಂದಿದ್ದು, ಉತ್ತರ ಕರ್ನಾಟಕದ ಜನರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಾ ಬಂದಿದ್ದಾರೆ. ಪಕ್ಷದ ಸಂಘಟನೆ ಬಲವರ್ಧನೆಗೆ ಅವರು ನೀಡಿರುವ ಕೊಡುಗೆ ಅಪಾರವಾಗಿದೆ. ಈ ಭಾಗದ ಸಮಗ್ರ ಅಭಿವೃದ್ಧಿ ಹಾಗೂ ಜನರ ಆಶೋತ್ತರಗಳಿಗೆ ಸ್ಪಂದಿಸಲು ಸಚಿವ ಸಂಪುಟದಲ್ಲಿ ಅವರಿಗೆ ಸ್ಥಾನ ನೀಡುವುದು ಅತ್ಯಗತ್ಯವಾಗಿದೆ,” ಎಂದು ಅಭಿಪ್ರಾಯಪಟ್ಟರು.
ಇದು ಕೇವಲ ಅಭಿಮಾನಿಗಳ ಬೇಡಿಕೆಯಲ್ಲ, ಬಸವನಬಾಗೇವಾಡಿ ಕ್ಷೇತ್ರದ ಜನರ ಸಮೂಹದ ಆಶಯವಾಗಿದೆ. ಸರ್ಕಾರ ಮತ್ತು ಪಕ್ಷದ ಹೈಕಮಾಂಡ್ ಜನರ ಭಾವನೆಗಳಿಗೆ ಗೌರವ ನೀಡಿ ತಕ್ಷಣವೇ ಶಿವಾನಂದ ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡುವ ಕುರಿತು ಸಕಾರಾತ್ಮಕ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹಲವಾರು ಮುಖಂಡರು ಮತ್ತು ಕಾರ್ಯಕರ್ತರು ಮಾತನಾಡಿ, ಉತ್ತರ ಕರ್ನಾಟಕ ಭಾಗಕ್ಕೆ ಸಚಿವ ಸಂಪುಟದಲ್ಲಿ ಸಮರ್ಪಕ ಪ್ರಾತಿನಿಧ್ಯ ದೊರಕಬೇಕಿದ್ದು, ಆ ನಿಟ್ಟಿನಲ್ಲಿ ಶಿವಾನಂದ ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡುವುದು ನ್ಯಾಯಸಮ್ಮತ ಕ್ರಮವಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ಯುವ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಹೋರಾಟ ಶಾಂತಿಯುತವಾಗಿ ನಡೆಯಿತು.
ಕ್ಷೇತ್ರದ ಅಭಿವೃದ್ಧಿ, ಜನಪರ ಆಡಳಿತ ಹಾಗೂ ಉತ್ತರ ಕರ್ನಾಟಕದ ಪ್ರಾತಿನಿಧ್ಯದ ವಿಚಾರವನ್ನು ಮುಂದಿಟ್ಟುಕೊಂಡು ನಡೆದ ಈ ಬೃಹತ್ ಹಕ್ಕೊತ್ತಾಯ ಹೋರಾಟವು ರಾಜಕೀಯ ವಲಯದಲ್ಲಿ ಸಾಕಷ್ಟು ಗಮನ ಸೆಳೆದಿದೆ. ಸಚಿವ ಸಂಪುಟ ವಿಸ್ತರಣೆಯ ಕುರಿತು ನಡೆಯುತ್ತಿರುವ ಚರ್ಚೆಗಳ ನಡುವೆ ಈ ಬೇಡಿಕೆ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande