
ಗದಗ, 08 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ಬೆನ್ನಲ್ಲೇ ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಬೇಕೆಂಬ ಒತ್ತಾಯ ಗದಗ ಜಿಲ್ಲೆಯಲ್ಲಿ ಬಿರುಸುಗೊಂಡಿದೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಹೋರಾಟಗಳು ಇದೀಗ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾರ್ಯಕರ್ತರು ಹಾಗೂ ಬೆಂಬಲಿಗರು ಭಾನುವಾರ ಗದಗ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಗದಗ ನಗರದ ಪುಟ್ಟರಾಜ ಗವಾಯಿಗಳ ವೃತ್ತದಿಂದ ಗವಾಯಿಗಳ ಮಠದವರೆಗೆ ನಡೆದ ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು, ಮಹಿಳೆಯರು ಹಾಗೂ ಯುವಕರು ಭಾಗವಹಿಸಿದರು. ಡೊಳ್ಳು ಕುಣಿತ, ವಿವಿಧ ಜಾನಪದ ವಾದ್ಯಗಳ ಅಬ್ಬರ ಮತ್ತು ಘೋಷಣೆಗಳ ಮೂಲಕ ಪ್ರತಿಭಟನಾಕಾರರು ತಮ್ಮ ಬೇಡಿಕೆಯನ್ನು ಸರ್ಕಾರ ಹಾಗೂ ಕಾಂಗ್ರೆಸ್ ಹೈಕಮಾಂಡ್ ಗಮನಕ್ಕೆ ತರಲು ಪ್ರಯತ್ನಿಸಿದರು. ವಿಶೇಷವಾಗಿ ನೂರಕ್ಕೂ ಹೆಚ್ಚು ಕಾರ್ಯಕರ್ತರು ಉರುಳು ಸೇವೆ ಹಾಗೂ ದೀರ್ಘದಂಡ ನಮಸ್ಕಾರ ಸಲ್ಲಿಸುವ ಮೂಲಕ ಶಾಸಕ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡುವಂತೆ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದು ಗಮನ ಸೆಳೆಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡರು, ರೋಣ ಕ್ಷೇತ್ರಕ್ಕೆ ಕಳೆದ ನಾಲ್ಕು ದಶಕಗಳಿಂದ ಸಚಿವ ಸ್ಥಾನ ದೊರೆಯದೇ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು. ಜಿಲ್ಲೆಯ ರಾಜಕೀಯ ಇತಿಹಾಸವನ್ನು ಗಮನಿಸಿದರೆ ರೋಣ ಕ್ಷೇತ್ರಕ್ಕೆ ಸೂಕ್ತ ಪ್ರಾತಿನಿಧ್ಯ ಸಿಕ್ಕಿಲ್ಲ. ಈ ಬಾರಿ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡುವುದು ನ್ಯಾಯಸಮ್ಮತವಾಗಿದ್ದು, ಕ್ಷೇತ್ರದ ಜನರ ಬಹುದಿನಗಳ ಬೇಡಿಕೆಯನ್ನು ಈಡೇರಿಸಬೇಕಾಗಿದೆ ಎಂದು ಒತ್ತಾಯಿಸಿದರು.
ರಾಜ್ಯ ಸಚಿವ ಸಂಪುಟದಲ್ಲಿ ಗದಗ ಜಿಲ್ಲೆಯ ಪ್ರತಿನಿಧಿತ್ವದ ವಿಚಾರದಲ್ಲಿ ಮಾಜಿ ಸಚಿವ ಎಚ್.ಕೆ. ಪಾಟೀಲ ಹಾಗೂ ಶಾಸಕ ಜಿ.ಎಸ್. ಪಾಟೀಲ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಇಬ್ಬರ ಬೆಂಬಲಿಗರ ನಡುವೆ ರಾಜಕೀಯ ಚರ್ಚೆಗಳು ತೀವ್ರಗೊಂಡಿದ್ದು, ಸಚಿವ ಸ್ಥಾನಕ್ಕಾಗಿ ಪೈಪೋಟಿಯ ವಾತಾವರಣ ನಿರ್ಮಾಣವಾಗಿದೆ. ಆದರೆ ರೋಣ ಕ್ಷೇತ್ರದ ಕಾರ್ಯಕರ್ತರು ಮಾತ್ರ ಈ ಬಾರಿ ತಮ್ಮ ಕ್ಷೇತ್ರಕ್ಕೆ ಆದ್ಯತೆ ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ.
ಜಿ.ಎಸ್. ಪಾಟೀಲ ಅವರು ನಿರಂತರವಾಗಿ ನಾಲ್ಕು ಬಾರಿ ಜನರ ಆಶೀರ್ವಾದದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಇಂತಹ ಸಂದರ್ಭದಲ್ಲಿ ಅವರಿಗೆ ಸಚಿವ ಸ್ಥಾನ ನೀಡದೇ ಹೋದರೆ ಅದು ರೋಣ ಕ್ಷೇತ್ರದ ಜನತೆಗೆ ಮಾಡಿದ ಅನ್ಯಾಯವಾಗಲಿದೆ ಎಂದು ಪ್ರತಿಭಟನಾಕಾರರು ಅಭಿಪ್ರಾಯಪಟ್ಟರು.
ಪ್ರತಿಭಟನೆಯ ವೇಳೆ ಕಾಂಗ್ರೆಸ್ ಹೈಕಮಾಂಡ್ ವಿರುದ್ಧವೂ ಅಸಮಾಧಾನದ ಧ್ವನಿಗಳು ಕೇಳಿ ಬಂದವು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಜ್ಯ ನಾಯಕತ್ವದ ಗಮನಕ್ಕೆ ಈ ಬೇಡಿಕೆಯನ್ನು ತರುವ ಉದ್ದೇಶದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡರು ತಿಳಿಸಿದರು. ಸಚಿವ ಸ್ಥಾನ ಹಂಚಿಕೆಯಲ್ಲಿ ಉತ್ತರ ಕರ್ನಾಟಕ ಹಾಗೂ ಗದಗ ಜಿಲ್ಲೆಯ ಹಿತಾಸಕ್ತಿಯನ್ನು ಪರಿಗಣಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಈ ಬಾರಿ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡದಿದ್ದಲ್ಲಿ ಹೋರಾಟವನ್ನು ಮತ್ತಷ್ಟು ಉಗ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಅಗತ್ಯವಿದ್ದರೆ ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಿ ರಾಜ್ಯ ಮಟ್ಟದ ಹೋರಾಟ ರೂಪಿಸಲಾಗುವುದು ಎಂದು ಹೇಳಿದರು.
ರೋಣ ಕ್ಷೇತ್ರಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ, ಕ್ಷೇತ್ರದ ಜನರ ಆಶಯಕ್ಕೆ ಸ್ಪಂದಿಸುವಂತೆ ಸರ್ಕಾರ ಹಾಗೂ ಕಾಂಗ್ರೆಸ್ ನಾಯಕತ್ವಕ್ಕೆ ಮನವಿ ಮಾಡಿದರು.
ಒಟ್ಟಾರೆಯಾಗಿ ಸಚಿವ ಸಂಪುಟ ವಿಸ್ತರಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಗದಗ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ರೋಣ ಶಾಸಕ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಬೇಕೆಂಬ ಬೇಡಿಕೆ ದಿನದಿಂದ ದಿನಕ್ಕೆ ಬಲ ಪಡೆದುಕೊಳ್ಳುತ್ತಿದೆ.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ನಾಯಕತ್ವ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಹಿಂದೂಸ್ತಾನ್ ಸಮಾಚಾರ್ / lalita MP