ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಅಗತ್ಯವಿಲ್ಲ : ವಿಜಯೇಂದ್ರ
ಎನ್ಡಿಎ
ByV


ಬೆಂಗಳೂರು, 09 ಜೂನ್ (ಹಿ.ಸ.) :

ಆ್ಯಂಕರ್ : ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಕುರಿತು ಕಾಂಗ್ರೆಸ್ ನಾಯಕರು ವ್ಯಕ್ತಪಡಿಸುತ್ತಿರುವ ಕಾಳಜಿ ಕೃತಕವಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ದೇವೇಗೌಡರ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ ಅವರು, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ದೇವೇಗೌಡರ ಕುರಿತು ಮೊಸಳೆ ಕಣ್ಣೀರು ಸುರಿಸುವ ಅಗತ್ಯವಿಲ್ಲ ಎಂದು ಟೀಕಿಸಿದ್ದಾರೆ.

ದೇಶದ ಅತ್ಯುನ್ನತ ಪ್ರಧಾನಿ ಹುದ್ದೆಯನ್ನು ಅಲಂಕರಿಸಿದ್ದ ಹೆಮ್ಮೆಯ ಕನ್ನಡಿಗ ಎಚ್.ಡಿ. ದೇವೇಗೌಡರನ್ನು ಪ್ರಧಾನಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಕುಖ್ಯಾತಿ ಕಾಂಗ್ರೆಸ್ ಪಕ್ಷದ ಮೇಲಿದೆ. ದೇವೇಗೌಡರ ರಾಜಕೀಯ ಜೀವನದುದ್ದಕ್ಕೂ ಅವರನ್ನು ಕಾಡಿದ್ದು ಹಾಗೂ ಅವರ ಪಕ್ಷವನ್ನು ವಿಭಜಿಸಲು ಪ್ರಯತ್ನಿಸಿದ್ದು ಕಾಂಗ್ರೆಸ್ ಪಕ್ಷವೇ ಎಂಬುದನ್ನು ಕಾಂಗ್ರೆಸ್ ನಾಯಕರು ಮರೆತಂತಿದೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.

ಇಷ್ಟಾದರೂ ಕೊಳಕು ರಾಜಕಾರಣವನ್ನು ನಿಲ್ಲಿಸದ ಕಾಂಗ್ರೆಸ್ ನಾಯಕರು ದೇವೇಗೌಡರ ಬಗ್ಗೆ ಕೃತಕ ಕಾಳಜಿ ವ್ಯಕ್ತಪಡಿಸುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಅವರು ಹೇಳಿದ್ದಾರೆ.

ಭಾರತೀಯ ಜನತಾ ಪಾರ್ಟಿಯು ದೇವೇಗೌಡರನ್ನು ಅತ್ಯಂತ ಗೌರವದಿಂದ ನಡೆಸಿಕೊಂಡಿದೆ. ದೇಶದ ಸಮಗ್ರತೆ ಮತ್ತು ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಅಗತ್ಯ ಎಂಬ ನಂಬಿಕೆಯಿಂದ ದೇವೇಗೌಡರು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌.ಡಿ.ಎ)ವನ್ನು ಬೆಂಬಲಿಸಿ, ಜೆಡಿಎಸ್ ಪಕ್ಷವನ್ನು ಮೈತ್ರಿಕೂಟಕ್ಕೆ ಸೇರಿಸಿದ್ದಾರೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.

ಈ ಬೆಳವಣಿಗೆಯನ್ನು ಸಹಿಸಿಕೊಳ್ಳಲಾಗದ ಕಾಂಗ್ರೆಸ್ ನಾಯಕರು ದೇವೇಗೌಡರ ಹೆಸರನ್ನು ಬಳಸಿಕೊಂಡು ರಾಜಕೀಯ ಮಾಡಲು ಮುಂದಾಗಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಅವರು ಟೀಕಿಸಿದ್ದಾರೆ.

ಸಂಸತ್ತಿನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ದೇವೇಗೌಡರ ಹಿರಿತನ, ಅನುಭವ ಮತ್ತು ದೇಶಕ್ಕೆ ನೀಡಿದ ಕೊಡುಗೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ರಾಷ್ಟ್ರದ ಮುನ್ನಡೆಯ ವಿಚಾರದಲ್ಲಿ ದೇವೇಗೌಡರ ಮಾರ್ಗದರ್ಶನ ಅಗತ್ಯವೆಂದು ಪ್ರಧಾನಿ ಹೇಳಿರುವುದನ್ನು ಉಲ್ಲೇಖಿಸಿದ ವಿಜಯೇಂದ್ರ, ಬಿಜೆಪಿ ಮತ್ತು ದೇವೇಗೌಡರ ನಡುವಿನ ರಾಜಕೀಯ ಹಾಗೂ ವೈಯಕ್ತಿಕ ಗೌರವದ ಸಂಬಂಧಕ್ಕೆ ಹುಳಿ ಹಿಂಡುವ ಪ್ರಯತ್ನ ಕಾಂಗ್ರೆಸ್ನ ವಿಕೃತ ರಾಜಕಾರಣವನ್ನು ಪ್ರತಿಬಿಂಬಿಸುತ್ತದೆ ಎಂದು ಆರೋಪಿಸಿದ್ದಾರೆ.

ಕರ್ನಾಟಕದ ಜನತೆ ಈ ಎಲ್ಲ ಬೆಳವಣಿಗೆಗಳನ್ನು ಗಮನಿಸುತ್ತಿದ್ದು, ಕಾಂಗ್ರೆಸ್ನ ರಾಜಕೀಯ ಉದ್ದೇಶಗಳನ್ನು ಅರ್ಥಮಾಡಿಕೊಳ್ಳುವಷ್ಟು ಪ್ರಬುದ್ಧರಾಗಿದ್ದಾರೆ ಎಂದು ವಿಜಯೇಂದ್ರ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande