ಕೆ.ಆರ್. ಮಾರುಕಟ್ಟೆಗೆ ಜಿಬಿಎ ಆಯುಕ್ತ ಮಹೇಶ್ವರ ರಾವ್ ಭೇಟಿ
ಬೆಂಗಳೂರು, 09 ಜೂನ್ (ಹಿ.ಸ.) : ಆ್ಯಂಕರ್ : ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಐತಿಹಾಸಿಕ ಕೆ.ಆರ್. ಮಾರುಕಟ್ಟೆಗೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಅವರು ಇಂದು ಬೆಳಿಗ್ಗೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಿದರು. ಮಾರುಕಟ್ಟೆಯಲ್ಲಿ ಸಂಭವಿಸಬಹುದಾದ ಅಗ್ನಿ ಅವಘಡಗಳನ್ನು ತಡೆಗಟ್ಟುವ ಉದ
Visit


ಬೆಂಗಳೂರು, 09 ಜೂನ್ (ಹಿ.ಸ.) :

ಆ್ಯಂಕರ್ : ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಐತಿಹಾಸಿಕ ಕೆ.ಆರ್. ಮಾರುಕಟ್ಟೆಗೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಅವರು ಇಂದು ಬೆಳಿಗ್ಗೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಿದರು. ಮಾರುಕಟ್ಟೆಯಲ್ಲಿ ಸಂಭವಿಸಬಹುದಾದ ಅಗ್ನಿ ಅವಘಡಗಳನ್ನು ತಡೆಗಟ್ಟುವ ಉದ್ದೇಶದಿಂದ ತಕ್ಷಣವೇ ಫೈರ್ ಆಡಿಟ್ ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪರಿಶೀಲನೆ ವೇಳೆ ಮಾರುಕಟ್ಟೆಯ ಸುರಕ್ಷತೆ, ಸ್ವಚ್ಛತೆ, ಮೂಲಸೌಕರ್ಯ ಮತ್ತು ಸಂಚಾರ ವ್ಯವಸ್ಥೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಮುಖ್ಯ ಆಯುಕ್ತರು, ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡುವಂತೆ ಸೂಚಿಸಿದರು.

ಅಗ್ನಿ ಸುರಕ್ಷತೆಗೆ ವಿಶೇಷ ಒತ್ತು

ಮಾರುಕಟ್ಟೆಯಲ್ಲಿ ಅಗ್ನಿ ಅವಘಡಗಳ ಸಾಧ್ಯತೆಯನ್ನು ಕಡಿಮೆಗೊಳಿಸಲು ಸಮಗ್ರ ಫೈರ್ ಆಡಿಟ್ ಕೈಗೊಳ್ಳಬೇಕು. ಜೊತೆಗೆ ತುರ್ತು ನಿರ್ಗಮನ ವ್ಯವಸ್ಥೆಯನ್ನು ಸುಧಾರಿಸಿ, ಅಗ್ನಿಶಾಮಕ ಪೈಪ್ಗಳು ಹಾಗೂ ಅಗತ್ಯ ಸುರಕ್ಷತಾ ಸಾಧನಗಳನ್ನು ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಮಳಿಗೆಗಳ ಮುಂಭಾಗದಲ್ಲಿ ಕಂಡುಬರುವ ಅತಿಕ್ರಮಣಗಳನ್ನು ತೆರವುಗೊಳಿಸಿ, ನಿಯಮ ಉಲ್ಲಂಘಿಸುವವರ ವಿರುದ್ಧ ದುಪ್ಪಟ್ಟು ದಂಡ ವಿಧಿಸುವಂತೆ ಸೂಚಿಸಲಾಯಿತು. ವ್ಯಾಪಾರಿಗಳು ನಿಗದಿತ ಸ್ಥಳಗಳಲ್ಲಿಯೇ ವ್ಯಾಪಾರ ನಡೆಸುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆಯೂ ನಿರ್ದೇಶನ ನೀಡಲಾಯಿತು.

ಸ್ವಚ್ಛತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ

ಶಿಥಿಲಾವಸ್ಥೆಯಲ್ಲಿರುವ ಶೌಚಾಲಯಗಳನ್ನು ತೆರವುಗೊಳಿಸಿ ಸಮರ್ಪಕ ನಿರ್ವಹಣೆ ಕೈಗೊಳ್ಳಬೇಕು. ಸಂಪೂರ್ಣ ಮಾರುಕಟ್ಟೆಯನ್ನು ನೀರಿನಿಂದ ಸ್ವಚ್ಛಗೊಳಿಸಿ ನಿರಂತರ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಮಳೆಗಾಲದ ಹಿನ್ನೆಲೆಯಲ್ಲಿ ಮಳೆನೀರು ಸೋರಿಕೆಯನ್ನು ತಡೆಗಟ್ಟಲು ಲೀಕೇಜ್-ಪ್ರೂಫ್ ವ್ಯವಸ್ಥೆ ರೂಪಿಸುವುದರ ಜೊತೆಗೆ ಥರ್ಮೋಪ್ಲಾಸ್ಟಿಕ್ ಪೇಂಟಿಂಗ್ ಕಾರ್ಯಗಳನ್ನು ಕೈಗೊಳ್ಳುವಂತೆ ತಿಳಿಸಲಾಯಿತು. ಪ್ರಸ್ತುತ ಬಳಕೆಯಾಗದೇ ಇರುವ ಮೂರನೇ ಮಹಡಿಯನ್ನು ಸಾರ್ವಜನಿಕ ಉಪಯೋಗಕ್ಕಾಗಿ ಸದ್ಬಳಕೆ ಮಾಡುವ ಕುರಿತು ಯೋಜನೆ ರೂಪಿಸುವಂತೆ ಸೂಚನೆ ನೀಡಲಾಯಿತು.

ಪಾರ್ಕಿಂಗ್ ವ್ಯವಸ್ಥೆಗೆ ಸಾರ್ವಜನಿಕರ ಮೆಚ್ಚುಗೆ

ಕೆ.ಆರ್. ಮಾರುಕಟ್ಟೆಯಲ್ಲಿ ಈಗಾಗಲೇ ಜಾರಿಗೆ ತಂದಿರುವ ಅತ್ಯಾಧುನಿಕ ಪಾರ್ಕಿಂಗ್ ವ್ಯವಸ್ಥೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಸುಮಾರು 200 ಕಾರುಗಳು ಹಾಗೂ 400 ದ್ವಿಚಕ್ರ ವಾಹನಗಳನ್ನು ನಿಲುಗಡೆ ಮಾಡುವ ಸಾಮರ್ಥ್ಯದ ಪಾರ್ಕಿಂಗ್ ವ್ಯವಸ್ಥೆ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಇತರೆ ಪ್ರಮುಖ ನಿರ್ದೇಶನಗಳು

ಮಾರುಕಟ್ಟೆ ಪ್ರದೇಶದಲ್ಲಿನ ಅನಧಿಕೃತ ಪಾರ್ಕಿಂಗ್ ತೆರವುಗೊಳಿಸುವುದು, ಚರಂಡಿ ವ್ಯವಸ್ಥೆ ಸುಧಾರಿಸುವುದು, ನೀರು ನಿಲ್ಲುವ ಪ್ರದೇಶಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸುವುದು ಹಾಗೂ ತ್ಯಾಜ್ಯ ವಿಲೇವಾರಿ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಿರ್ವಹಿಸುವಂತೆ ಸೂಚಿಸಲಾಯಿತು. ಮಾರುಕಟ್ಟೆಯ ಮಧ್ಯಭಾಗದಲ್ಲಿರುವ ಫೆನ್ಸಿಂಗ್ ತೆರವುಗೊಳಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ನಿರ್ದೇಶನ ನೀಡಲಾಯಿತು.

ಪರಿಶೀಲನೆ ವೇಳೆ ಕೇಂದ್ರ ನಗರ ಪಾಲಿಕೆ ಆಯುಕ್ತ ಜಿ. ಜಗದೀಶ್, ಅಭಿವೃದ್ಧಿ ಅಪರ ಆಯುಕ್ತ ವೆಂಕಟಾ ಚಲಪತಿ, ಜಂಟಿ ಆಯುಕ್ತ ಹೇಮಂತ್ ಶರಣ್, ಮುಖ್ಯ ಅಭಿಯಂತರ ವಿಜಯ್ ಕುಮಾರ್ ಹರಿದಾಸ್, ಅಧೀಕ್ಷಕ ಅಭಿಯಂತರರು, ಡಿಜಿಎಂ ಹಾಗೂ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande