
ಬೆಂಗಳೂರು, 09 ಜೂನ್ (ಹಿ.ಸ.) :
ಆ್ಯಂಕರ್ : ಕರ್ನಾಟಕದಿಂದ ರಾಜ್ಯ ಸಭೆಯ ನಾಲ್ಕು ಸ್ಥಾನಗಳಿಗೆ ಸ್ಪರ್ಧಿಸಿದ್ದ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವುದು ಖಚಿತಗೊಂಡಿದೆ. ಕಾಂಗ್ರೆಸ್ ನ ಮೂವರು ಹಾಗೂ ಬಿಜೆಪಿಯ ಓರ್ವ ಅಭ್ಯರ್ಥಿಯ ನಾಮಪತ್ರಗಳು ಮಾನ್ಯಗೊಂಡಿರುವ ಹಿನ್ನೆಲೆಯಲ್ಲಿ ಚುನಾವಣೆಯ ಅಗತ್ಯವೇ ಇಲ್ಲದಂತಾಗಿದೆ. ನಾಮಪತ್ರ ವಾಪಸ್ ಪಡೆಯುವ ಅವಧಿ ಮುಕ್ತಾಯವಾದ ಬಳಿಕ ಅಧಿಕೃತ ಘೋಷಣೆ ಹೊರಬೀಳಲಿದೆ.
ರಾಜ್ಯ ಸಭೆ ಚುನಾವಣೆಗೆ ಕಾಂಗ್ರೆಸ್ ಪರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರೀಯ ವಕ್ತಾರ ಪವನ್ ಖೇರಾ ಹಾಗೂ ಮನ್ಸೂರ್ ಅಲಿ ಖಾನ್ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ ಅಭ್ಯರ್ಥಿಯಾಗಿ ಪ್ರೊ. ಎಂ. ನಾಗರಾಜ್ ಕಣಕ್ಕಿಳಿದಿದ್ದರು. ಈ ನಾಲ್ವರು ಅಭ್ಯರ್ಥಿಗಳ ನಾಮಪತ್ರಗಳನ್ನು ಚುನಾವಣಾಧಿಕಾರಿ ಕೆ.ಎಂ. ವಿಶಾಲಾಕ್ಷಿ ಮಂಗಳವಾರ ಪರಿಶೀಲನೆ ನಡೆಸಿದ್ದು, ಎಲ್ಲವೂ ಕ್ರಮಬದ್ಧವಾಗಿರುವುದು ದೃಢಪಟ್ಟಿದೆ.
ಇದೇ ವೇಳೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಭೋಜಣ್ಣ ಸೋಮಣ್ಣ ಅವರ ಅರ್ಜಿಯನ್ನು ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದಾರೆ. ನಾಮಪತ್ರಕ್ಕೆ ಅಗತ್ಯವಾದ ಅನುಮೋದಕರ ಸಹಿಗಳು ಇಲ್ಲದ ಕಾರಣ ಅವರ ಸ್ಪರ್ಧೆಯನ್ನು ಅಮಾನ್ಯಗೊಳಿಸಲಾಗಿದೆ.
ಕರ್ನಾಟಕ ವಿಧಾನ ಸಭೆಯಿಂದ ರಾಜ್ಯ ಸಭೆಗೆ ನಾಲ್ಕು ಸದಸ್ಯರನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಒಟ್ಟು ಐದು ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಅವುಗಳಲ್ಲಿ ಪಕ್ಷೇತರ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಉಳಿದ ನಾಲ್ಕು ಅಭ್ಯರ್ಥಿಗಳು ಮಾತ್ರ ಸ್ಪರ್ಧೆಯಲ್ಲಿ ಉಳಿದಿದ್ದಾರೆ. ನಾಲ್ಕು ಸ್ಥಾನಗಳಿಗೆ ನಾಲ್ವರು ಅಭ್ಯರ್ಥಿಗಳೇ ಇರುವುದರಿಂದ ಯಾವುದೇ ಮತದಾನದ ಅಗತ್ಯವಿಲ್ಲದೆ ಅವಿರೋಧ ಆಯ್ಕೆ ಖಚಿತವಾಗಿದೆ. ಇದರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಮೂರು ಸ್ಥಾನಗಳು ಹಾಗೂ ಬಿಜೆಪಿ ಪಕ್ಷಕ್ಕೆ ಒಂದು ಸ್ಥಾನ ದೊರೆತಂತಾಗಿದೆ.
ಜೂನ್ 11ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಅಂದು ಯಾವುದೇ ಅಭ್ಯರ್ಥಿ ನಾಮಪತ್ರ ಹಿಂಪಡೆಯದಿದ್ದಲ್ಲಿ, ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ, ಮನ್ಸೂರ್ ಅಲಿ ಖಾನ್ ಹಾಗೂ ಎಂ. ನಾಗರಾಜ್ ಅವರ ಆಯ್ಕೆಯನ್ನು ಚುನಾವಣಾಧಿಕಾರಿಗಳು ಅಧಿಕೃತವಾಗಿ ಪ್ರಕಟಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.