
ಬೆಂಗಳೂರು, 09 ಜೂನ್ (ಹಿ.ಸ.) :
ಆ್ಯಂಕರ್ : ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾಗಿದ್ದ ಸೂರಜ್ ಹೆಗ್ಡೆ ಅವರ ನಿಧನಕ್ಕೆ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಲೋಕ ಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸೂರಜ್ ಹೆಗ್ಡೆ ಅವರ ನಿವಾಸಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು.
ದೆಹಲಿಯಿಂದ ಬೆಳಿಗ್ಗೆ ಬೆಂಗಳೂರಿಗೆ ಆಗಮಿಸಿದ ರಾಹುಲ್ ಗಾಂಧಿ ಅವರು ಹೆಗ್ಡೆ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಕೆ.ಸಿ. ವೇಣುಗೋಪಾಲ್ ಸೇರಿದಂತೆ ಹಲವು ಹಿರಿಯ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.
ಸೂರಜ್ ಹೆಗ್ಡೆ ಅವರು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಮೊಮ್ಮಗ. ಜೂನ್ 7ರಂದು ತೀವ್ರ ಹೃದಯಾಘಾತಕ್ಕೊಳಗಾದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು.
ಕಾಂಗ್ರೆಸ್ ಸಂಘಟನೆಯಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಸೂರಜ್ ಹೆಗ್ಡೆ ಅವರು ಎಐಸಿಸಿ ಕಾರ್ಯದರ್ಶಿಯಾಗಿ, ಕೆಪಿಸಿಸಿ ಉಪಾಧ್ಯಕ್ಷರಾಗಿ ಹಾಗೂ ತಮಿಳು ನಾಡು ಮತ್ತು ಪುದುಚೇರಿ ಕಾಂಗ್ರೆಸ್ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದರು. ಹಿಂದುಳಿದ ವರ್ಗಗಳ ಕಲ್ಯಾಣ, ಕಾರ್ಮಿಕರ ಹಕ್ಕುಗಳ ರಕ್ಷಣೆ ಹಾಗೂ ಸಾಮಾಜಿಕ ನ್ಯಾಯದ ಪರ ಹೋರಾಟಗಳಲ್ಲಿ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.