ರಾಜಸ್ಥಾನದ ದೌಸಾದಲ್ಲಿ ಭೀಕರ ರಸ್ತೆ ಅಪಘಾತ: ೭ಮಂದಿ ಸಾವು
ದೌಸಾ, 01 ಜುಲೈ (ಹಿ.ಸ.): ಆ್ಯಂಕರ್: ರಾಜಸ್ಥಾನದ ದೌಸಾ ಜಿಲ್ಲೆಯ ದೆಹಲಿ–ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದು, 22 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದೌಸಾ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊ
Accident


ದೌಸಾ, 01 ಜುಲೈ (ಹಿ.ಸ.):

ಆ್ಯಂಕರ್:

ರಾಜಸ್ಥಾನದ ದೌಸಾ ಜಿಲ್ಲೆಯ ದೆಹಲಿ–ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದು, 22 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದೌಸಾ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪೊಲೀಸರ ಮಾಹಿತಿ ಪ್ರಕಾರ, ಉತ್ತರಾಖಂಡದ ಋಷಿಕೇಶ್‌ನಿಂದ ಮಧ್ಯಪ್ರದೇಶದ ಇಂದೋರ್‌ಗೆ ತೆರಳುತ್ತಿದ್ದ ಸ್ಲೀಪರ್ ಬಸ್ ಕೋಲ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ತನವಾಡ್ ಜೀರೋ ಪಾಯಿಂಟ್ ಸಮೀಪ ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಮುಂಭಾಗದಲ್ಲಿ ಸಾಗುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬಸ್ ಮತ್ತು ಟ್ರಕ್ ಎರಡಕ್ಕೂ ಬೆಂಕಿ ಹೊತ್ತಿಕೊಂಡು ಕ್ಷಣಾರ್ಧದಲ್ಲೇ ಹೊತ್ತಿ ಉರಿದವು.

ದೌಸಾ ಜಿಲ್ಲಾ ಪೊಲೀಸ್ ಅಧೀಕ್ಷಕ ಪಿಯೂಷ್ ದೀಕ್ಷಿತ್ ಅವರು, ಐವರು ಬೆಂಕಿಗೆ ಆಹುತಿಯಾಗಿ ಸಾವನ್ನಪ್ಪಿದ್ದು, ಇನ್ನಿಬ್ಬರು ತಲೆಗೆ ತೀವ್ರ ಪೆಟ್ಟಾಗಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಇದುವರೆಗೆ ಒಂಬತ್ತು ಗಾಯಾಳುಗಳ ಗುರುತು ಪತ್ತೆಯಾಗಿದ್ದು, ಉಳಿದವರ ಗುರುತು ಪತ್ತೆ ಕಾರ್ಯ ಮುಂದುವರಿದಿದೆ.

ಅಪಘಾತದ ಬಳಿಕ ಸ್ಥಳೀಯರು ತಕ್ಷಣವೇ ಪೊಲೀಸ್ ಇಲಾಖೆ ಹಾಗೂ ಎಕ್ಸ್‌ಪ್ರೆಸ್‌ವೇ ನಿರ್ವಹಣಾ ಸಂಸ್ಥೆಗೆ ಮಾಹಿತಿ ನೀಡಿದ್ದರು. ಆದರೆ ಅಗ್ನಿಶಾಮಕ ದಳ ಮತ್ತು ಆಂಬುಲೆನ್ಸ್ ತಡವಾಗಿ ಸ್ಥಳಕ್ಕೆ ತಲುಪಿದ್ದರಿಂದ ರಕ್ಷಣಾ ಕಾರ್ಯ ವಿಳಂಬವಾಯಿತು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಪಘಾತ ಸಂಭವಿಸಿದ ಸುಮಾರು ಒಂದು ಗಂಟೆಯ ಬಳಿಕ ಬಸ್‌ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಹೊರತೆಗೆದು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ.

ಸ್ಥಳೀಯ ನಿವಾಸಿ ಮಹೇಂದ್ರ ನಾಗರ್ ಅವರು, ಅಪಘಾತದ ವೇಳೆ ಸ್ಥಳದಲ್ಲಿ ಆಂಬುಲೆನ್ಸ್ ಅಥವಾ ಅಗ್ನಿಶಾಮಕ ವಾಹನಗಳೇ ಇರಲಿಲ್ಲ. ತಾವೇ ಆಂಬುಲೆನ್ಸ್‌ಗೆ ಕರೆ ಮಾಡಿ ಮಾಹಿತಿ ನೀಡಿದ್ದಾಗಿ ಹೇಳಿದ್ದು, ಅಗ್ನಿಶಾಮಕ ದಳ ಸಮಯಕ್ಕೆ ಬಂದಿದ್ದರೆ ಬೆಂಕಿಯನ್ನು ಬೇಗ ನಿಯಂತ್ರಿಸಿ ಇನ್ನಷ್ಟು ಜೀವಗಳನ್ನು ಉಳಿಸಬಹುದಾಗಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದಲ್ಲದೆ, ಬಸ್‌ನ ಸ್ಟೋರೇಜ್ ಬಾಕ್ಸ್‌ನಲ್ಲಿ ಸಿಗರೇಟ್ ಪ್ಯಾಕೆಟ್‌ಗಳು ತುಂಬಿದ್ದವು ಎಂಬ ಆರೋಪವನ್ನೂ ಅವರು ಮಾಡಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದನ್ನು ಪರಿಶೀಲಿಸಲಾಗುತ್ತಿದೆ.

ಪೊಲೀಸರು ಹಾಗೂ ಆಡಳಿತದ ಅಧಿಕಾರಿಗಳು ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಪ್ರಕರಣದ ಕುರಿತು ಸಮಗ್ರ ತನಿಖೆ ಮುಂದುವರಿದಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande