
ನವದೆಹಲಿ, 01 ಜುಲೈ (ಹಿ.ಸ.):
ಆ್ಯಂಕರ್:ಚಾರ್ಟರ್ಡ್ ಅಕೌಂಟೆಂಟ್ಸ್ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಸಮಸ್ತ ಸಿಎ ಸಮುದಾಯಕ್ಕೆ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ, ಭಾರತದ ಆರ್ಥಿಕ ಅಭಿವೃದ್ಧಿಯ ಪಯಣದಲ್ಲಿ ಚಾರ್ಟರ್ಡ್ ಅಕೌಂಟೆಂಟ್ಸ್‌ಗಳು ದೀರ್ಘಕಾಲದಿಂದ ವಿಶ್ವಾಸಾರ್ಹ ಪಾಲುದಾರರಾಗಿದ್ದಾರೆ ಎಂದು ಪ್ರಶಂಸಿಸಿದರು.
ಪಾರದರ್ಶಕತೆ ಹಾಗೂ ವೃತ್ತಿಪರ ಶ್ರೇಷ್ಠತೆಯತ್ತ ಅವರ ಬದ್ಧತೆ ದೇಶದ ಹಣಕಾಸು ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುತ್ತಿದೆ. ಅವರು ಉದ್ಯಮಗಳಿಗೆ ಬೆಂಬಲ ನೀಡುವುದರ ಜೊತೆಗೆ, ಉದ್ಯಮಶೀಲತೆಯನ್ನು ಉತ್ತೇಜಿಸಿ, ಹೂಡಿಕೆದಾರರಲ್ಲಿ ವಿಶ್ವಾಸ ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ ಎಂದು ಹೇಳಿದರು.
ಸಿಎಗಳ ಪರಿಣತಿ ದೇಶದ ಆರ್ಥಿಕ ಬೆಳವಣಿಗೆ ಹಾಗೂ ರಾಷ್ಟ್ರ ನಿರ್ಮಾಣಕ್ಕೆ ಗಮನಾರ್ಹ ಕೊಡುಗೆ ನೀಡುತ್ತಿದೆ. 'ವಿಕಸಿತ ಭಾರತ' ಗುರಿಯತ್ತ ದೇಶ ಮುನ್ನಡೆಯುತ್ತಿರುವ ಈ ಸಂದರ್ಭದಲ್ಲಿ, ಅವರ ಪರಿಶ್ರಮವು ಉದ್ಯಮಗಳು ಬೆಳೆಯಲು ಹಾಗೂ ಎಲ್ಲರಿಗೂ ಹೊಸ ಅವಕಾಶಗಳು ಸೃಷ್ಟಿಯಾಗಲು ಅನುಕೂಲಕರ ವಾತಾವರಣ ನಿರ್ಮಿಸುತ್ತಿದೆ ಎಂದು ಪ್ರಧಾನಿ ಮೋದಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.