
ಬೆಳಗಾವಿ, 01 ಜುಲೈ (ಹಿ.ಸ.):
ಆ್ಯಂಕರ್:
ಬೆಳಗಾವಿ ಜಿಲ್ಲಾ ಪ್ರವಾಸದ ವೇಳೆ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಅವರು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ವಿಶೇಷ ಮತದಾರರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸುವಂತೆ ಕರೆ ನೀಡಿದರು.
ದೇಶಾದ್ಯಂತ ಎಸ್‌ಐಆರ್ ಕುರಿತು ವ್ಯಾಪಕ ಚರ್ಚೆಗಳು ನಡೆದಿದ್ದು, ವಿವಿಧ ರಾಜ್ಯಗಳ ಚುನಾವಣಾ ಅನುಭವಗಳನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಯಾವುದೇ ಅರ್ಹ ಮತದಾರರ ಹಕ್ಕಿಗೆ ಧಕ್ಕೆಯಾಗದಂತೆ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಎಸ್‌ಐಆರ್ ಪ್ರಕ್ರಿಯೆ ಸಮರ್ಪಕವಾಗಿ ನಡೆಯಬೇಕು. ಬಿಎಲ್‌ಒಗಳು ಹಾಗೂ ಸಂಬಂಧಿತ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಿ, ಅರ್ಹ ಮತದಾರರ ಹೆಸರುಗಳು ಅನಗತ್ಯವಾಗಿ ಮತದಾರರ ಪಟ್ಟಿಯಿಂದ ಕೈಬಿಡದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು. ವಸತಿ ಪ್ರಮಾಣಪತ್ರ ನೀಡುವ ಅಧಿಕಾರವನ್ನು ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರ್‌ಗಳಿಗೆ ನೀಡಿರುವುದರಿಂದ ಸಾರ್ವಜನಿಕರಿಗೆ ಆಗುವ ತೊಂದರೆ ಕಡಿಮೆಯಾಗಲಿದೆ ಎಂದರು.
ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪರಮೇಶ್ವರ, ಕಳೆದ 15 ವರ್ಷಗಳಲ್ಲಿ ರಾಜ್ಯ ಸರ್ಕಾರವು ಅನುದಾನ ವಿಳಂಬ, ಯೋಜನೆಗಳ ಅನುಷ್ಠಾನದಲ್ಲಿನ ತೊಂದರೆ ಹಾಗೂ ಬಡಜನರಿಗೆ ಸೌಲಭ್ಯ ತಲುಪಿಸುವಲ್ಲಿ ಹಲವು ಸವಾಲುಗಳನ್ನು ಎದುರಿಸಿದೆ ಎಂದು ಆರೋಪಿಸಿದರು. ಜಲ್ ಜೀವನ್ ಮಿಷನ್ (ಜೆಜೆಎಂ) ಹಾಗೂ ನರೇಗಾ ಯೋಜನೆಗಳಿಗೆ ಸಮರ್ಪಕ ಹಣಕಾಸು ನೆರವು ಸಿಗದಿರುವುದು ಅಭಿವೃದ್ಧಿ ಕಾರ್ಯಗಳ ಮೇಲೆ ಪರಿಣಾಮ ಬೀರಿದೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷವು ಬಡವರ ಕಲ್ಯಾಣವನ್ನೇ ತನ್ನ ಪ್ರಮುಖ ಆದ್ಯತೆಯನ್ನಾಗಿಸಿಕೊಂಡಿದ್ದು, ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳು ಮುಂದುವರಿಯಬೇಕಾದರೆ 2028ರ ವಿಧಾನಸಭಾ ಚುನಾವಣೆಯಲ್ಲೂ ಜನರು ಮತ್ತೊಮ್ಮೆ ಆಶೀರ್ವದಿಸಬೇಕು ಎಂದು ಮನವಿ ಮಾಡಿದರು. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಯಾವುದೇ ಲೋಪ ಕಂಡುಬಂದರೂ ಅದರ ಮೇಲ್ವಿಚಾರಣೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಕೆಪಿಸಿಸಿಗೆ ಹೊಸ ಅಧ್ಯಕ್ಷರು ಅಧಿಕಾರ ವಹಿಸಿಕೊಂಡ ಬಳಿಕ ಪಕ್ಷದ ವಿವಿಧ ಹುದ್ದೆಗಳಲ್ಲಿ ಬದಲಾವಣೆಗಳು ಸಹಜವಾಗಿದ್ದು, ಜಿಲ್ಲೆಗಳಲ್ಲಿ ಪಕ್ಷಕ್ಕಾಗಿ ಸಮರ್ಪಿತವಾಗಿ ದುಡಿದ ಕಾರ್ಯಕರ್ತರನ್ನು ಗುರುತಿಸಿ ಅವರಿಗೆ ಸೂಕ್ತ ಜವಾಬ್ದಾರಿಗಳನ್ನು ನೀಡಲಾಗುವುದು ಎಂದು ಹೇಳಿದರು. ಸಚಿವರು, ಶಾಸಕರು ಹಾಗೂ ಜಿಲ್ಲಾಧ್ಯಕ್ಷರು ಸಮನ್ವಯದಿಂದ ಅರ್ಹರ ಪಟ್ಟಿಯನ್ನು ಸಲ್ಲಿಸಿದರೆ ಅದನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಕಾಂಗ್ರೆಸ್ ಕಚೇರಿ ನಮಗೆ ದೇವಾಲಯ ಇದ್ದಂತೆ, ಪಕ್ಷ ತಾಯಿಯಿದ್ದಂತೆ ಎಂದು ಹೇಳಿದ ಪರಮೇಶ್ವರ, ಪಕ್ಷದ ಕಚೇರಿಗಳ ಅಭಿವೃದ್ಧಿ ಮತ್ತು ನಿರ್ವಹಣೆಯಲ್ಲಿ ಯಾವುದೇ ನಿರ್ಲಕ್ಷ್ಯ ಇರಬಾರದು ಎಂದು ಕರೆ ನೀಡಿದರು. ತಮ್ಮ ಅಧ್ಯಕ್ಷೀಯ ಅವಧಿಯಲ್ಲಿ ವಿವಿಧ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಸುಮಾರು 13 ಕಾಂಗ್ರೆಸ್ ಕಚೇರಿ ಕಟ್ಟಡಗಳ ನಿರ್ಮಾಣ ಕೈಗೊಳ್ಳಲಾಗಿತ್ತು ಎಂದು ನೆನಪಿಸಿದರು.
ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಚೇರಿ ನಿರ್ಮಾಣದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪಾತ್ರವನ್ನು ಶ್ಲಾಘಿಸಿದ ಅವರು, ಡಿ.ಕೆ. ಶಿವಕುಮಾರ್ ಸಚಿವರಾಗಿದ್ದ ವೇಳೆ ಕಚೇರಿಗೆ ಸೂಕ್ತ ಜಾಗ ಒದಗಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು ಎಂದು ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.