
ಗದಗ, 01 ಜುಲೈ (ಹಿ.ಸ.):
ಆ್ಯಂಕರ್:
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ)ಯ ಸವಿ ನೆನಪನ್ನು ಸ್ಮರಿಸುವ ಹಾಗೂ ವಿಬಿ-ಜಿ ರಾಮ್ (ಜಿ) ಯೋಜನೆಯ ಆರಂಭವನ್ನು ಅರ್ಥ ಪೂರ್ಣವಾಗಿ ಗುರುತಿಸುವ ಹಿನ್ನೆಲೆ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘ, ಗದಗ ಜಿಲ್ಲಾ ಘಟಕದ ವತಿಯಿಂದ ನಗರದ ಆರ್.ಡಿ.ಪಿ.ಆರ್. ವಿಶ್ವವಿದ್ಯಾಲಯ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮಕ್ಕೆ ಸಂಘದ ಗೌರವಾಧ್ಯಕ್ಷ ಸಿದ್ದಲಿಂಗೇಶ ಪಾಟೀಲ ಅವರು ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಪ್ರಕೃತಿ ಮತ್ತು ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಒಂದು ಮರ ನೂರು ಜನರಿಗೆ ನೆರಳನ್ನು ನೀಡುವುದಲ್ಲದೆ, ಮುಂದಿನ ಪೀಳಿಗೆಗೆ ಆರೋಗ್ಯಕರ ಪರಿಸರವನ್ನು ನಿರ್ಮಿಸುವ ಶಕ್ತಿಯನ್ನು ಹೊಂದಿದೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಕನಿಷ್ಠ ಒಂದು ಸಸಿಯಾದರೂ ನೆಟ್ಟು ಅದನ್ನು ಮರವಾಗಿ ಬೆಳೆಸುವ ಸಂಕಲ್ಪ ಮಾಡಬೇಕು ಎಂದು ಅವರು ಹೇಳಿದರು.
ಸಂಘದ ಜಿಲ್ಲಾ ಅಧ್ಯಕ್ಷರಾದ ಸುರೇಶ ಬಾಳಿಕಾಯಿ ಮಾತನಾಡಿ ನರೇಗಾ ಯೋಜನೆಯು ಗ್ರಾಮೀಣಾಭಿವೃದ್ಧಿ, ಜಲಸಂರಕ್ಷಣೆ, ಹಸಿರು ಪರಿಸರ ನಿರ್ಮಾಣ ಹಾಗೂ ಗ್ರಾಮೀಣ ಜನರ ಬದುಕಿನಲ್ಲಿ ಮಹತ್ವದ ಬದಲಾವಣೆ ತರಲು ಪ್ರಮುಖ ಪಾತ್ರ ವಹಿಸಿದೆ. ಹೊಸ ರೂಪದಲ್ಲಿ ಆರಂಭವಾಗುತ್ತಿರುವ ವಿಬಿ-ಜಿ ರಾಮ್ (ಜಿ) ಯೋಜನೆಯೂ ಗ್ರಾಮೀಣ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡಲಿ ಎಂಬ ಆಶಯವನ್ನು ಅವರು ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಸಂಘದ ಸದಸ್ಯರೆಲ್ಲರೂ ಸೇರಿ 100ಕ್ಕೂ ಹೆಚ್ಚು ವಿವಿಧ ಜಾತಿಯ ಸಸಿಗಳನ್ನು ನೆಟ್ಟು, ಅವುಗಳ ಸಂರಕ್ಷಣೆ ಮತ್ತು ಪೋಷಣೆಯ ಜವಾಬ್ದಾರಿಯನ್ನು ವಹಿಸುವ ಸಂಕಲ್ಪ ಮಾಡಿದ್ದು ಇತರರಿಗೆ ಮಾದರಿ ಆಗಿದೆ. ಸಸಿ ನೆಡುವುದರ ಜೊತೆಗೆ ಅವುಗಳನ್ನು ಸಂರಕ್ಷಿಸುವುದೇ ನಿಜವಾದ ಪರಿಸರ ಸೇವೆ ನೆರವೇರಿಸಿದರು..
ಹೊಸ ಜಿಲ್ಲಾ ಪದಾಧಿಕಾರಿಗಳ ನೇಮಕದ ನಂತರ ನಡೆದ ಮೊದಲ ಸಂಘಟನಾ ಕಾರ್ಯಕ್ರಮ ಇದಾಗಿದ್ದು, ಗದಗ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ನರೇಗಾ ನೌಕರರು ಉತ್ಸಾಹದಿಂದ ಪಾಲ್ಗೊಂಡರು. ಸಂಘದ ಸದಸ್ಯರ ನಡುವೆ ಪರಸ್ಪರ ಸಹಕಾರ, ಸಂಘಟನೆಯ ಬಲವರ್ಧನೆ ಹಾಗೂ ನೌಕರರ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳ ಕುರಿತು ಈ ಸಂದರ್ಭದಲ್ಲಿ ಚರ್ಚೆ ನಡೆಯಿತು..
ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆ ಯೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿ ಸಂಘದ ಪಾತ್ರವನ್ನು ಮತ್ತಷ್ಟು ವಿಸ್ತರಿಸುವ ಸಂಕಲ್ಪ ವ್ಯಕ್ತವಾಯಿತು. ಭವಿಷ್ಯದಲ್ಲಿಯೂ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಇಂತಹ ಜನಜಾಗೃತಿ ಹಾಗೂ ಪರಿಸರ ಸ್ನೇಹಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಂಘ ನಿರ್ಧರಿಸಿದೆ ಎಂದು ಎಲ್ಲರಿಂದಲೂ ಅಭಿಪ್ರಾಯ ವ್ಯಕ್ತವಾಯಿತು..
ಈ ಸಂದರ್ಭದಲ್ಲಿ ಗದಗ ಸಾಮಾಜಿಕ ವಲಯ ಅರಣ್ಯ ಅಧಿಕಾರಿ ನಮನ್ ನಾಯ್ಕ ಅವರ ಮಾರ್ಗದರ್ಶನ ದಲ್ಲಿ ಕಾರ್ಯಕ್ರಮ ನಡೆದಿದ್ದು, ಅರಣ್ಯ ಸಿಬ್ಬಂದಿಗಳು, ಸಂಘದ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು, ವಿವಿಧ ತಾಲೂಕಿನ ನರೇಗಾ ನೌಕರರು ಮತ್ತು ಸದಸ್ಯರು ಉಪಸ್ಥಿತರಿದ್ದು, ಪರಿಸರ ಉಳಿಸುವ ಹಾಗೂ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ಪ್ರತಿಜ್ಞೆ ಸ್ವೀಕರಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP