
ಬಾಗಲಕೋಟೆ, 10 ಜುಲೈ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ರಾಂಪುರ ನಗರಸಭೆ ಮುಂಭಾಗದ ಪ್ರಮುಖ ರಸ್ತೆಯಲ್ಲಿ ಮಳೆ ನೀರಿನಿಂದ ಮುಚ್ಚಿಹೋಗಿರುವ ಬೃಹತ್ ರಸ್ತೆ ಗುಂಡಿಗಳು ಸಾರ್ವಜನಿಕರ ಜೀವಕ್ಕೆ ಅಪಾಯಕಾರಿಯಾಗಿ ಪರಿಣಮಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಳೆಗಾಲ ಆರಂಭವಾದ ಬಳಿಕ ರಸ್ತೆ ಸಂಪೂರ್ಣ ಹಾಳಾಗಿದ್ದು, ಗುಂಡಿಗಳಲ್ಲಿ ನೀರು ನಿಂತಿರುವುದರಿಂದ ವಾಹನ ಸವಾರರಿಗೆ ಅವುಗಳ ಆಳ ಹಾಗೂ ವ್ಯಾಪ್ತಿ ಗೋಚರಿಸುತ್ತಿಲ್ಲ. ಪರಿಣಾಮ ಕಳೆದ ಕೆಲವು ದಿನಗಳಲ್ಲಿ ಇದೇ ಸ್ಥಳದಲ್ಲಿ ಮೂರುರಿಂದ ನಾಲ್ಕು ಬೈಕ್ ಸವಾರರು ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿರುವ ಘಟನೆಗಳು ನಡೆದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ವಿಶೇಷವಾಗಿ ಈ ರಸ್ತೆ ಮೂಲಕ ಪ್ರತಿದಿನ ನೂರಾರು ವಾಹನಗಳು ಹಾಗೂ ಸಾರ್ವಜನಿಕರು ಸಂಚರಿಸುತ್ತಿದ್ದು, ನಗರಸಭೆ ಕಚೇರಿ ಸೇರಿದಂತೆ ಹಲವು ಸರ್ಕಾರಿ ಕಚೇರಿಗಳಿಗೆ ತೆರಳುವ ಜನರು ಇದೇ ರಸ್ತೆಯನ್ನು ಅವಲಂಬಿಸಿದ್ದಾರೆ. ಅಧಿಕಾರಿಗಳು ಪ್ರತಿದಿನ ಇದೇ ರಸ್ತೆಯಲ್ಲಿ ಸಂಚರಿಸುತ್ತಿದ್ದರೂ ರಸ್ತೆ ದುರಸ್ತಿಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಕೆಆರ್ಎಸ್ ಪಕ್ಷದ ತಾಲೂಕು ಅಧ್ಯಕ್ಷ ನಿಜಾಮ್ ಜಮಾದಾರ್, ಯಾರಾದರೂ ಅಮೂಲ್ಯ ಜೀವ ಕಳೆದುಕೊಳ್ಳುವ ಮುನ್ನ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತಕ್ಷಣ ರಸ್ತೆ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು. ನಿರ್ಲಕ್ಷ್ಯ ಮುಂದುವರಿದರೆ ಸಾರ್ವಜನಿಕರೊಂದಿಗೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ, ಎಂದು ಎಚ್ಚರಿಕೆ ನೀಡಿದ್ದಾರೆ.
ಸ್ಥಳೀಯ ನಿವಾಸಿಗಳು ಹಾಗೂ ವಾಹನ ಸವಾರರು ಕೂಡ ರಸ್ತೆ ದುರಸ್ತಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದು, ಮಳೆಗಾಲದಲ್ಲಿ ಇಂತಹ ರಸ್ತೆ ಗುಂಡಿಗಳು ಅಪಘಾತಗಳಿಗೆ ಕಾರಣವಾಗುತ್ತಿರುವುದರಿಂದ ಸಂಬಂಧಿಸಿದ ಇಲಾಖೆ ಯಾವುದೇ ಅನಾಹುತ ಸಂಭವಿಸುವ ಮುನ್ನವೇ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ.
ರಸ್ತೆ ಸುರಕ್ಷತೆ ಕಾಪಾಡುವುದು ಸಂಬಂಧಿಸಿದ ಇಲಾಖೆಯ ಪ್ರಮುಖ ಹೊಣೆಗಾರಿಕೆಯಾಗಿದ್ದು, ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟವಾಡದೆ ತುರ್ತು ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande