ಬಾಗಲಕೋಟೆ ಜಿಲ್ಲೆಯಲ್ಲಿ ಬೃಹತ್ ಕೈಗಾರಿಕೆಗಳ ಸ್ಥಾಪನೆಗೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ
ಬಾಗಲಕೋಟೆ, 10 ಜುಲೈ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಸಮಗ್ರ ಅಭಿವೃದ್ಧಿ, ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಸೃಷ್ಟಿ ಹಾಗೂ ಕೈಗಾರಿಕಾ ಬೆಳವಣಿಗೆಗೆ ಉತ್ತೇಜನ ನೀಡುವ ಉದ್ದೇಶದಿಂದ ಬಾಗಲಕೋಟೆ ಜಿಲ್ಲೆಯಲ್ಲಿ ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕ
ಪ್ರೋತ್3ಸಿಟಿ


ಬಾಗಲಕೋಟೆ, 10 ಜುಲೈ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಸಮಗ್ರ ಅಭಿವೃದ್ಧಿ, ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಸೃಷ್ಟಿ ಹಾಗೂ ಕೈಗಾರಿಕಾ ಬೆಳವಣಿಗೆಗೆ ಉತ್ತೇಜನ ನೀಡುವ ಉದ್ದೇಶದಿಂದ ಬಾಗಲಕೋಟೆ ಜಿಲ್ಲೆಯಲ್ಲಿ ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕರವೇ ಪದಾಧಿಕಾರಿಗಳು ಮತ್ತು ಸದಸ್ಯರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಜಿಲ್ಲೆಯ ಕೈಗಾರಿಕಾ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು. ಕೃಷಿ ಪ್ರಧಾನ ಜಿಲ್ಲೆಯಾಗಿರುವ ಬಾಗಲಕೋಟೆಯಲ್ಲಿ ಕೈಗಾರಿಕೆಗಳ ಕೊರತೆಯಿಂದ ಸಾವಿರಾರು ಯುವಕರು ಉದ್ಯೋಗಕ್ಕಾಗಿ ಬೆಂಗಳೂರು, ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ವಿವಿಧ ನಗರಗಳಿಗೆ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಭೂಮಿ, ನೀರು, ರಸ್ತೆ ಹಾಗೂ ರೈಲು ಸಂಪರ್ಕ ಸೇರಿದಂತೆ ಕೈಗಾರಿಕೆ ಸ್ಥಾಪನೆಗೆ ಅಗತ್ಯ ಮೂಲಸೌಕರ್ಯಗಳಿದ್ದರೂ ಸರ್ಕಾರದ ನಿರ್ಲಕ್ಷ್ಯದಿಂದ ಹೊಸ ಕೈಗಾರಿಕೆಗಳು ಸ್ಥಾಪನೆಯಾಗುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಜಿಲ್ಲೆಯಲ್ಲೇ ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸಿದರೆ ಸ್ಥಳೀಯರಿಗೆ ಉದ್ಯೋಗ ದೊರೆಯುವುದರ ಜೊತೆಗೆ ಜಿಲ್ಲೆಯ ಆರ್ಥಿಕ ಪ್ರಗತಿಗೂ ವೇಗ ಸಿಗಲಿದೆ ಎಂದು ಅಭಿಪ್ರಾಯಪಟ್ಟರು.

ರಾಜ್ಯ ಸರ್ಕಾರ ಬಾಗಲಕೋಟೆ ಜಿಲ್ಲೆಯನ್ನು ಕೈಗಾರಿಕಾ ಹೂಡಿಕೆ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ವಿಶೇಷ ಯೋಜನೆ ರೂಪಿಸಬೇಕು. ಉದ್ಯಮಿಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ ಹೊಸ ಕೈಗಾರಿಕೆಗಳನ್ನು ಆಕರ್ಷಿಸುವ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಶೀಘ್ರವೇ ಪರಿಣಾಮಕಾರಿ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಜಿಲ್ಲೆಯ ಅಭಿವೃದ್ಧಿ ಹಾಗೂ ಕೈಗಾರಿಕಾ ವಲಯದ ಬಲವರ್ಧನೆಗೆ ಸರ್ಕಾರ ತಕ್ಷಣವೇ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ವಿವಿಧ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande