
ವಿಜಯಪುರ, 10 ಜುಲೈ (ಹಿ.ಸ.)
ಆ್ಯಂಕರ್ : ವಿಜಯಪುರ ನಗರದ
ಮನಗೂಳಿ ಅಗಸಿ ಪ್ರದೇಶದಲ್ಲಿ ಒಳಚರಂಡಿ ಕಾಮಗಾರಿಗಾಗಿ ರಸ್ತೆ ಮಧ್ಯೆ ತೆಗೆದಿದ್ದ ಗುಂಡಿಯನ್ನು ಕಾಮಗಾರಿ ಪೂರ್ಣಗೊಂಡ ಬಳಿಕ ಸಮರ್ಪಕವಾಗಿ ಮುಚ್ಚದೇ ಹಾಗೆಯೇ ಬಿಟ್ಟ ಪರಿಣಾಮ, ಕಳೆದ ಕೆಲವು ದಿನಗಳಿಂದ ವಾಹನ ಸಂಚಾರ ತೀವ್ರವಾಗಿ ಅಸ್ತವ್ಯಸ್ತಗೊಂಡು ಪ್ರತಿದಿನ ಟ್ರಾಫಿಕ್ ಜಾಮ್ ಉಂಟಾಗುತ್ತಿತ್ತು.
ರಸ್ತೆಯ ಅಗಲ ಕುಂಠಿತಗೊಂಡ ಕಾರಣ ದ್ವಿಚಕ್ರ ವಾಹನಗಳು, ಕಾರುಗಳು ಹಾಗೂ ಭಾರೀ ವಾಹನಗಳು ನಿಧಾನಗತಿಯಲ್ಲಿ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರಿಂದ ಸಾರ್ವಜನಿಕರು ಮತ್ತು ವಾಹನ ಸವಾರರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರು.
ಶುಕ್ರವಾರ ಈ ಸಮಸ್ಯೆಯನ್ನು ಗಮನಿಸಿದ ಸ್ಥಳೀಯ ಪೊಲೀಸ್ ಠಾಣೆಯ ಸಿದ್ದನಗೌಡ ಪಾಟೀಲ ಹಾಗೂ ಗೃಹ ರಕ್ಷಕ ದಳದ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಆಗಮಿಸಿ, ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಭಾಗದಲ್ಲಿ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಿದರು.
ಇದರಿಂದ ವಾಹನಗಳ ಓಡಾಟ ಸುಗಮಗೊಂಡು ಟ್ರಾಫಿಕ್ ದಟ್ಟಣೆ ಗಣನೀಯವಾಗಿ ಕಡಿಮೆಯಾಯಿತು.
ಸ್ಥಳೀಯರು ಪೊಲೀಸರ ಈ ಸಾರ್ವಜನಿಕ ಹಿತದ ಕಾರ್ಯವನ್ನು ಮೆಚ್ಚುಗೆ ವ್ಯಕ್ತಪಡಿಸಿದ್ದು, ಸಂಬಂಧಪಟ್ಟ ಇಲಾಖೆಯು ಶೀಘ್ರದಲ್ಲೇ ಡ್ರೈನೇಜ್ ಕಾಮಗಾರಿಯನ್ನು ಪೂರ್ಣಗೊಳಿಸಿ ರಸ್ತೆಯನ್ನು ಶಾಶ್ವತವಾಗಿ ದುರಸ್ತಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರದ ದೃಷ್ಟಿಯಿಂದ ಇಂತಹ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ಅಗತ್ಯವಿದೆ ಎಂದು ನಾಗರಿಕರು ಅಭಿಪ್ರಾಯಪಟ್ಟಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande