
ಬೆಳಗಾವಿ, 10 ಜುಲೈ (ಹಿ.ಸ.):
ಆ್ಯಂಕರ್:
ಕರ್ನಾಟಕ ರಾಜ್ಯ ಸಕ್ಕರೆ ಕಾರ್ಖಾನೆಗಳ ಒಕ್ಕೂಟದ ಪದಾಧಿಕಾರಿಗಳು ಹಾಗೂ ವಿವಿಧ ಸಹಕಾರಿ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರ ನಿಯೋಗವು ಶುಕ್ರವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಸಕ್ಕರೆ ಉದ್ಯಮ ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಪ್ರಮುಖ ಬೇಡಿಕೆಗಳಿಗೆ ಸಂಬಂಧಿಸಿದ ಮನವಿ ಸಲ್ಲಿಸಿತು.
ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಆಯೋಜಿಸಿದ್ದ ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳ ಆರ್ಥಿಕ ಹಾಗೂ ಆಡಳಿತಾತ್ಮಕ ಸವಾಲುಗಳು, ಸಹಕಾರಿ ಸಕ್ಕರೆ ಕಾರ್ಖಾನೆಗಳ ಬಲವರ್ಧನೆ, ಉದ್ಯಮದ ಸುಸ್ಥಿರ ಅಭಿವೃದ್ಧಿ ಮತ್ತು ಕಬ್ಬು ಬೆಳೆಗಾರ ರೈತರ ಹಿತಾಸಕ್ತಿ ಕುರಿತಂತೆ ಸುದೀರ್ಘ ಚರ್ಚೆ ನಡೆಯಿತು.
ಒಕ್ಕೂಟದ ಅಹವಾಲುಗಳನ್ನು ಆಲಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಕ್ಕರೆ ಕಾರ್ಖಾನೆಗಳ ಆರ್ಥಿಕ ಸ್ಥಿರತೆ ಹಾಗೂ ಕಬ್ಬು ಬೆಳೆಗಾರ ರೈತರ ಹಿತರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು. ಮನವಿಯಲ್ಲಿರುವ ಎಲ್ಲ ಬೇಡಿಕೆಗಳನ್ನು ಪರಿಶೀಲಿಸಿ ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದರು.
ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಚಿವ ಸತೀಶ್ ಜಾರಕಿಹೊಳಿ, ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಶಾಸಕರಾದ ಲಕ್ಷ್ಮಣ ಸವದಿ ಮತ್ತು ಬಾಬಾಸಾಹೇಬ್ ಪಾಟೀಲ, ಮೃಣಾಲ್ ಹೆಬ್ಬಾಳಕರ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಒಕ್ಕೂಟದ ಪದಾಧಿಕಾರಿಗಳು ಹಾಗೂ ವಿವಿಧ ಸಹಕಾರಿ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.