ಸರ್ಕಾರಿ ಶಾಲೆಗಳ ದಾಖಲಾತಿ ಕುಸಿತಕ್ಕೆ ಕಾಂಗ್ರೆಸ್ ಸರ್ಕಾರವೇ ಕಾರಣ: ಪ್ರಹ್ಲಾದ ಜೋಶಿ ಆರೋಪ
ಬೆಂಗಳೂರು, 10 ಜುಲೈ (ಹಿ.ಸ.): ಆ್ಯಂಕರ್: ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿ ದಾಖಲಾತಿ ಕುಸಿಯುತ್ತಿರುವುದಕ್ಕೆ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯವೇ ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ, ಯುಡೈಸ್ ಪ
ಪ್ರಹ್ಲಾದ್ ಜೋಶಿ ಸಂಗ್ರಹ ಚಿತ್ರ


ಬೆಂಗಳೂರು, 10 ಜುಲೈ (ಹಿ.ಸ.):

ಆ್ಯಂಕರ್:

ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿ ದಾಖಲಾತಿ ಕುಸಿಯುತ್ತಿರುವುದಕ್ಕೆ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯವೇ ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ, ಯುಡೈಸ್ ಪ್ಲಸ್ ವರದಿಯ ಅಂಕಿ-ಅಂಶಗಳನ್ನು ಉಲ್ಲೇಖಿಸಿರುವ ಅವರು, 2023-24ನೇ ಸಾಲಿನಲ್ಲಿ ಸರ್ಕಾರಿ ಶಾಲೆಗಳಲ್ಲಿ 1,19,26,303 ವಿದ್ಯಾರ್ಥಿಗಳ ದಾಖಲಾತಿ ಇದ್ದರೆ, 2024-25ರಲ್ಲಿ ಅದು 1,17,80,251ಕ್ಕೆ ಇಳಿದಿದ್ದು, 1,46,052 ವಿದ್ಯಾರ್ಥಿಗಳ ಕುಸಿತ ದಾಖಲಾಗಿದೆ ಎಂದು ತಿಳಿಸಿದ್ದಾರೆ. 2025-26ನೇ ಸಾಲಿನಲ್ಲಿ ಮತ್ತಷ್ಟು 66,037 ವಿದ್ಯಾರ್ಥಿಗಳ ದಾಖಲಾತಿ ಕಡಿಮೆಯಾಗಿದ್ದು, ಒಟ್ಟು ದಾಖಲಾತಿ 1,17,14,214ಕ್ಕೆ ತಲುಪಿದೆ. ಕಳೆದ ಮೂರು ವರ್ಷಗಳಲ್ಲಿ ಒಟ್ಟು 2,12,089 ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಿಂದ ಹೊರಗುಳಿದಿರುವುದು ಸರ್ಕಾರದ ನಿಷ್ಕ್ರಿಯ ಆಡಳಿತಕ್ಕೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದ್ದಾರೆ.

ಅಧಿಕಾರಕ್ಕೆ ಬಂದ ದಿನದಿಂದ ಕಾಂಗ್ರೆಸ್ ಸರ್ಕಾರ ಜನಪರ ಆಡಳಿತವನ್ನು ಕಡೆಗಣಿಸಿ ಒಳಜಗಳ, ಅಧಿಕಾರದ ಹೋರಾಟ ಮತ್ತು ರಾಜಕೀಯ ಗೊಂದಲದಲ್ಲೇ ಕಾಲ ಕಳೆಯುತ್ತಿದೆ. ಇದರ ಪರಿಣಾಮವಾಗಿ ಆಡಳಿತ ವ್ಯವಸ್ಥೆ ಸ್ಥಗಿತಗೊಂಡಿದ್ದು, ಶಿಕ್ಷಣ ಕ್ಷೇತ್ರದ ಮೇಲೂ ಅದರ ನೇರ ಪರಿಣಾಮ ಬಿದ್ದಿದೆ ಎಂದು ಜೋಶಿ ಆರೋಪಿಸಿದ್ದಾರೆ.

ಬಡ ಹಾಗೂ ಮಧ್ಯಮ ವರ್ಗದ ಮಕ್ಕಳಿಗೆ ಆಶ್ರಯವಾಗಬೇಕಾದ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸುವ ಬದಲು ಅವುಗಳನ್ನು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಟೀಕಿಸಿದ್ದಾರೆ. ಒಂದು ಕಡೆ ಸರ್ಕಾರಿ ಶಾಲೆಗಳು ಮೂಲಭೂತ ಸೌಲಭ್ಯಗಳ ಕೊರತೆಯಿಂದ ಬಳಲುತ್ತಿದ್ದರೆ, ಮತ್ತೊಂದೆಡೆ ಕರ್ನಾಟಕವು ಮಾದಕ ವಸ್ತುಗಳ ಚಟುವಟಿಕೆಗಳ ಕೇಂದ್ರವಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಹೇಳಿದ್ದಾರೆ.

ಶಾಲೆಗಳ ಸಬಲೀಕರಣಕ್ಕೆ ಆದ್ಯತೆ ನೀಡಬೇಕಿದ್ದ ಸರ್ಕಾರ ಮಕ್ಕಳ ಭವಿಷ್ಯವನ್ನು ನಿರ್ಲಕ್ಷ್ಯ ಮಾಡುತ್ತಿದೆ. ಗುಣಮಟ್ಟದ ಶಿಕ್ಷಣ ಮತ್ತು ಸೂಕ್ತ ಮಾರ್ಗದರ್ಶನದ ಕೊರತೆಯಿಂದ ಯುವಜನರು ಮಾದಕ ವಸ್ತುಗಳ ಜಾಲ ಹಾಗೂ ಸಮಾಜ ವಿರೋಧಿ ಚಟುವಟಿಕೆಗಳತ್ತ ಆಕರ್ಷಿತರಾಗುತ್ತಿರುವುದು ಕಳವಳಕಾರಿ ಎಂದು ಪ್ರಹ್ಲಾದ ಜೋಶಿ ತಮ್ಮ ಎಕ್ಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande