
ದಾವಣಗೆರೆ, 11 ಜುಲೈ (ಹಿ.ಸ.):
ಆ್ಯಂಕರ್:ದಾವಣಗೆರೆ ಜಿಲ್ಲೆಯ ಫಿಟ್‌ನೆಸ್ ಕ್ಲಬ್‌ಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿರುವ ಕುರಿತು ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸಂಸದೆ ಪ್ರಭಾ ಮಲ್ಲಿಕಾರ್ಜುನ ಅವರು ತಮ್ಮ ಗೃಹ ಕಚೇರಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಎಚ್. ತೆಕ್ಕಣ್ಣವರ್ ಅವರೊಂದಿಗೆ ತುರ್ತು ಸಭೆ ನಡೆಸಿದರು.
ಸಭೆಯಲ್ಲಿ ಜಿಲ್ಲೆಯಾದ್ಯಂತ ಫಿಟ್‌ನೆಸ್ ಕ್ಲಬ್‌ಗಳು, ಜಿಮ್‌ಗಳು, ವಾಣಿಜ್ಯ ಮಳಿಗೆಗಳು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳಗಳಲ್ಲಿ ಸಿಸಿಟಿವಿ ವ್ಯವಸ್ಥೆ, ಸುರಕ್ಷತಾ ಕ್ರಮಗಳು ಮತ್ತು ನಿಯಮಗಳ ಪಾಲನೆ ಕುರಿತು ವಿಶೇಷ ಪರಿಶೀಲನೆ ನಡೆಸುವಂತೆ ಸೂಚಿಸಿದರು. ಅಲ್ಲದೆ, ಸಂಬಂಧಪಟ್ಟ ಮಾಲೀಕರ ಸಭೆ ಕರೆದು ಮಹಿಳಾ ಸುರಕ್ಷತೆ ಕುರಿತು ಜಾಗೃತಿ ಮೂಡಿಸಲು ನಿರ್ದೇಶನ ನೀಡಿದರು.
ಕ್ಷೇತ್ರದಾದ್ಯಂತ ಮಹಿಳಾ ಸುರಕ್ಷತೆ ಕುರಿತು ವ್ಯಾಪಕ ಜಾಗೃತಿ ಅಭಿಯಾನ ಹಮ್ಮಿಕೊಳ್ಳುವುದರ ಜೊತೆಗೆ ಮಹಿಳಾ ಸಹಾಯವಾಣಿ ಹಾಗೂ ಅಕ್ಕಪಡೆಯ ಕಾರ್ಯನಿರ್ವಹಣೆಯನ್ನು ಮತ್ತಷ್ಟು ಬಲಪಡಿಸಿ, ಅದರ ಪರಿಣಾಮಕಾರಿತ್ವವನ್ನು ಪರಿಶೀಲಿಸಿ ಅಗತ್ಯ ಸುಧಾರಣೆಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ನಿರ್ದೇಶನ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.