
ಬಾಗಲಕೋಟೆ, 11 ಜುಲೈ (ಹಿ.ಸ.):
ಆ್ಯಂಕರ್ : ಆರ್ ಎಸ್ ಎಸ್ ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ನಾಗರಾಜ ಹದ್ಲಿ ಭಾಗವಹಿಸಿರುವ ವಿಚಾರ ಇದೀಗ ಜಿಲ್ಲೆಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲಾ ಮುಸ್ಲಿಂ ಮುಖಂಡರು ಹಾಗೂ ಯುವಕರ ವೇದಿಕೆ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ನಂಜಯ್ಯನಮಠ ಅವರಿಗೆ ಪತ್ರ ಬರೆದು, ನಾಗರಾಜ ಹದ್ಲಿಗೆ ನೋಟಿಸ್ ನೀಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.
ಪತ್ರದಲ್ಲಿ, ಕಾಂಗ್ರೆಸ್ ಪಕ್ಷದ ಸಿದ್ಧಾಂತ, ಜಾತ್ಯತೀತ ಮೌಲ್ಯಗಳು ಹಾಗೂ ಪಕ್ಷದ ಅಧಿಕೃತ ನಿಲುವಿಗೆ ವಿರುದ್ಧವಾಗಿ ಕಾಣುವ ಕಾರ್ಯಕ್ರಮದಲ್ಲಿ ಪಕ್ಷದ ಪ್ರಮುಖ ಹುದ್ದೆಯಲ್ಲಿರುವ ನಾಯಕರು ಭಾಗವಹಿಸಿರುವುದು ಕಾರ್ಯಕರ್ತರು ಹಾಗೂ ಅಲ್ಪಸಂಖ್ಯಾತ ಸಮುದಾಯದಲ್ಲಿ ಗೊಂದಲ ಮತ್ತು ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಉಲ್ಲೇಖಿಸಲಾಗಿದೆ.
ನಾಗರಾಜ ಹದ್ಲಿ ಅವರು ಪಕ್ಷದ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಆರ್ ಎಸ್ ಎಸ್ ಪ್ರಮುಖ ನಾಯಕರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದಕ್ಕೆ ಸಾರ್ವಜನಿಕವಾಗಿ ಸ್ಪಷ್ಟನೆ ನೀಡಬೇಕು. ಅಲ್ಲದೆ, ಪಕ್ಷದ ಶಿಸ್ತು ಕಾಪಾಡುವ ನಿಟ್ಟಿನಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕವು ಅವರಿಗೆ ನೋಟಿಸ್ ಜಾರಿ ಮಾಡಿ, ಅಗತ್ಯ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಮುಸ್ಲಿಂ ಮುಖಂಡರು ಹಾಗೂ ಯುವಕರ ವೇದಿಕೆ, ಕಾಂಗ್ರೆಸ್ ಪಕ್ಷವು ತನ್ನ ಮೂಲ ಸಿದ್ಧಾಂತಗಳಿಗೆ ಬದ್ಧವಾಗಿರುವುದನ್ನು ಕಾರ್ಯರೂಪದಲ್ಲಿ ತೋರಿಸಬೇಕಿದ್ದು, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಪತ್ರದಲ್ಲಿ ತಿಳಿಸಿದೆ.
ಈ ಬೆಳವಣಿಗೆಯಿಂದ ಬಾಗಲಕೋಟೆ ಜಿಲ್ಲಾ ರಾಜಕೀಯದಲ್ಲಿ ಹೊಸ ಚರ್ಚೆಗೆ ವೇದಿಕೆ ಸಿಕ್ಕಿದ್ದು, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ನಂಜಯ್ಯನಮಠ ಅವರು ಈ ಮನವಿಗೆ ಯಾವ ರೀತಿಯ ಪ್ರತಿಕ್ರಿಯೆ ನೀಡಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande