ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ತುಳಸಿರಾಮ್ ಬನಸೋಡೆ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ
ವಿಜಯಪುರ, 11 ಜುಲೈ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವಂತಹ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿದ್ದಾನೆ ಎಂಬ ಆರೋಪದ ಹಿನ್ನೆಲೆಯಲ್ಲಿ ವಿಜಯಪುರ ನಗರದ ಗಣೇಶನಗರ ನಿವಾಸಿ ಹಾಗೂ ಮೂಲತಃ ಇಂಡಿ ತಾಲೂಕಿನ ಅರ್ಜನಾಳ ಗ್ರಾಮದ ತುಳಸಿರ
ದಡಿಪರು


ವಿಜಯಪುರ, 11 ಜುಲೈ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವಂತಹ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿದ್ದಾನೆ ಎಂಬ ಆರೋಪದ ಹಿನ್ನೆಲೆಯಲ್ಲಿ ವಿಜಯಪುರ ನಗರದ ಗಣೇಶನಗರ ನಿವಾಸಿ ಹಾಗೂ ಮೂಲತಃ ಇಂಡಿ ತಾಲೂಕಿನ ಅರ್ಜನಾಳ ಗ್ರಾಮದ ತುಳಸಿರಾಮ್ ತಂದೆ ಪಂಡಿತ ಹರಿಜನ ಬನಸೋಡೆ (27) ವಿರುದ್ಧ ಕರ್ನಾಟಕ ಗೂಂಡಾ ಕಾಯ್ದೆಯಡಿ ತಡೆಬಂಧನ ಆದೇಶ ಜಾರಿಗೊಳಿಸಲಾಗಿದೆ.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಆನಂದ್ ಕೆ. ಅವರು ಕರ್ನಾಟಕ ಅಕ್ರಮ ಕಳ್ಳಭಟ್ಟಿ ಸಾರಾಯಿ ವ್ಯವಹಾರ, ಮಾದಕ ದ್ರವ್ಯ ಅಪರಾಧಿಗಳು, ಜೂಜುಕೋರರು, ಗುಂಡಾಗಳು, ಅನೈತಿಕ ಮಾನವ ಕಳ್ಳಸಾಗಣೆ ಹಾಗೂ ಇತರೆ ಅಪಾಯಕಾರಿ ಚಟುವಟಿಕೆಗಳ ತಡೆ ಅಧಿನಿಯಮ–1985ರ ಕಲಂ 3(1) ಮತ್ತು 3(2)ರ ಅನ್ವಯ ಈ ಮಹತ್ವದ ಆದೇಶ ಹೊರಡಿಸಿದ್ದಾರೆ.

ಆದೇಶದಲ್ಲಿ ತುಳಸಿರಾಮ್ ಬನಸೋಡೆ ವೃತ್ತಿಪರ ಅಪರಾಧಿಯಾಗಿದ್ದು, ಭಾರತೀಯ ದಂಡ ಸಂಹಿತೆ ಹಾಗೂ ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ದಾಖಲಾದ ವಿವಿಧ ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿರುವ ಹಿನ್ನೆಲೆ ಹೊಂದಿದ್ದಾನೆ ಎಂದು ಉಲ್ಲೇಖಿಸಲಾಗಿದೆ.

ಆತನ ಚಟುವಟಿಕೆಗಳು ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಿಸುವುದರ ಜೊತೆಗೆ ಸಮಾಜದ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯ ಉಂಟುಮಾಡುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ತಡೆಬಂಧನಕ್ಕೆ ಒಳಪಡಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಇದರಿಂದ ತುಳಸಿರಾಮ್ ಬನಸೋಡೆ ಅವರನ್ನು ಚಾಮರಾಜನಗರ ಜಿಲ್ಲಾ ಕಾರಾಗೃಹದಲ್ಲಿ ತಡೆಬಂಧನದಲ್ಲಿ ಇರಿಸಲು ಆದೇಶಿಸಲಾಗಿದ್ದು, ಸಂಬಂಧಿತ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಪ್ರಕಟಣೆ ನೀಡಿದ್ದು, ಜಿಲ್ಲೆಯ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕರ ಸುರಕ್ಷತೆ ಮತ್ತು ಶಾಂತಿ ಕಾಪಾಡುವ ಉದ್ದೇಶದಿಂದ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅಪರಾಧ ಚಟುವಟಿಕೆಗಳ ವಿರುದ್ಧ ಕಠಿಣ ನಿಲುವು ಅನುಸರಿಸುತ್ತಿದ್ದು, ಕಾನೂನು ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande