
ವಿಜಯಪುರ, 11 ಜುಲೈ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ–50ರಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಕಾರು ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದ್ದು, ಕುಟುಂಬದ ಮುಖ್ಯಸ್ಥ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಸತ್ಯವೇಣಿ (38), ಅವರ ಪುತ್ರರಾದ ಹರಿವೆಂಕಟರಾಮ್ (20) ಹಾಗೂ ಜಶ್ವಂತ (18) ಎಂದು ಗುರುತಿಸಲಾಗಿದೆ. ಕುಟುಂಬದ ಮುಖ್ಯಸ್ಥ ರಾಘವೇಂದ್ರ (41) ಗಂಭೀರ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಅವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ.
ಮಾಹಿತಿಯ ಪ್ರಕಾರ, ಕಾರಟಗಿ ಪಟ್ಟಣದಿಂದ ಮಹಾರಾಷ್ಟ್ರದ ಶಿರಡಿಗೆ ಸಾಯಿಬಾಬಾ ದರ್ಶನಕ್ಕಾಗಿ ತೆರಳುತ್ತಿದ್ದ ಈ ಕುಟುಂಬ KA-33 N-4689 ನೋಂದಣಿಯ ಕ್ರೆಟಾ ಕಾರಿನಲ್ಲಿ ಪ್ರಯಾಣಿಸುತ್ತಿತ್ತು. ಕಾರನ್ನು ಪುತ್ರ ಹರಿವೆಂಕಟರಾಮ್ ಚಾಲನೆ ಮಾಡುತ್ತಿದ್ದರು. ಮನಗೂಳಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ವೇಳೆ ಏಕಾಏಕಿ ಕಾರು ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ಗೆ ಅಪ್ಪಳಿಸಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದವರು ತೀವ್ರವಾಗಿ ಗಾಯಗೊಂಡರು.
ಸ್ಥಳೀಯರು ಹಾಗೂ ಹೆದ್ದಾರಿ ಗಸ್ತು ಸಿಬ್ಬಂದಿ ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು. ಆದರೆ ತಾಯಿ ಹಾಗೂ ಇಬ್ಬರು ಪುತ್ರರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ರಾಘವೇಂದ್ರ ಅವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಪ್ರಾಥಮಿಕ ತನಿಖೆಯಲ್ಲಿ, ಚಾಲಕನಿಗೆ ನಿದ್ದೆ ಮಂಪರು ಬಂದಿರುವ ಸಾಧ್ಯತೆಯಿಂದ ಕಾರು ನಿಯಂತ್ರಣ ತಪ್ಪಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಅಪಘಾತದ ನಿಖರ ಕಾರಣ ತನಿಖೆಯ ನಂತರವೇ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಕುರಿತು ಮಾಹಿತಿ ಪಡೆದ ಮನಗೂಳಿ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೀಡಾದ ವಾಹನವನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಲಾಯಿತು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.
ಈ ದುರಂತದಿಂದ ಮೃತರ ಕುಟುಂಬಸ್ಥರು ಹಾಗೂ ಬಂಧು-ಬಳಗದವರ ಆಕ್ರಂದನ ಮುಗಿಲು ಮುಟ್ಟಿದ್ದು, ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ರಸ್ತೆ ಪ್ರಯಾಣದ ವೇಳೆ ದೀರ್ಘ ದೂರ ವಾಹನ ಚಲಾಯಿಸುವವರು ಸಮರ್ಪಕ ವಿಶ್ರಾಂತಿ ಪಡೆದು ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು ಎಂಬ ಸಂದೇಶವನ್ನು ಈ ಘಟನೆ ಮತ್ತೊಮ್ಮೆ ನೆನಪಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande