
ಬೆಂಗಳೂರು, 12 ಜುಲೈ (ಹಿ.ಸ.):
ಆ್ಯಂಕರ್:
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಮೂಲಭೂತ ಶಿಷ್ಟಾಚಾರಗಳು ಬಗ್ಗೆ ಮಾತನಾಡುವ ಮೊದಲು ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರಿಗೆ ಸಾರ್ವಜನಿಕ ಭಾಷೆಯ ಸಂಸ್ಕಾರವನ್ನು ಕಲಿಸಲಿ ಎಂದು ಹೇಳಿದ್ದಾರೆ. ಬಿಜೆಪಿ ನಾಯಕರ ವಿರುದ್ಧ ವಿವಿಧ ಆರೋಪಗಳನ್ನು ಉಲ್ಲೇಖಿಸಿದ ಅವರು, ಆರ್‌ಎಸ್‌ಎಸ್, ಬಿಜೆಪಿ ಹಾಗೂ ಪ್ರಹ್ಲಾದ್ ಜೋಶಿ ಅವರ ರಾಜಕೀಯ ಧೋರಣೆಯನ್ನು ತೀವ್ರವಾಗಿ ಟೀಕಿಸಿದ್ದಾರೆ.
ಪ್ರಹ್ಲಾದ್ ಜೋಶಿ ಆರ್‌ಎಸ್‌ಎಸ್‌ಗೆ ಬಹುಸಂಖ್ಯಾತರ ಬೆಂಬಲವಿದೆ ಎಂದು ಹೇಳುತ್ತಿರುವುದನ್ನು ಪ್ರಶ್ನಿಸಿರುವ ಹರಿಪ್ರಸಾದ್, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಈ ಹಿಂದೆ ಜೋಶಿ ಕುರಿತು ನೀಡಿದ್ದ ಹೇಳಿಕೆಗಳನ್ನು ನೆನಪಿಸಿದ್ದಾರೆ.
1984ರ ಸಿಖ್ ಹತ್ಯಾಕಾಂಡದ ಕುರಿತು ಬಿಜೆಪಿ ಟೀಕೆ ಮಾಡುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಈ ಕುರಿತು ವಿಷಾದ ವ್ಯಕ್ತಪಡಿಸಿದ್ದು, ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ. ಇದೇ ಧೈರ್ಯದಿಂದ 2002ರ ಗುಜರಾತ್ ಗಲಭೆಗಳ ಬಗ್ಗೆ ಬಿಜೆಪಿ ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.
ತಮ್ಮ ವಿರುದ್ಧದ ಟೀಕೆಗಳಿಗೆ ಉತ್ತರಿಸಿದ ಹರಿಪ್ರಸಾದ್, ತಾವು ಧರ್ಮ ಅಥವಾ ಜಾತಿಯ ಹೆಸರಿನಲ್ಲಿ ಗೂಂಡಾಗಿರಿ ಮಾಡಿಲ್ಲ. ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರ ಹಕ್ಕುಗಳಿಗಾಗಿ ಹೋರಾಟ ನಡೆಸಿರುವುದಾಗಿ ತಿಳಿಸಿದ್ದಾರೆ. ಧರ್ಮ ಮತ್ತು ಜಾತಿಯ ಆಧಾರದ ಮೇಲೆ ಸಮಾಜವನ್ನು ವಿಭಜಿಸುವ ರಾಜಕಾರಣವೇ ನಿಜವಾದ ಸೈದ್ಧಾಂತಿಕ ಗೂಂಡಾಗಿರಿ ಎಂದು ಅವರು ಆರೋಪಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.