ವಿಜಯಪುರ ರೈಲ್ವೆ ನಿಲ್ದಾಣಕ್ಕೆ ಹೆಚ್ಚುವರಿ ಪ್ರವೇಶಕ್ಕೆ ಪೂರಕ ರಸ್ತೆ ನಿರ್ಮಾಣ: ಸ್ಥಳ ಪರಿಶೀಲನೆ ನಡೆಸಿದ ವುಡಾ ಅಧ್ಯಕ್ಷ ಗಂಗಾಧರ ಸಂಬಣ್ಣಿ
ವಿಜಯಪುರ, 12 ಜುಲೈ (ಹಿ.ಸ.) ಆ್ಯಂಕರ್ : ವಿಜಯಪುರ ನಗರದ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ವೇಗ ನೀಡುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ. ಇತ್ತೀಚೆಗೆ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ವಿಜಯಪುರ ರೈಲ್ವೆ ನಿಲ್ದಾಣದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪ್ರಯಾಣ
ರಸ್ತೆ


ವಿಜಯಪುರ, 12 ಜುಲೈ (ಹಿ.ಸ.)

ಆ್ಯಂಕರ್ : ವಿಜಯಪುರ ನಗರದ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ವೇಗ ನೀಡುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ. ಇತ್ತೀಚೆಗೆ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ವಿಜಯಪುರ ರೈಲ್ವೆ ನಿಲ್ದಾಣದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚುವರಿ ಪ್ರವೇಶ ಹಾಗೂ ನಿರ್ಗಮನ ದ್ವಾರ ನಿರ್ಮಿಸುವಂತೆ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಹಾಗೂ ರಾಜ್ಯ ರೈಲ್ವೆ ಸಚಿವ ವಿ. ಸೋಮಣ್ಣ ಅವರಿಗೆ ಪತ್ರ ಬರೆದು ಮನವಿ ಮಾಡಿರುವ ಬೆನ್ನಲ್ಲೇ, ಅದಕ್ಕೆ ಪೂರಕವಾದ ರಸ್ತೆ ಸಂಪರ್ಕ ಕಲ್ಪಿಸುವ ಕುರಿತು ಕಾರ್ಯಚಟುವಟಿಕೆಗಳು ಆರಂಭಗೊಂಡಿವೆ.

ಈ ಹಿನ್ನೆಲೆಯಲ್ಲಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ (ವುಡಾ) ಅಧ್ಯಕ್ಷ ಗಂಗಾಧರ ಸಂಬಣ್ಣಿ ಅವರು ನಗರದ ಐಒಸಿ ಪೆಟ್ರೋಲ್ ಬಂಕ್ ಕಾಂಪೌಂಡ್ ಹೊಂದಿಕೊಂಡಿರುವ ಪ್ರದೇಶಕ್ಕೆ ಭೇಟಿ ನೀಡಿ, ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಹೊಸ ಕೂಡು ರಸ್ತೆಯ ನಿರ್ಮಾಣದ ಕುರಿತು ಸ್ಥಳ ಪರಿಶೀಲನೆ ನಡೆಸಿದರು.

ರೈಲ್ವೆ ನಿಲ್ದಾಣಕ್ಕೆ ಹೆಚ್ಚುವರಿ ಪ್ರವೇಶ ಮತ್ತು ನಿರ್ಗಮನ ದ್ವಾರ ನಿರ್ಮಾಣವಾದರೆ ಪ್ರಯಾಣಿಕರಿಗೆ ಸಂಚಾರ ಮತ್ತಷ್ಟು ಸುಲಭವಾಗಲಿದ್ದು, ವಾಹನ ದಟ್ಟಣೆ ಕಡಿಮೆಯಾಗುವ ಜೊತೆಗೆ ತುರ್ತು ಸಂದರ್ಭಗಳಲ್ಲಿ ಸುಗಮ ಸಂಚಾರಕ್ಕೂ ಅನುಕೂಲವಾಗಲಿದೆ. ಇದರೊಂದಿಗೆ ರೈಲ್ವೆ ನಿಲ್ದಾಣದ ಸೇವೆಯ ಗುಣಮಟ್ಟ ಮತ್ತು ಕಾರ್ಯಕ್ಷಮತೆಯೂ ಗಮನಾರ್ಹವಾಗಿ ಸುಧಾರಿಸುವ ನಿರೀಕ್ಷೆಯಿದೆ.

ಸ್ಥಳ ಪರಿಶೀಲನೆಯ ವೇಳೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಗಂಗಾಧರ ಸಂಬಣ್ಣಿ ಅವರು, ಹೊಸ ಸಂಪರ್ಕ ರಸ್ತೆಯ ನಿರ್ಮಾಣಕ್ಕೆ ಅಗತ್ಯವಿರುವ ತಾಂತ್ರಿಕ ಹಾಗೂ ಆಡಳಿತಾತ್ಮಕ ಅಂಶಗಳ ಕುರಿತು ಮಾಹಿತಿ ಪಡೆದುಕೊಂಡರು. ರೈಲ್ವೆ ಇಲಾಖೆ ಹಾಗೂ ಸಂಬಂಧಿತ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಯೋಜನೆ ಜಾರಿಯಾದಲ್ಲಿ ವಿಜಯಪುರ ರೈಲ್ವೆ ನಿಲ್ದಾಣಕ್ಕೆ ನಗರ ಹಾಗೂ ರಾಷ್ಟ್ರೀಯ ಹೆದ್ದಾರಿಯಿಂದ ಸುಗಮ ಸಂಪರ್ಕ ದೊರೆಯಲಿದ್ದು, ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗುವುದರ ಜೊತೆಗೆ ನಗರದ ಅಭಿವೃದ್ಧಿಗೂ ಹೊಸ ಆಯಾಮ ದೊರೆಯಲಿದೆ ಎಂದು ಅಭಿಪ್ರಾಯ ವ್ಯಕ್ತವಾಯಿತು.

ಈ ಸಂದರ್ಭದಲ್ಲಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದು, ಸ್ಥಳದ ವಿವಿಧ ಆಯಾಮಗಳನ್ನು ಪರಿಶೀಲಿಸಿ ಅಗತ್ಯ ಮಾಹಿತಿಯನ್ನು ನೀಡಿದರು. ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಂದಿನ ಹಂತದ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚರ್ಚೆ ನಡೆಯಿತು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande