
ಬೆಂಗಳೂರು, 13 ಜುಲೈ (ಹಿ.ಸ.):
ಆ್ಯಂಕರ್:
ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ದುಸ್ಥಿತಿಯನ್ನು ಉಲ್ಲೇಖಿಸಿ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, ಕನ್ನಡ, ನಾಡು-ನುಡಿ ಮತ್ತು ಸಂಸ್ಕೃತಿಯ ಬಗ್ಗೆ ಭಾಷಣ ಮಾಡುವ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದ್ದಾರೆ.
ರಾಜ್ಯದ ಏಕೈಕ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಅಸ್ತಿತ್ವ ಉಳಿಸಿಕೊಳ್ಳುವುದೇ ಸವಾಲಾಗಿದ್ದು, 2022-23ರಲ್ಲಿ 740 ಇದ್ದ ವಿದ್ಯಾರ್ಥಿಗಳ ಸಂಖ್ಯೆ 2025-26ರಲ್ಲಿ 160ಕ್ಕೆ ಇಳಿದಿದೆ ಎಂದು ಅವರು ಹೇಳಿದ್ದಾರೆ. ವಿದ್ಯಾರ್ಥಿಗಳ ಕೊರತೆಯಿಂದ 15 ವಿಭಾಗಗಳು ಮುಚ್ಚುವ ಹಂತದಲ್ಲಿದ್ದು, ಮೂಲಸೌಕರ್ಯಗಳ ಕೊರತೆ, ಖಾಲಿ ಹುದ್ದೆಗಳು, ಆಡಳಿತ ವೈಫಲ್ಯ ಹಾಗೂ ದೂರದೃಷ್ಟಿಯಿಲ್ಲದ ನೀತಿಗಳಿಂದ ವಿಶ್ವವಿದ್ಯಾಲಯ ಸಂಕಷ್ಟಕ್ಕೆ ಸಿಲುಕಿದೆ ಎಂದು ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕನ್ನಡದ ಹೆಸರಿನಲ್ಲಿ ಭಾವನಾತ್ಮಕ ರಾಜಕೀಯ ಮಾಡುವ ಬದಲು ಕನ್ನಡದ ಹೆಮ್ಮೆಯ ಶಿಕ್ಷಣ ಸಂಸ್ಥೆಗಳನ್ನು ಉಳಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿರುವ ಅಶೋಕ, ಕೂಡಲೇ ಅಗತ್ಯ ಅನುದಾನ ಬಿಡುಗಡೆ ಮಾಡಿ, ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಗೆ ಉದ್ಯೋಗಾಧಾರಿತ ಹೊಸ ಕೋರ್ಸ್‌ಗಳನ್ನು ಆರಂಭಿಸಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯವನ್ನು ಉಳಿಸಬೇಕು ಎಂದು ಒತ್ತಾಯಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.