
ಹಾಸನ, 14 ಜುಲೈ (ಹಿ.ಸ.):
ಆ್ಯಂಕರ್:ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026ರ ಅಂಗವಾಗಿ ಮತದಾರರಿಗೆ ವಿತರಿಸಲಾದ ಎನ್ಯೂಮೆರೇಷನ್ ನಮೂನೆಗಳನ್ನು ಶೀಘ್ರವಾಗಿ ಭರ್ತಿ ಮಾಡಿ ಮತಗಟ್ಟೆ ಅಧಿಕಾರಿಗಳಿಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಮನವಿ ಮಾಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇದುವರೆಗೆ ಶೇ.98ರಷ್ಟು ಎನ್ಯೂಮೆರೇಷನ್ ನಮೂನೆಗಳನ್ನು ವಿತರಿಸಲಾಗಿದ್ದು, ಸ್ವೀಕರಿಸಿದ ನಮೂನೆಗಳ ಪೈಕಿ ಶೇ.48ರಷ್ಟು ಮಾಹಿತಿಯನ್ನು ಡಿಜಿಟಲೀಕರಣಗೊಳಿಸಲಾಗಿದೆ ಎಂದು ತಿಳಿಸಿದರು.
ನಮೂನೆಗಳಲ್ಲಿ ಮತದಾರರ ಹೆಸರು ಈಗಾಗಲೇ ಮುದ್ರಿತವಾಗಿದ್ದು, ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಸಹಿಯೊಂದಿಗೆ ಒಂದು ಪ್ರತಿಯನ್ನು ಮತಗಟ್ಟೆ ಅಧಿಕಾರಿಗಳಿಗೆ ಸಲ್ಲಿಸಬೇಕು ಎಂದು ಹೇಳಿದರು. ಮನೆಯ ವಯಸ್ಕರೂ ಸಹ ಮತದಾರರ ಪರವಾಗಿ ನಮೂನೆ ಭರ್ತಿ ಮಾಡಿ ಸಹಿ ಮಾಡಬಹುದಾಗಿದೆ ಎಂದು ಸ್ಪಷ್ಟಪಡಿಸಿದರು.
ಜಿಲ್ಲೆಯಲ್ಲಿ 15,092 ಗಣತಿ ನಮೂನೆಗಳನ್ನು ಸಂಗ್ರಹಿಸಲಾಗದ ಪ್ರಕರಣಗಳನ್ನು ಗುರುತಿಸಲಾಗಿದ್ದು, ಅವುಗಳಲ್ಲಿ ಹೆಚ್ಚಿನವು ಮರಣ, ಶಾಶ್ವತ ವಲಸೆ ಹಾಗೂ ಪುನರಾವರ್ತನೆಯ ಪ್ರಕರಣಗಳಾಗಿವೆ ಎಂದರು.
ಎಸ್‌ಐಆರ್ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಲಾಗುತ್ತಿದ್ದು, ಮತಗಟ್ಟೆ ಅಧಿಕಾರಿಗಳು, ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರು ಹಾಗೂ ಸಾರ್ವಜನಿಕರು ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಹೆಚ್.ಕೆ. ಕೃಷ್ಣಮೂರ್ತಿ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.