
ಗದಗ, 14 ಜುಲೈ (ಹಿ.ಸ.)
ಆ್ಯಂಕರ್:- ಗದಗ ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಅತ್ಯಂತ ನಿಖರವಾಗಿ ಮತ್ತು ಪಾರದರ್ಶಕವಾಗಿ ಪೂರ್ಣಗೊಳಿಸಬೇಕು. ಯಾವುದೇ ಒಬ್ಬ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಸೇರ್ಪಡೆಗೆ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಚುನಾವಣಾ ಅಧಿಕಾರಿಗಳೊಂದಿಗೆ ಹಮ್ಮಿಕೊಳ್ಳಲಾಗಿದ್ದ ಎಸ್.ಐ.ಆರ್. ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲಾ 967 ಮತಗಟ್ಟೆಗಳಲ್ಲಿ ಬಿ.ಎಲ್.ಒ ಗಳು ಕಡ್ಡಾಯವಾಗಿ ಲಭ್ಯವಿದ್ದು, ಮತದಾರರ ಮಾಹಿತಿ ಸಂಗ್ರಹಣೆ ಹಾಗೂ ನಮೂನೆಗಳ ಭರ್ತಿ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಕರ್ತವ್ಯ ಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲೆಯ ಎಲ್ಲಾ 967 ಮತಗಟ್ಟೆಗಳಲ್ಲೂ ಮತದಾರರ ಅನುಕೂಲ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಫಾರ್ಮ್ ಭರ್ತಿ ಮಾಡಲು ತಿಳಿಯದ ಸಾರ್ವಜನಿಕರಿಗೆ ನೆರವಾಗಲು ಸ್ವಸಹಾಯ ಗುಂಪಿನ ಸದಸ್ಯರನ್ನು ಹಾಗೂ ಸ್ವಯಂಸೇವಕರನ್ನು ನಿಯೋಜಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಮದುವೆಯ ನಂತರ ಹೆಸರು ಬದಲಾಗಿರುವ ಮಹಿಳೆಯರ ವಿವರಗಳು, ವಿಳಾಸ ಬದಲಾವಣೆ ಹಾಗೂ ಮರಣ ಹೊಂದಿದವರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡುವ ಪ್ರಕ್ರಿಯೆಯನ್ನು ಸ್ಥಳೀಯವಾಗಿ ಸೂಕ್ತ ತನಿಖೆ ಮತ್ತು ಕ್ರಾಸ್ ವೆರಿಫಿಕೇಶನ್ ಮೂಲಕವೇ ಖಚಿತಪಡಿಸಿಕೊಳ್ಳಬೇಕು ಎಂದರು.
ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಗೊಂದಲ ಹಾಗೂ ತಪ್ಪುಗಳು ಇದ್ದರೆ ಸಾರ್ವಜನಿಕರು ಆಯಾ ತಾಲೂಕಿನ ತಹಶೀಲ್ದಾರ್ ಅಥವಾ ಸಹಾಯಕ ಮತದಾರರ ನೋಂದಣಾಧಿಕಾರಿಗಳನ್ನು ಸಂಪರ್ಕಿಸಿ ಸರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಮತದಾರರ ಪಟ್ಟಿ ಪರಿಷ್ಕರಣೆಯು ಪ್ರಜಾಪ್ರಭುತ್ವದ ಅತ್ಯಂತ ಪ್ರಮುಖ ಪ್ರಕ್ರಿಯೆಯಾಗಿದೆ. ಜುಲೈ 20 ರೊಳಗಾಗಿ ಎಲ್ಲಾ ಡಿಜಿಟೈಸೇಶನ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಕಾಲಮಿತಿ ನಿಗದಿಪಡಿಸಲಾಗಿದೆ. ಸಾರ್ವಜನಿಕರು ತಮ್ಮ ಜವಾಬ್ದಾರಿಯನ್ನು ಅರಿತು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಮತ್ತು ವಿವರಗಳು ಸರಿಯಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವು ಅತ್ಯಂತ ಪಾರದರ್ಶಕ ಹಾಗೂ ಯಶಸ್ವಿಯಾಗಿ ನಡೆಯಲು ಬೂತ್ ಮಟ್ಟದ ಅಧಿಕಾರಿಗಳು ಹಾಗೂ ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಗದಗ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಅವರು ತಿಳಿಸಿದರು.
ಮತದಾರರ ಪಟ್ಟಿಯಲ್ಲಿರುವ ಲೋಪದೋಷಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಮೃತರಾದ ಹಾಗೂ ಕಾಯಂ ಆಗಿ ಸ್ಥಳಾಂತರಗೊಂಡಿರುವ ಮತದಾರರ ಹೆಸರುಗಳನ್ನು ಕೈಬಿಡುವ ಪ್ರಕ್ರಿಯೆಯನ್ನು ನಿಯಮಾನುಸಾರವೇ ಕೈಗೊಳ್ಳಬೇಕು. ಬಿಎಲ್ಒಗಳು ಸ್ಥಳೀಯ ಮಾಹಿತಿ ಮತ್ತು ಭೇಟಿಯ ಆಧಾರದ ಮೇಲೆ ಮಹಜರು ನಡೆಸಿ ಈ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಯಾವುದೇ ವ್ಯಕ್ತಿಯ ಹೆಸರು ಪಟ್ಟಿಯಿಂದ ಬಿಟ್ಟುಹೋಗದಂತೆ ಅಥವಾ ಅನರ್ಹರ ಹೆಸರು ಸೇರ್ಪಡೆಯಾಗದಂತೆ ಎಚ್ಚರ ವಹಿಸಬೇಕು. ಈ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳ ಬಿಎಲ್ಎಗಳು ತಮಗೆ ಲಭ್ಯವಿರುವ ಮಾಹಿತಿಯನ್ನು ಹಂಚಿಕೊಳ್ಳುವ ಮೂಲಕ ಅಧಿಕಾರಿಗಳೊಂದಿಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಕರೆ ನೀಡಿದರು.
ಮುಂದಿನ ದಿನಗಳಲ್ಲಿ ಮತದಾನದ ಹಕ್ಕು ಪಡೆಯಲಿರುವ ಯುವ ಮತದಾರರನ್ನು ಪಟ್ಟಿಗೆ ಸೇರಿಸಲು ಹೆಚ್ಚಿನ ಆದ್ಯತೆ ನೀಡಬೇಕು. ಅಕ್ಟೋಬರ್ ಅಂತ್ಯಕ್ಕೆ 18 ವರ್ಷ ತುಂಬಲಿರುವ ಅರ್ಹ ಯುವಕ-ಯುವತಿಯರಿಂದ ಈಗಿನಿಂದಲೇ ಫಾರ್ಮ್ ನಂ. 6 ರ ಮೂಲಕ ಅರ್ಜಿಗಳನ್ನು ಪಡೆದು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಬಿಎಲ್ಒಗಳು ಕ್ರಮ ವಹಿಸಬೇಕು ಎಂದರು.
ಮತದಾರರ ಪಟ್ಟಿ ನೋಂದಣಿ ಅಥವಾ ತಿದ್ದುಪಡಿಗಾಗಿ ಸಾರ್ವಜನಿಕರು ಸಲ್ಲಿಸುವ ಅರ್ಜಿ ನಮೂನೆಗಳಲ್ಲಿ ಸಣ್ಣಪುಟ್ಟ ತಪುö್ಪಗಳಾಗಿದ್ದರೆ ಅಥವಾ ವೈಟ್ನರ್ ಬಳಕೆಯಾಗಿದ್ದರೆ, ಅಂತಹ ಅರ್ಜಿಗಳನ್ನು ತಿರಸ್ಕರಿಸುವ ಅಗತ್ಯವಿಲ್ಲ. ಮತದಾರರ ಪಟ್ಟಿಯ ಕರಡು ಪ್ರತಿಯನ್ನು ಪರಿಶೀಲಿಸಿ, ಅದರಲ್ಲಿ ಕಂಡುಬರುವ ತಪುö್ಪಗಳನ್ನು ನಿಯಮಾನುಸಾರ ಅರ್ಜಿ ಸಲ್ಲಿಸುವ ಮೂಲಕ ಸರಿಪಡಿಸಿಕೊಳ್ಳಲು ಸಾರ್ವಜನಿಕರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಿವೃತ್ತ ನೌಕರರು ಅಥವಾ ಅನುಭವ ಹೊಂದಿದ ಅಧಿಕಾರಿಗಳ ಸೇವೆಯನ್ನು ಚುನಾವಣಾ ಪ್ರಕ್ರಿಯೆಗಳಲ್ಲಿ ಸಮರ್ಪಕವಾಗಿ ಬಳಸಿಕೊಳ್ಳಲಾಗುತ್ತಿದ್ದು, ಇದು ಚುನಾವಣಾ ಕಾರ್ಯವನ್ನು ಇನ್ನಷ್ಟು ಸುಗಮಗೊಳಿಸಲಿದೆ. ಜಿಲ್ಲೆಯಲ್ಲಿ ಶೇ. 60 ರಿಂದ 70 ರಷ್ಟು ಬಿಎಲ್ಒ ಕಾರ್ಯಗಳು ಈಗಾಗಲೇ ಯಶಸ್ವಿಯಾಗಿ ಪ್ರಗತಿಯಲ್ಲಿದ್ದು, ಇನ್ನುಳಿದ ಕಾರ್ಯಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲಾಗುವುದು.
ಸಾರ್ವಜನಿಕರು ಮತ್ತು ರಾಜಕೀಯ ಪಕ್ಷಗಳು ಮತದಾರರ ಪಟ್ಟಿ ಪರಿಷ್ಕರಣೆಯ ಈ ಮಹತ್ವದ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಿ, ಒಂದು ಸ್ವಚ್ಛ ಮತ್ತು ದೋಷರಹಿತ ಮತದಾರರ ಪಟ್ಟಿ ತಯಾರಿಕೆಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಅವರು ಮನವಿ ಮಾಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಚುನಾವಣಾ ತಹಶೀಲ್ದಾರ ಸಂತೋಷ ಹಿರೇಮಠ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ.ನಂದಾ ಹಣಬರಟ್ಟಿ, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಚುನಾವಣಾ ಶಾಖೆಯ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಸಿಬ್ಬಂದಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP