ಜು.15ರಂದು ಬಾದಾಮಿ-ಗುಳೇದಗುಡ್ಡ ಬರಪೀಡಿತ ಪ್ರದೇಶಗಳಿಗೆ ನಿಖಿಲ್ ಕುಮಾರಸ್ವಾಮಿ ಭೇಟಿ: ಹನಮಂತ ಮಾವಿನಮರದ
ಬಾಗಲಕೋಟೆ , 14 ಜುಲೈ (ಹಿ.ಸ.) ಆ್ಯಂಕರ್ : ಉತ್ತರ ಕರ್ನಾಟಕದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವ ಪರಿಣಾಮ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯ ಸರ್ಕಾರ ಕೂಡಲೇ ಬರಪೀಡಿತ ಪ್ರದೇಶಗಳನ್ನು ಅಧಿಕೃತವಾಗಿ ಘೋಷಿಸಬೇಕು ಎಂಬ ಆಗ್ರಹದೊಂದಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ
ವಿಸಿಟ್


ಬಾಗಲಕೋಟೆ , 14 ಜುಲೈ (ಹಿ.ಸ.)

ಆ್ಯಂಕರ್ : ಉತ್ತರ ಕರ್ನಾಟಕದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವ ಪರಿಣಾಮ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯ ಸರ್ಕಾರ ಕೂಡಲೇ ಬರಪೀಡಿತ ಪ್ರದೇಶಗಳನ್ನು ಅಧಿಕೃತವಾಗಿ ಘೋಷಿಸಬೇಕು ಎಂಬ ಆಗ್ರಹದೊಂದಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಜುಲೈ 15ರಂದು ಬಾಗಲಕೋಟೆ ಜಿಲ್ಲೆಯ ಬಾದಾಮಿ ಹಾಗೂ ಗುಳೇದಗುಡ್ಡ ತಾಲೂಕಿನ ಬರಪೀಡಿತ ಗ್ರಾಮಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಲಿದ್ದಾರೆ ಎಂದು ಜೆಡಿಎಸ್ ಬಾಗಲಕೋಟೆ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ ತಿಳಿಸಿದ್ದಾರೆ.

ನಗರದ ಕಾನಿಪ ಭವನದಲ್ಲ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಖಿಲ್ ಕುಮಾರಸ್ವಾಮಿ ಅವರು ಜುಲೈ 14ರಂದು ಬಾದಾಮಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದು, ಜುಲೈ 15ರಂದು ಬೆಳಿಗ್ಗೆ 11 ಗಂಟೆಗೆ ಬಾದಾಮಿ ತಾಲೂಕಿನ ಹಲಕುರ್ಕಿ ಹಾಗೂ ಹಂಸನೂರ ಗ್ರಾಮಗಳಿಗೆ ಭೇಟಿ ನೀಡಿ ರೈತರೊಂದಿಗೆ ನೇರವಾಗಿ ಮಾತುಕತೆ ನಡೆಸಲಿದ್ದಾರೆ. ಬಳಿಕ ಗುಳೇದಗುಡ್ಡ ತಾಲೂಕಿನ ಬರಪೀಡಿತ ಪ್ರದೇಶಗಳಿಗೂ ಭೇಟಿ ನೀಡಿ ಅಲ್ಲಿನ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಕಡಿಮೆ ಮಳೆಯ ಪರಿಣಾಮ ಬೆಳೆಗಳು ಒಣಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೇವು ಮತ್ತು ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದ್ದು, ರೈತರು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಈ ಎಲ್ಲ ಸಮಸ್ಯೆಗಳ ಕುರಿತು ನಿಖಿಲ್ ಕುಮಾರಸ್ವಾಮಿ ಅವರು ರೈತರಿಂದ ಮಾಹಿತಿ ಪಡೆದು, ಸ್ಥಳದಲ್ಲಿಯೇ ಪರಿಶೀಲನೆ ನಡೆಸಲಿದ್ದಾರೆ ಎಂದು ಹೇಳಿದರು.

ಬರದ ಪರಿಣಾಮ ಉಂಟಾಗಿರುವ ಬೆಳೆ ಹಾನಿ, ಕುಡಿಯುವ ನೀರಿನ ಅಭಾವ, ಜಾನುವಾರುಗಳಿಗೆ ಮೇವು ಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಸಮಗ್ರ ಅಧ್ಯಯನ ನಡೆಸಿ, ಅದರ ವರದಿಯನ್ನು ಜೆಡಿಎಸ್ ಪಕ್ಷದ ವತಿಯಿಂದ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು. ಸರ್ಕಾರ ತಕ್ಷಣವೇ ಬರಪೀಡಿತ ಪ್ರದೇಶ ಘೋಷಿಸಿ ರೈತರಿಗೆ ಪರಿಹಾರ ಪ್ಯಾಕೇಜ್, ಬೆಳೆ ಪರಿಹಾರ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಅಗತ್ಯ ನೆರವು ಒದಗಿಸಬೇಕು ಎಂದು ಅವರು ಆಗ್ರಹಿಸಿದರು.

ರೈತರ ಸಂಕಷ್ಟವನ್ನು ಅರಿತು ಅವರ ಧ್ವನಿಯನ್ನು ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ಈ ಅಧ್ಯಯನ ಪ್ರವಾಸವನ್ನು ಹಮ್ಮಿಕೊಳ್ಳಲಾಗಿದೆ. ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದು, ಸರ್ಕಾರ ರೈತರ ನೆರವಿಗೆ ತ್ವರಿತ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಹನಮಂತ ಮಾವಿನಮರದ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಜೆಡಿಎಸ್ ಅಧ್ಯಕ್ಷ ಹುಚ್ಚಪ್ಪ ಹದ್ದನ್ನವರ, ನಗರ ಘಟಕದ ಅಧ್ಯಕ್ಷ ಪ್ರಕಾಶ ಕೋಟಿ, ಮುಖಂಡರಾದ ಚಂದ್ರು ಸೂಡಿ, ರವಿ ಹಳ್ಳಿ, ಚಂದ್ರಕಾಂತ ಶೇಖಾ, ಸಿಕಂದರ ಖಾಜಿ, ಮಲ್ಲು ಹಡಪದ, ರಾಜು ಪಾತ್ರೋಟ, ಬಸವರಾಜ ಅಮರಗೋಳ, ಚನ್ನು ಮುಚ್ಚಳಗುಡ್ಡ, ಮುತ್ತಪ್ಪ ಕಾಳನ್ನವರ, ಮಹಾಂತೇಶ ತಳವಾರ ಹಾಗೂ ಮಹಾಂತೇಶ ಪೂಜಾರ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande