
ವಿಜಯಪುರ, 14 ಜುಲೈ (ಹಿ.ಸ.)
ಆ್ಯಂಕರ್ : ಬಿಡದಿ ಟೌನ್ಶಿಪ್ ಯೋಜನೆಗೆ ಸಂಬಂಧಿಸಿದಂತೆ ರೈತರ ವಿರೋಧದ ನಡುವೆಯೂ ಅವರ ಅನುಮತಿಯಿಲ್ಲದೆ ಜಂಟಿ ಅಳತೆ ಪ್ರಮಾಣೀಕರಣ ಸಮಿತಿ ಅಧಿಕಾರಿಗಳು ಮಂಡಲಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಪ್ರತಿಭಟನೆ ನಡೆಸಿದ ರೈತರ ವಿರುದ್ಧ ಎಫ್ಐಆರ್ ದಾಖಲಿಸಿರುವ ಕ್ರಮವನ್ನು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ರೈತರ ಒಪ್ಪಿಗೆ ಇಲ್ಲದೆ ಬಲವಂತವಾಗಿ ಜಂಟಿ ಅಳತೆ ಪ್ರಕ್ರಿಯೆ ನಡೆಸಲು ಮುಂದಾಗಿರುವುದು ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಬಯಲಿಗೆಳೆದಿದೆ ಎಂದು ಆರೋಪಿಸಿದ್ದಾರೆ. ತಮ್ಮ ಭೂಮಿ ಮತ್ತು ಬದುಕಿನ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ಅನ್ನದಾತರ ವಿರುದ್ಧ ಪ್ರಕರಣ ದಾಖಲಿಸಿರುವುದು ಅತ್ಯಂತ ಖಂಡನೀಯ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾದ ಕ್ರಮ ಎಂದು ಹೇಳಿದ್ದಾರೆ.
ರೈತರ ನ್ಯಾಯಯುತ ಹೋರಾಟವನ್ನು ಹತ್ತಿಕ್ಕುವ ಉದ್ದೇಶದಿಂದ ಸರ್ಕಾರ ಮತ್ತು ಅಧಿಕಾರಿಗಳು ದೌರ್ಜನ್ಯ ಎಸಗುತ್ತಿದ್ದಾರೆ. ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಿದ ರೈತರ ಮೇಲೆ ಕಾನೂನು ಕ್ರಮ ಜರುಗಿಸುವ ಮೂಲಕ ಅವರನ್ನು ಬೆದರಿಸುವ ಪ್ರಯತ್ನ ನಡೆಯುತ್ತಿದೆ ಎಂದು ಯತ್ನಾಳ್ ಆರೋಪಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ರೈತರು ಯಾವುದೇ ಕಾರಣಕ್ಕೂ ಧೃತಿಗೆಡಬಾರದು. ತಮ್ಮ ಪರವಾಗಿ ಸಂಪೂರ್ಣ ಬೆಂಬಲವಿದ್ದು, ತಮ್ಮ ಕಾನೂನು ತಂಡದ ಮೂಲಕ ಉಚಿತ ಕಾನೂನು ನೆರವು ಒದಗಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.
ರೈತರು ತಮ್ಮ ನ್ಯಾಯಸಮ್ಮತ ಹೋರಾಟವನ್ನು ಯಾವುದೇ ಕಾರಣಕ್ಕೂ ಕೈಬಿಡಬಾರದು. ಈ ಹೋರಾಟ ತಾರ್ಕಿಕ ಅಂತ್ಯ ಕಾಣುವವರೆಗೂ ನಾನು ನಿಮ್ಮೊಂದಿಗೆ ದೃಢವಾಗಿ ನಿಲ್ಲುತ್ತೇನೆ. ರೈತರ ಹಕ್ಕುಗಳನ್ನು ಕಾಪಾಡಲು ಅಗತ್ಯವಿರುವ ಎಲ್ಲ ರೀತಿಯ ಹೋರಾಟ ನಡೆಸಲಾಗುವುದು, ಎಂದು ಯತ್ನಾಳ್ ತಿಳಿಸಿದ್ದಾರೆ.
ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ಕಳೆದ ಕೆಲವು ದಿನಗಳಿಂದ ರೈತರು ನಿರಂತರ ಹೋರಾಟ ನಡೆಸುತ್ತಿದ್ದು, ಜಂಟಿ ಅಳತೆ ಪ್ರಕ್ರಿಯೆಯನ್ನು ತಡೆದು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಬೆಳವಣಿಗೆಯ ನಡುವೆ ರೈತರ ವಿರುದ್ಧ ಎಫ್ಐಆರ್ ದಾಖಲಾಗಿರುವುದು ಪ್ರಕರಣಕ್ಕೆ ಮತ್ತಷ್ಟು ರಾಜಕೀಯ ಬಣ್ಣ ನೀಡಿದ್ದು, ಮುಂದಿನ ದಿನಗಳಲ್ಲಿ ಈ ಹೋರಾಟ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande