
ತುಮಕೂರು, 14 ಜುಲೈ (ಹಿ.ಸ.):
ಆ್ಯಂಕರ್:
ಮೇರಾ ಯುವ ಭಾರತ ಯೋಜನೆಯಡಿ ನಡೆಯುತ್ತಿರುವ ಯುವಕರ ನೋಂದಣಿ ಹಾಗೂ ಜಾಗೃತಿ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ತುಮಕೂರು ಜಿಲ್ಲಾಧಿಕಾರಿಗಳು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮೈ ಭಾರತ ಜಿಲ್ಲಾ ಸಲಹಾ ಸಮಿತಿ ಹಾಗೂ ಜಿಲ್ಲಾ ಸಮನ್ವಯ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯುವಕರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವುದು, ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸುವುದು ಹಾಗೂ ವಿಕಸಿತ ಭಾರತ–2047 ಗುರಿ ಸಾಧನೆಯಲ್ಲಿ ಯುವಜನರನ್ನು ಪಾಲುದಾರರನ್ನಾಗಿ ರೂಪಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.
ಜುಲೈ 1ರಿಂದ ಆಗಸ್ಟ್ 15ರವರೆಗೆ ನಡೆಯುತ್ತಿರುವ ತೀವ್ರ ನೋಂದಣಿ ಅಭಿಯಾನದ ಅಂಗವಾಗಿ ಜಿಲ್ಲೆಯ ಎಲ್ಲಾ ಶಾಲೆಗಳು, ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳನ್ನು ಮೈ ಭಾರತ್ ಪೋರ್ಟಲ್‌ನಲ್ಲಿ ನೋಂದಾಯಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಯುವಜನ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ವಿವಿಧ ಇಲಾಖೆಗಳು ಪರಸ್ಪರ ಸಹಕಾರ ಮತ್ತು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.