
ವಿಜಯಪುರ, 15 ಜುಲೈ (ಹಿ.ಸ.)
ಆ್ಯಂಕರ್ : ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು, ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರ (ಆಲಮಟ್ಟಿ) ಜಲಾಶಯದಿಂದ ತಕ್ಷಣ ಕಾಲುವೆಗಳಿಗೆ ನೀರು ಬಿಡುಗಡೆ ಮಾಡುವಂತೆ ಬಸವನಬಾಗೇವಾಡಿ ಶಾಸಕ ಹಾಗೂ ಮಾಜಿ ಸಚಿವ ಶಿವಾನಂದ ಪಾಟೀಲ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿಗಳಿಗೆ ಸಲ್ಲಿಸಿರುವ ಮನವಿಯಲ್ಲಿ, ಆಲಮಟ್ಟಿ ಜಲಾಶಯವು ಮುಂಗಾರು ಅವಧಿಯಲ್ಲಿ ಸಂಪೂರ್ಣ ಭರ್ತಿಯಾಗದಿದ್ದರೂ ಹಿಂಗಾರು ಮಳೆಯಿಂದ ಭರ್ತಿಯಾಗಿರುವ ಹಲವು ಉದಾಹರಣೆಗಳು ಹಿಂದೆಯೂ ಇವೆ. ಆದ್ದರಿಂದ ಈಗಲೇ ಕಾಲುವೆಗಳಿಗೆ ನೀರು ಬಿಡುಗಡೆ ಮಾಡಿದರೆ ಮುಂದಿನ ದಿನಗಳಲ್ಲಿ ನೀರಿನ ಕೊರತೆ ಉಂಟಾಗಬಹುದು ಎಂಬ ಆತಂಕಕ್ಕೆ ಯಾವುದೇ ಆಧಾರವಿಲ್ಲ ಎಂದು ಅವರು ತಿಳಿಸಿದ್ದಾರೆ.
ಪ್ರಸ್ತುತ ಜಲಾಶಯದಲ್ಲಿ ಸುಮಾರು 70 ಟಿಎಂಸಿ ಅಡಿ ಬಳಸಬಹುದಾದ ನೀರು ಲಭ್ಯವಿದ್ದು, ಸಂಪೂರ್ಣ ಭರ್ತಿಯಾಗಲು ಕೇವಲ 35 ಟಿಎಂಸಿ ಅಡಿ ನೀರಿನ ಅವಶ್ಯಕತೆ ಇದೆ. ಮುಂಗಾರು ಇನ್ನೂ ಪೂರ್ಣಗೊಂಡಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಜಲಾಶಯ ಭರ್ತಿಯಾಗುವ ವಿಶ್ವಾಸವಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಅನೇಕ ಗ್ರಾಮಗಳಲ್ಲಿ ಜನರು ಹಾಗೂ ಜಾನುವಾರುಗಳು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ಇಂತಹ ತುರ್ತು ಪರಿಸ್ಥಿತಿಯಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ಕಾದು ನಿರ್ಧಾರ ಕೈಗೊಳ್ಳುವ ಬದಲು ಕೂಡಲೇ ಕಾಲುವೆಗಳಿಗೆ ನೀರು ಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಪ್ರತಿ ವರ್ಷ ಜಲಾಶಯ ಭರ್ತಿಯಾದ ಬಳಿಕ 100 ರಿಂದ 200 ಟಿಎಂಸಿ ಅಡಿ ನೀರು ವ್ಯರ್ಥವಾಗಿ ನದಿಯ ಮೂಲಕ ಹರಿದು ಹೋಗುತ್ತಿರುವುದು ಸಾಮಾನ್ಯವಾಗಿದೆ. ಆದರೂ ಈ ಬಾರಿ ಜಲಾಶಯಕ್ಕೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಬಂದಿಲ್ಲ ಎಂಬ ಕಾರಣ ನೀಡಿ ಅಧಿಕಾರಿಗಳು ನೀರು ಬಿಡುಗಡೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನೂ 10 ರಿಂದ 15 ಟಿಎಂಸಿ ಅಡಿ ನೀರು ಸಂಗ್ರಹವಾದ ಬಳಿಕವೇ ಕಾಲುವೆಗಳಿಗೆ ನೀರು ಬಿಡಬಹುದು ಎಂಬ ಅಧಿಕಾರಿಗಳ ನಿಲುವು ಜನಹಿತಕ್ಕೆ ವಿರುದ್ಧವಾಗಿದೆ. ಈ ವಿಳಂಬದಿಂದ ಸರ್ಕಾರ ಜನರ ಆಕ್ರೋಶಕ್ಕೆ ಗುರಿಯಾಗುವ ಸಾಧ್ಯತೆ ಇದೆ ಎಂದು ಶಿವಾನಂದ ಪಾಟೀಲ ಎಚ್ಚರಿಕೆ ನೀಡಿದ್ದಾರೆ.
ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡ ಬಳಿಕ ಹಲವು ಜನಪರ ಹಾಗೂ ತುರ್ತು ನಿರ್ಧಾರಗಳನ್ನು ಕೈಗೊಂಡು ರಾಜ್ಯದ ಜನರ ವಿಶ್ವಾಸ ಗಳಿಸಿರುವ ನೀವು, ಉತ್ತರ ಕರ್ನಾಟಕದ ಜನರ ಕುಡಿಯುವ ನೀರಿನ ಸಮಸ್ಯೆಯನ್ನೂ ಅದೇ ತುರ್ತುತೆಯಲ್ಲಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಆಲಮಟ್ಟಿ ಜಲಾಶಯ ಹಿಂಗಾರು ಮಳೆಯಿಂದ ಭರ್ತಿಯಾಗುವ ಸಾಧ್ಯತೆ ಹೆಚ್ಚಿರುವುದರಿಂದ ಭವಿಷ್ಯದ ಆತಂಕಗಳನ್ನು ಮುಂದಿಟ್ಟು ವಿಳಂಬ ಮಾಡದೆ, ಜನರ ಹಿತದೃಷ್ಟಿಯಿಂದ ಕೂಡಲೇ ಕಾಲುವೆಗಳಿಗೆ ನೀರು ಹರಿಸಲು ಆದೇಶ ನೀಡುವಂತೆ ಶಿವಾನಂದ ಪಾಟೀಲ ಅವರು ಮುಖ್ಯಮಂತ್ರಿಗೆ ಸಲ್ಲಿಸಿರುವ ಮನವಿಯಲ್ಲಿ ಒತ್ತಾಯಿಸಿದ್ದಾರೆ
---------------
ಹಿಂದೂಸ್ತಾನ್ ಸಮಾಚಾರ್ / jyothi deshpande