
ವಿಜಯಪುರ, 15 ಜುಲೈ (ಹಿ.ಸ.)
ಆ್ಯಂಕರ್ : ವಿಜಯಪುರ ನಗರದ ವಾರ್ಡ್ ನಂ. 6ರ ವ್ಯಾಪ್ತಿಯ ಕೆ.ಎಚ್.ಪಿ. ಕಾಲೊನಿಯಲ್ಲಿರುವ ಕ್ರೀಡಾ ವಸತಿ ನಿಲಯದ ಆವರಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮಂಜೂರಾಗಿರುವ ರೂ. 3 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭೂಮಿಪೂಜೆ ನೆರವೇರಿಸಿದರು.
ಈ ಯೋಜನೆಯಡಿ ಆಧುನಿಕ ಮಾದರಿಯ ಬಾಸ್ಕೆಟ್ಬಾಲ್ ಹಾಗೂ ವಾಲಿಬಾಲ್ ಅಂಕಣಗಳ ನಿರ್ಮಾಣ ಸೇರಿದಂತೆ ಕ್ರೀಡಾ ವಸತಿ ನಿಲಯದ ಮೂಲಸೌಕರ್ಯ ಅಭಿವೃದ್ಧಿಗೆ ಚಾಲನೆ ನೀಡಲಾಯಿತು.
ಈ ಕಾಮಗಾರಿಗಳಿಂದ ವಿಜಯಪುರ ಜಿಲ್ಲೆಯ ಕ್ರೀಡಾಪಟುಗಳಿಗೆ ಅತ್ಯಾಧುನಿಕ ತರಬೇತಿ ಸೌಲಭ್ಯಗಳು ಲಭ್ಯವಾಗಲಿದ್ದು, ಗ್ರಾಮೀಣ ಹಾಗೂ ನಗರ ಪ್ರದೇಶಗಳ ಪ್ರತಿಭಾವಂತ ಯುವ ಕ್ರೀಡಾಪಟುಗಳಿಗೆ ತಮ್ಮ ಕೌಶಲ್ಯವನ್ನು ಮತ್ತಷ್ಟು ಅಭಿವೃದ್ಧಿಪಡಿಸಿಕೊಳ್ಳಲು ಉತ್ತಮ ವೇದಿಕೆ ಸಿಗಲಿದೆ ಎಂದು ಅಭಿಪ್ರಾಯ ವ್ಯಕ್ತವಾಯಿತು.
ರಾಜ್ಯ ಸರ್ಕಾರವು ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಜಿಲ್ಲೆಯಲ್ಲಿ ಗುಣಮಟ್ಟದ ಕ್ರೀಡಾ ಮೂಲಸೌಕರ್ಯ ನಿರ್ಮಾಣದ ಮೂಲಕ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ಬೆಳೆಸುವ ಉದ್ದೇಶ ಹೊಂದಿದೆ ಎಂದು ತಿಳಿಸಲಾಯಿತು.
ಭೂಮಿಪೂಜೆ ಕಾರ್ಯಕ್ರಮದ ಬಳಿಕ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಸ್ಥಳೀಯ ಸಮಸ್ಯೆಗಳ ಕುರಿತು ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಯಿತು. ಕುಡಿಯುವ ನೀರು, ರಸ್ತೆ, ಒಳಚರಂಡಿ, ಬೀದಿ ದೀಪ ಸೇರಿದಂತೆ ವಿವಿಧ ನಾಗರಿಕ ಸೌಲಭ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಮನವಿ ಸಲ್ಲಿಸಿದರು. ಅವುಗಳನ್ನು ಹಂತ ಹಂತವಾಗಿ ಪರಿಹರಿಸುವ ಭರವಸೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ವಿಜಯಪುರ ಮಹಾನಗರ ಪಾಲಿಕೆಯ ಮಹಾಪೌರ ಎಂ.ಎಸ್. ಕರಡಿ, ಪಾಲಿಕೆ ಸದಸ್ಯ ಮಳುಗೌಡ ಬಿರಾದಾರ, ವಿವಿಧ ಮುಖಂಡರು, ಹಿತೈಷಿಗಳು, ಕಾರ್ಯಕರ್ತರು, ಅಭಿಮಾನಿಗಳು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳು, ಕ್ರೀಡಾಪಟುಗಳು ಹಾಗೂ ಸ್ಥಳೀಯ ಸಾರ್ವಜನಿಕರು ಉಪಸ್ಥಿತರಿದ್ದು, ಕಾಮಗಾರಿಗಳು ಶೀಘ್ರ ಪೂರ್ಣಗೊಂಡು ಜಿಲ್ಲೆಯ ಕ್ರೀಡಾ ಅಭಿವೃದ್ಧಿಗೆ ಹೊಸ ಉತ್ತೇಜನ ನೀಡಲಿ ಎಂದು ಆಶಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande