ಬಾದಾಮಿಯಲ್ಲಿ ಬರದ ಆಕ್ರಂದನ ಆಲಿಸಿದ ಜೆಡಿಎಸ್ ಅಧ್ಯಯನ ತಂಡ: ತಕ್ಷಣ ಬರ ಘೋಷಣೆ, ಸಾಲಮನ್ನಾಗೆ ನಿಖಿಲ್ ಕುಮಾರಸ್ವಾಮಿ ಆಗ್ರಹ
ಬಾಗಲಕೋಟೆ, 15 ಜುಲೈ (ಹಿ.ಸ.) ಆ್ಯಂಕರ್ : ರಾಜ್ಯದಲ್ಲಿ ತೀವ್ರ ಮಳೆಯ ಕೊರತೆಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸ್ಥಿತಿಗತಿಗಳನ್ನು ಪರಿಶೀಲಿಸಲು ಜೆಡಿಎಸ್ ಪಕ್ಷ ರಚಿಸಿರುವ ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ವಿಭಾಗಗಳ ನೆರೆ–ಬರ ಅಧ್ಯಯನ ತಂಡವು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ವಿಧಾನಸಭ
ಬರ ಘೋಷಣೆ


ಬಾಗಲಕೋಟೆ, 15 ಜುಲೈ (ಹಿ.ಸ.)

ಆ್ಯಂಕರ್ : ರಾಜ್ಯದಲ್ಲಿ ತೀವ್ರ ಮಳೆಯ ಕೊರತೆಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸ್ಥಿತಿಗತಿಗಳನ್ನು ಪರಿಶೀಲಿಸಲು ಜೆಡಿಎಸ್ ಪಕ್ಷ ರಚಿಸಿರುವ ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ವಿಭಾಗಗಳ ನೆರೆ–ಬರ ಅಧ್ಯಯನ ತಂಡವು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ವಿಧಾನಸಭಾ ಕ್ಷೇತ್ರದ ಹಲಕುರ್ಕಿ, ಕೊಂಕನಕೊಪ್ಪ, ಹಂಗರಗಿ, ಖಾಜಿಬೂದಿಹಾಳ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬರದ ಪರಿಸ್ಥಿತಿಯನ್ನು ಪರಿಶೀಲಿಸಿತು.

ಅಧ್ಯಯನ ತಂಡದ ನೇತೃತ್ವದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರೈತರ ಹೊಲಗದ್ದೆಗಳಿಗೆ ಭೇಟಿ ನೀಡಿ ಬೆಳೆಗಳ ಸ್ಥಿತಿ ವೀಕ್ಷಿಸಿದರು. ಈ ವೇಳೆ ರೈತರು ತಮ್ಮ ಸಂಕಷ್ಟಗಳನ್ನು ವಿವರಿಸಿ, ಮಳೆಯ ಕೊರತೆಯಿಂದ ಬಿತ್ತನೆ ಮಾಡಲಾಗದೆ ಅನೇಕರು ಸಂಕಷ್ಟ ಅನುಭವಿಸುತ್ತಿರುವುದಾಗಿ ತಿಳಿಸಿದರು. ಕೆಲ ರೈತರು ಸಾಲ ಮಾಡಿ ಬಿತ್ತನೆ ಮಾಡಿದ ಬೆಳೆಗಳು ಸಹ ನೀರಿನ ಅಭಾವದಿಂದ ಸಂಪೂರ್ಣ ಒಣಗಿ ಹೋಗಿದ್ದು, ಆರ್ಥಿಕ ಸಂಕಷ್ಟ ಮತ್ತಷ್ಟು ಗಂಭೀರವಾಗಿದೆ ಎಂದು ಅಳಲು ತೋಡಿಕೊಂಡರು.

ರೈತರ ಅಹವಾಲು ಆಲಿಸಿದ ಬಳಿಕ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮಳೆಯ ಕೊರತೆಯಿಂದ ರೈತರು ಸಂಪೂರ್ಣವಾಗಿ ಕಂಗಾಲಾಗಿದ್ದಾರೆ. ಅನೇಕ ಕಡೆಗಳಲ್ಲಿ ಬಿತ್ತನೆಯೇ ಆಗಿಲ್ಲ. ಬಿತ್ತನೆ ಮಾಡಿದ ಬೆಳೆಗಳೂ ನೀರಿಲ್ಲದೆ ಒಣಗುತ್ತಿವೆ. ಕುಡಿಯುವ ನೀರಿಗೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ರೈತರ ನೆರವಿಗೆ ಧಾವಿಸಬೇಕಾದ ಸರ್ಕಾರ ಕಣ್ಣು, ಮೂಗು, ಬಾಯಿ ಮುಚ್ಚಿಕೊಂಡು ಕುಳಿತಿರುವುದು ಅತ್ಯಂತ ದುರದೃಷ್ಟಕರ. ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ರಾಜ್ಯದ ಬರಪೀಡಿತ ಪ್ರದೇಶಗಳನ್ನು ಘೋಷಿಸಿ ರೈತರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಹಾಗೂ ಮುಂದಿನ ಬೆಳೆ ಸಾಲಗಳಿಗೆ ಬಡ್ಡಿ ಸಡಿಲಿಕೆ ಘೋಷಿಸಬೇಕು ಎಂದು ಆಗ್ರಹಿಸಿದ ಅವರು, ಸರ್ಕಾರ ತ್ವರಿತ ಕ್ರಮ ಕೈಗೊಳ್ಳದಿದ್ದರೆ ಜೆಡಿಎಸ್ ಪಕ್ಷ ರಾಜ್ಯಾದ್ಯಂತ ರೈತರ ಪರವಾಗಿ ಹೋರಾಟ ನಡೆಸಲಿದೆ ಎಂದು ಎಚ್ಚರಿಕೆ ನೀಡಿದರು.

ಅಧ್ಯಯನ ತಂಡವು ಸರ್ಕಾರಕ್ಕೆ ಮೂರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದು, ಬಾದಾಮಿ ಸೇರಿದಂತೆ ಇಡೀ ಬಾಗಲಕೋಟೆ ಜಿಲ್ಲೆಯನ್ನು ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಿ ಸಮಗ್ರ ಬೆಳೆ ಹಾನಿ ಸಮೀಕ್ಷೆ ನಡೆಸಬೇಕು, ಬರ ಪರಿಹಾರ ಹಣವನ್ನು ಯಾವುದೇ ವಿಳಂಬವಿಲ್ಲದೆ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕು ಹಾಗೂ ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಿ ಹೊಸ ಸಾಲಗಳಿಗೆ ಬಡ್ಡಿ ಸಡಿಲಿಕೆ ನೀಡಬೇಕು ಎಂದು ಒತ್ತಾಯಿಸಿತು.

ರಾಜ್ಯದ ವಿವಿಧ ಭಾಗಗಳಲ್ಲಿ ನಡೆಸುತ್ತಿರುವ ನೆರೆ–ಬರ ಅಧ್ಯಯನದ ಸಂಪೂರ್ಣ ವರದಿಯನ್ನು ಶೀಘ್ರದಲ್ಲಿಯೇ ರಾಜ್ಯ ಸರ್ಕಾರಕ್ಕೆ ಸಲ್ಲಿಸುವುದರ ಜೊತೆಗೆ ರಾಜ್ಯಪಾಲರಿಗೂ ಮನವಿ ಸಲ್ಲಿಸಿ ರೈತರಿಗೆ ನ್ಯಾಯ ಒದಗಿಸುವ ಪ್ರಯತ್ನ ಮಾಡಲಾಗುವುದು ಎಂದು ಅಧ್ಯಯನ ತಂಡ ತಿಳಿಸಿತು.

ಈ ಸಂದರ್ಭದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಕೋರ್ ಕಮಿಟಿ ಅಧ್ಯಕ್ಷ ಜೆ.ಕೆ. ಕೃಷ್ಣರೆಡ್ಡಿ, ಶಾಸಕ ಶರಣಗೌಡ ಪಾಟೀಲ ಕಂದಕೂರ್, ಮಾಜಿ ಸಚಿವ ಬಂಡೆಪ್ಪ ಕಾಶಂಪೂರ್, ಮುಖಂಡರಾದ ದೊಡ್ಡನಗೌಡ ಪಾಟೀಲ ನರಿಬೋಳ, ಹನಮಂತಪ್ಪ ಮಾವಿನಮರದ, ಸಿ.ವಿ. ಚಂದ್ರಶೇಖರ್ ಸೇರಿದಂತೆ ಪಕ್ಷದ ಹಿರಿಯ ನಾಯಕರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ನೂರಾರು ರೈತರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande