
ಬಾಗಲಕೋಟೆ, 15 ಜುಲೈ (ಹಿ.ಸ.):
ಆ್ಯಂಕರ್ : ಬೆಳಗಾವಿಯಲ್ಲಿ ನಡೆದ ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ನಾಗರಾಜ ಹದ್ಲಿ ಭಾಗವಹಿಸಿದ್ದರೆಂಬ ಆರೋಪದ ಕುರಿತು ಹೊಸ ತಿರುವು ಸಿಕ್ಕಿದ್ದು, ಈ ಸಂಬಂಧ ದೂರು ನೀಡಿದ್ದ ಅಯ್ಯುಬಖಾನ್ ಬಾಗೇವಾಡಿ ವಿರುದ್ಧವೇ ನಾಗರಾಜ ಹದ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮುಸ್ಲಿಂ ಮುಖಂಡರು ಹಾಗೂ ಯುವಕರ ಸಂಘದ ಹೆಸರಿನಲ್ಲಿ ಅಯ್ಯುಬಖಾನ್ ಬಾಗೇವಾಡಿ ಅವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಅವರಿಗೆ ದೂರು ಸಲ್ಲಿಸಿದ್ದರು. ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಎಸ್.ಜಿ. ನಂಜಯ್ಯನಮಠ ಅವರು ಅಯ್ಯುಬಖಾನ್ ಬಾಗೇವಾಡಿ ಕಾಂಗ್ರೆಸ್ ಕಾರ್ಯಕರ್ತರಾಗಿರುವುದನ್ನು ದೃಢಪಡಿಸಿದ್ದರು.
ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ನಾಗರಾಜ ಹದ್ಲಿ, ತಮ್ಮ ವಿರುದ್ಧ ವೈಯಕ್ತಿಕ ದ್ವೇಷ ಮತ್ತು ರಾಜಕೀಯ ಉದ್ದೇಶದಿಂದ ಸುಳ್ಳು ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಇದೇ ವೇಳೆ, ದೂರುದಾರ ಅಯ್ಯುಬಖಾನ್ ಬಾಗೇವಾಡಿ ಅವರು ಎಸ್ಡಿಪಿಐ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರೆನ್ನಲಾದ ಫೋಟೋಗಳು ಹಾಗೂ ವಿವಾದಿತ ಬಾಬರಿ ಮಸೀದಿಯದ್ದು ಎಂದು ಹೇಳಲಾಗಿರುವ ಚಿತ್ರವನ್ನು ಸ್ವೀಕರಿಸಿರುವ ಛಾಯಾಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ ಎಂದು ಹದ್ಲಿ ಹೇಳಿದ್ದಾರೆ.
ನನ್ನ ತೇಜೋವಧೆ ಮಾಡುವ ಉದ್ದೇಶದಿಂದಲೇ ಅಯ್ಯುಬಖಾನ್ ಬಾಗೇವಾಡಿ ಅನಗತ್ಯ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ. ಸತ್ಯಾಸತ್ಯತೆ ಹೊರಬರಬೇಕಿದೆ. ನನ್ನ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಜನರು ನಂಬಬಾರದು, ಎಂದು ನಾಗರಾಜ ಹದ್ಲಿ ತಿಳಿಸಿದ್ದಾರೆ.
ಈ ಪ್ರಕರಣವು ಕಾಂಗ್ರೆಸ್ ವಲಯದಲ್ಲಿ ರಾಜಕೀಯ ಚರ್ಚೆಗೆ ಗ್ರಾಸವಾಗಿದ್ದು, ಪಕ್ಷದ ವರಿಷ್ಠರು ಹಾಗೂ ಜಿಲ್ಲಾ ಘಟಕದ ಮಟ್ಟದಲ್ಲಿ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಇನ್ನೊಂದೆಡೆ, ಅಯ್ಯುಬಖಾನ್ ಬಾಗೇವಾಡಿ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಫೋಟೋಗಳ ಬಗ್ಗೆ ಅಧಿಕೃತ ದೃಢೀಕರಣ ಇನ್ನೂ ಲಭ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಪ್ರಕರಣ ಮತ್ತಷ್ಟು ರಾಜಕೀಯ ತಿರುವು ಪಡೆದುಕೊಳ್ಳುವ ಸಾಧ್ಯತೆಗಳಿವೆ.
ಈ ಬೆಳವಣಿಗೆ ಬಾಗಲಕೋಟೆ
ಜಿಲ್ಲಾ ಕಾಂಗ್ರೆಸ್ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ನಾಯಕತ್ವ ಯಾವ ರೀತಿಯ ನಿರ್ಧಾರ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande