ಗದಗ ಜಿಲ್ಲೆಯಲ್ಲಿ ಎಸ್.ಐ.ಆರ್. ಪ್ರಕ್ರಿಯೆ ಚುರುಕು
ಗದಗ, 15 ಜುಲೈ (ಹಿ.ಸ.) ಆ್ಯಂಕರ್:- ಗದಗ ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್.) ಕಾರ್ಯವು ವೇಗ ಪಡೆದುಕೊಂಡಿದ್ದು, ಒಟ್ಟು 9,02,629 ಎನ್ಯುಮರೇಷನ್ ಫಾರ್ಮಗಳನ್ನು ಮತದಾರರಿಗೆ ವಿತರಿಸಲಾಗಿದೆ. ಮನೆ ಮನೆಗೆ ತೆರಳಿ ಬೂತ್ ಮಟ್ಟದ ಅಧಿಕಾರಿಗಳು (ಬಿ.ಎಲ್.ಒ.
ಫೋಟೋ


ಗದಗ, 15 ಜುಲೈ (ಹಿ.ಸ.)

ಆ್ಯಂಕರ್:- ಗದಗ ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್.) ಕಾರ್ಯವು ವೇಗ ಪಡೆದುಕೊಂಡಿದ್ದು, ಒಟ್ಟು 9,02,629 ಎನ್ಯುಮರೇಷನ್ ಫಾರ್ಮಗಳನ್ನು ಮತದಾರರಿಗೆ ವಿತರಿಸಲಾಗಿದೆ. ಮನೆ ಮನೆಗೆ ತೆರಳಿ ಬೂತ್ ಮಟ್ಟದ ಅಧಿಕಾರಿಗಳು (ಬಿ.ಎಲ್.ಒ.) ಮತದಾರರಿಗೆ ಫಾರ್ಮಗಳನ್ನು ವಿತರಿಸುತ್ತಿದ್ದು, ಪರಿಷ್ಕರಣೆ ಕಾರ್ಯವನ್ನು ನಿಗದಿತ ವೇಳಾಪಟ್ಟಿಯಂತೆ ಮುಂದುವರಿಸಲಾಗಿದೆ.

ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ, ಗದಗ ಜಿಲ್ಲೆಯಲ್ಲಿ ಒಟ್ಟು 9,02,947 ಮತದಾರರು ನೋಂದಣಿಯಾಗಿದ್ದು, ಜಿಲ್ಲೆಯಾದ್ಯಂತ 967 ಮತಗಟ್ಟೆಗಳು ಕಾರ್ಯನಿರ್ವಹಿಸುತ್ತಿವೆ. ಮತದಾರರ ಮಾಹಿತಿಯನ್ನು ನಿಖರವಾಗಿ ಪರಿಷ್ಕರಿಸುವ ಉದ್ದೇಶದಿಂದ ಬಿ.ಎಲ್.ಒ.ಗಳು ಮನೆ ಮನೆಗೆ ತೆರಳಿ ಎನ್ಯುಮರೇಷನ್ ಫಾರ್ಮಗಳನ್ನು ವಿತರಿಸುವ ಕಾರ್ಯದಲ್ಲಿ ನಿರಂತರವಾಗಿ ತೊಡಗಿಕೊಂಡಿದ್ದಾರೆ.

ಈವರಿಗೆ 9,02,629 ಎನ್ಯುಮರೇಷನ್ ಫಾರ್ಮಗಳು ಮತದಾರರಿಗೆ ತಲುಪಿದ್ದು, ಈಗಾಗಲೇ ಸ್ವೀಕರಿಸಲಾದ ದಾಖಲೆಗಳ ಪೈಕಿ 3,95,478 ಫಾರ್ಮಗಳ ಡಿಜಿಟಲೀಕರಣ ಯಶಸ್ವಿಯಾಗಿ ಪೂರ್ಣಗೊಂಡಿದೆ.

ಸಂಗ್ರಹವಾಗುತ್ತಿರುವ ಮಾಹಿತಿಯನ್ನು ತಂತ್ರಜ್ಞಾನ ಬಳಸಿ ಆನ್ಲೈನ್ ವ್ಯವಸ್ಥೆಗೆ ದಾಖಲಿಸುವ ಕಾರ್ಯವೂ ಸಮಾನಾಂತರವಾಗಿ ನಡೆಯುತ್ತಿದೆ.

ಮತದಾರರ ಪಟ್ಟಿಯಲ್ಲಿ ಹೆಸರು, ವಿಳಾಸ, ವಯಸ್ಸು ಸೇರಿದಂತೆ ಇತರ ಮಾಹಿತಿಗಳು ಸರಿಯಾಗಿರುವುದನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಈ ವಿಶೇಷ ಸಮಗ್ರ ಪರಿಷ್ಕರಣೆ ಕೈಗೊಳ್ಳಲಾಗಿದೆ. ತಪ್ಪು ಮಾಹಿತಿ ತಿದ್ದುಪಡಿ, ವಿಳಾಸ ಬದಲಾವಣೆ, ಹೊಸ ಮತದಾರರ ಸೇರ್ಪಡೆ ಹಾಗೂ ಅರ್ಹರಲ್ಲದವರ ಹೆಸರುಗಳ ತೆರವು ಸೇರಿದಂತೆ ಹಲವು ಅಂಶಗಳನ್ನು ಈ ಪ್ರಕ್ರಿಯೆಯಲ್ಲಿ ಪರಿಶೀಲಿಸಲಾಗುತ್ತಿದೆ.

ಜಿಲ್ಲಾಡಳಿತದ ಸೂಚನೆಯಂತೆ ಜುಲೈ 29ರವರೆಗೆ ಬಿ.ಎಲ್.ಒ.ಗಳು ಮನೆ ಮನೆಗೆ ಭೇಟಿ ನೀಡುವ ಕಾರ್ಯ ಮುಂದುವರಿಸಲಿದ್ದಾರೆ. ಈ ಅವಧಿಯಲ್ಲಿ ಮತದಾರರು ಬಿ.ಎಲ್.ಒ.ಗಳಿಗೆ ಅಗತ್ಯ ದಾಖಲೆಗಳನ್ನು ನೀಡಿ, ಎನ್ಯುಮರೇಷನ್ ಫಾರ್ಮಗಳನ್ನು ಸರಿಯಾಗಿ ಭರ್ತಿ ಮಾಡಿ ಹಿಂತಿರುಗಿಸುವಂತೆ ಮನವಿ ಮಾಡಲಾಗಿದೆ.

ಮತದಾರರ ಸಹಕಾರದಿಂದ ಜಿಲ್ಲೆಯ ಮತದಾರರ ಪಟ್ಟಿಯನ್ನು ಇನ್ನಷ್ಟು ನಿಖರ ಹಾಗೂ ದೋಷರಹಿತಗೊಳಿಸುವ ಉದ್ದೇಶ ಹೊಂದಲಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಮತದಾರರು ನಿರ್ಲಕ್ಷ್ಯ ವಹಿಸದೆ ಬಿ.ಎಲ್.ಒ.ಗಳೊಂದಿಗೆ ಸಹಕರಿಸಿ, ಅಗತ್ಯ ಮಾಹಿತಿಯನ್ನು ಒದಗಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ಎಸ್.ಐ.ಆರ್. ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಪರಿಷ್ಕೃತ ಮತದಾರರ ಪಟ್ಟಿ ಪ್ರಕಟವಾಗಲಿದ್ದು, ಮುಂದಿನ ಚುನಾವಣೆಗಳಲ್ಲಿ ಅರ್ಹ ಮತದಾರರು ಯಾವುದೇ ತೊಂದರೆಯಿಲ್ಲದೆ ತಮ್ಮ ಮತದಾನದ ಹಕ್ಕನ್ನು ಚಲಾಯಿಸಲು ಈ ಪ್ರಕ್ರಿಯೆ ಸಹಕಾರಿಯಾಗಲಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande