
ಬಾಗಲಕೋಟೆ , 16 ಜುಲೈ (ಹಿ.ಸ.):
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಐತಿಹಾಸಿಕ ಪ್ರವಾಸಿ ತಾಣವಾದ ಬಾದಾಮಿಗೆ ಮತ್ತೊಂದು ಮಹತ್ವದ ಅಭಿವೃದ್ಧಿಯ ಹೆಜ್ಜೆಯಾಗಿ ನೂತನ ಬಾದಾಮಿ ರೈಲ್ವೆ ನಿಲ್ದಾಣದ ಉದ್ಘಾಟನಾ ಸಮಾರಂಭವು ಜುಲೈ 17ರಂದು (ಶುಕ್ರವಾರ) ನಡೆಯಲಿದೆ.
ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವದೆಹಲಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನೂತನ ರೈಲ್ವೆ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ ಎಂದು ಬಾಗಲಕೋಟೆ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ. ಗದ್ದಿಗೌಡರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಪುರಸಭೆ ಸದಸ್ಯರು, ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಸದಸ್ಯರು, ವಿವಿಧ ಜನಪ್ರತಿನಿಧಿಗಳು, ಪಕ್ಷದ ಹಿರಿಯ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಬಾದಾಮಿ ಪ್ರವಾಸೋದ್ಯಮ, ಸಾರಿಗೆ ಮತ್ತು ಪ್ರಾದೇಶಿಕ ಅಭಿವೃದ್ಧಿಗೆ ಹೊಸ ಆಯಾಮ ನೀಡಲಿರುವ ಈ ರೈಲ್ವೆ ನಿಲ್ದಾಣವು ಜಿಲ್ಲೆಯ ಜನತೆಗೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ. ಪ್ರವಾಸಿಗರು ಹಾಗೂ ಪ್ರಯಾಣಿಕರಿಗೆ ಉತ್ತಮ ಮೂಲಸೌಕರ್ಯ ಮತ್ತು ಆಧುನಿಕ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ರೈಲ್ವೆ ನಿಲ್ದಾಣವನ್ನು ಅಭಿವೃದ್ಧಿಪಡಿಸಲಾಗಿದೆ.
ಈ ಐತಿಹಾಸಿಕ ಕಾರ್ಯಕ್ರಮವು ಬಾದಾಮಿ ಅಭಿವೃದ್ಧಿಯ ಪಯಣದಲ್ಲಿ ಮಹತ್ವದ ಮೈಲಿಗಲ್ಲಾಗಲಿದ್ದು, ಸಾರ್ವಜನಿಕರು, ತಾಯಂದಿರು, ಯುವಕರು ಹಾಗೂ ದೇಶಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಸದ ಪಿ.ಸಿ. ಗದ್ದಿಗೌಡರ್ ಮನವಿ ಮಾಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande