
ಬಾಗಲಕೋಟೆ, 16 ಜುಲೈ (ಹಿ.ಸ.)
ಆ್ಯಂಕರ್ : ಬಾಗಲಕೋಟ ನಗರದ ನವನಗರದ ಸೆಕ್ಟರ್-13ರ ಸರ್ಕಾರಿ ಉರ್ದು ಗಂಡು ಮಕ್ಕಳ ಮಾದರಿ ಪ್ರಾಥಮಿಕ ಶಾಲೆ ನಂ.1ರಲ್ಲಿ ನೂತನವಾಗಿ ಆರಂಭಗೊಂಡಿರುವ ಎಲ್ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಬಾಗಲಕೋಟ ಶಾಸಕ ಉಮೇಶ್ ಎಚ್. ಮೇಟಿ ಉದ್ಘಾಟಿಸಿದರು. ಈ ಮೂಲಕ ಸರ್ಕಾರಿ ಶಾಲೆಗಳಲ್ಲಿ ಆರಂಭಿಕ ಶಿಕ್ಷಣವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಉಮೇಶ್ ಎಚ್. ಮೇಟಿ ಅವರು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅಗತ್ಯವಿರುವ ಮೂಲಸೌಕರ್ಯ, ಆಧುನಿಕ ಶೈಕ್ಷಣಿಕ ಸೌಲಭ್ಯಗಳು ಹಾಗೂ ವಿದ್ಯಾರ್ಥಿ ಸ್ನೇಹಿ ವಾತಾವರಣವನ್ನು ನಿರಂತರವಾಗಿ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.
ಸರ್ಕಾರಿ ಶಾಲೆಗಳ ಬಗ್ಗೆ ಪೋಷಕರಲ್ಲಿ ವಿಶ್ವಾಸ ಹೆಚ್ಚುತ್ತಿದ್ದು, ಖಾಸಗಿ ಶಾಲೆಗಳಿಗೆ ಸಮಾನವಾದ ಶೈಕ್ಷಣಿಕ ಸೌಲಭ್ಯಗಳು ಇಂದು ಸರ್ಕಾರಿ ಶಾಲೆಗಳಲ್ಲಿಯೂ ಲಭ್ಯವಿವೆ. ಆದ್ದರಿಂದ ಪೋಷಕರು ಸರ್ಕಾರ ಒದಗಿಸುತ್ತಿರುವ ಉಚಿತ ಹಾಗೂ ಗುಣಮಟ್ಟದ ಶಿಕ್ಷಣದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ತಮ್ಮ ಮಕ್ಕಳನ್ನು ನಿಯಮಿತವಾಗಿ ಶಾಲೆಗೆ ಕಳುಹಿಸಬೇಕು ಎಂದು ಮನವಿ ಮಾಡಿದರು.
ಶಿಕ್ಷಣವೇ ಮಕ್ಕಳ ಉಜ್ವಲ ಭವಿಷ್ಯಕ್ಕೆ ಭದ್ರ ಅಡಿಪಾಯ. ಪ್ರತಿಯೊಂದು ಮಗುವಿಗೂ ಉತ್ತಮ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದೆ. ಎಲ್ಕೆಜಿ ಹಾಗೂ ಯುಕೆಜಿ ತರಗತಿಗಳ ಆರಂಭದಿಂದ ಮಕ್ಕಳಿಗೆ ಬಾಲ್ಯದಿಂದಲೇ ಉತ್ತಮ ಕಲಿಕಾ ವಾತಾವರಣ ದೊರೆಯಲಿದೆ, ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಸಮವಸ್ತ್ರ ಹಾಗೂ ಶಾಲಾ ಬ್ಯಾಗ್ಗಳನ್ನು ವಿತರಿಸಿ ಮಕ್ಕಳಿಗೆ ಶುಭ ಹಾರೈಸಲಾಯಿತು. ವಿದ್ಯಾರ್ಥಿಗಳ ಸಂಭ್ರಮ, ಪೋಷಕರ ಸಂತಸ ಹಾಗೂ ಶಿಕ್ಷಕರ ಉತ್ಸಾಹ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಅಕ್ಷರ ದಾಸೋಹ ಅಧಿಕಾರಿ ಭಾರತಿ ದಾಸೋಗ, ಎಸ್ಡಿಎಂಸಿ ಅಧ್ಯಕ್ಷ ರಫೀಕ್ ಟಕ್ಕಳಕಿ, ಅಕ್ಬರ್ ಮುಲ್ಲಾ, ವೈ.ವೈ. ತಿಮ್ಮಾಪುರ, ಎಚ್.ಎ. ಸೌದಾಗರ, ಎನ್.ಎ. ಕಲಾದಗಿ, ಪಿ.ಬಿ. ಪಾಟೀಲ, ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರು, ಪೋಷಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ನೂತನ ತರಗತಿಗಳ ಆರಂಭವನ್ನು ಸ್ವಾಗತಿಸಿದರು.
ಶಾಲೆಯ ಅಭಿವೃದ್ಧಿಗೆ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಸರ್ಕಾರಿ ಶಾಲೆಗಳಲ್ಲಿಯೇ ಗುಣಮಟ್ಟದ ಶಿಕ್ಷಣದ ಜೊತೆಗೆ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಾಣವಾಗುತ್ತಿರುವುದು ಸಂತಸದ ಸಂಗತಿ ಎಂದು ಅಭಿಪ್ರಾಯಪಟ್ಟರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande