
ಬೆಂಗಳೂರು, 16 ಜುಲೈ (ಹಿ.ಸ.):
ಆ್ಯಂಕರ್:
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನನ್ನನ್ನು ಜೈಲಿಗೆ ಕಳಿಸಲು ನೋಡುತ್ತಿದ್ದಾರೆ ಎಂಬ ಹೇಳಿಕೆ ಜನರ ಅನುಕಂಪ ಗಿಟ್ಟಿಸಿಕೊಳ್ಳುವ ಪ್ರಯತ್ನವಾಗಿದ್ದು, ಪ್ರಾಮಾಣಿಕರಾಗಿದ್ದರೆ ಅವರಿಗೆ ಜೈಲಿನ ಭಯ ಏಕೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಪ್ರಶ್ನಿಸಿದರು.
ಗುರುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಜೈಲಿಗೆ ಕಳುಹಿಸಲು ಯತ್ನಿಸುತ್ತಿಲ್ಲ. ಕಾನೂನಿನ ಪ್ರಕಾರ ಅಪರಾಧ ಎಸಗಿದವರು ಮತ್ತು ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವವರು ಮಾತ್ರ ಜೈಲಿಗೆ ಹೋಗುತ್ತಾರೆ. ಹೀಗಿರುವಾಗ ಮುಖ್ಯಮಂತ್ರಿ ಜೈಲಿನ ಬಗ್ಗೆ ಮಾತನಾಡುತ್ತಿರುವುದು ಜನರ ಸಹಾನುಭೂತಿ ಪಡೆಯುವ ಉದ್ದೇಶದಿಂದಲೇ ಎಂದು ಆರೋಪಿಸಿದರು.
ನಾವು ಯಾರನ್ನೂ ಜೈಲಿಗೆ ಕಳಿಸುವುದಿಲ್ಲ. ತಪ್ಪು ಮಾಡಿದ್ದರೆ ಕಾನೂನು ತನ್ನ ಕೆಲಸ ಮಾಡುತ್ತದೆ. ಭ್ರಷ್ಟಾಚಾರ ಮಾಡದೇ ಇದ್ದರೆ ಜೈಲಿನ ಭಯ ಏಕೆ? ಎಂದು ಜೋಶಿ ಪ್ರಶ್ನಿಸಿದರು.
ಬಿಡದಿ ಟೌನ್‌ಶಿಪ್ ಕುರಿತು ಪ್ರಶ್ನೆ
ಬಿಡದಿ ಟೌನ್‌ಶಿಪ್ ಯೋಜನೆ ಕುರಿತು ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಇರದ ಆಸಕ್ತಿ ಈಗ ಡಿ.ಕೆ. ಶಿವಕುಮಾರ್ ಅವರಿಗೆ ಏಕೆ ಬಂದಿದೆ ಎಂಬ ಪ್ರಶ್ನೆ ಉದ್ಭವಿಸುತ್ತದೆ ಎಂದರು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಮಾಡಿರುವ ಆರೋಪಗಳಿಗೆ ಉತ್ತರಿಸುವ ಬದಲು ಅವರ ವಿರುದ್ಧವೇ ಟೀಕೆ ಮಾಡುತ್ತಿರುವುದು ಅನುಮಾನಕ್ಕೆ ಕಾರಣವಾಗುತ್ತದೆ ಎಂದು ಹೇಳಿದರು.
ರೈತರ ಒಪ್ಪಿಗೆ ಪಡೆಯದೇ ಭೂಮಿ ಸ್ವಾಧೀನಪಡಿಸಿಕೊಂಡು ಟೌನ್‌ಶಿಪ್ ನಿರ್ಮಿಸಲು ಮುಂದಾಗಿರುವುದು ಸರಿಯಲ್ಲ. ಮೊದಲು ರೈತರ ವಿಶ್ವಾಸ ಗಳಿಸಿ ಅವರ ಮನವೊಲಿಸುವ ಕೆಲಸ ಮಾಡಬೇಕಿತ್ತು. ಈ ವಿಚಾರದಲ್ಲಿ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ ಎಂದು ಜೋಶಿ ಟೀಕಿಸಿದರು.
ರಾಹುಲ್ ಗಾಂಧಿ ಎಲ್ಲಿದ್ದಾರೆ?
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕಳೆದ 25 ದಿನಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಅವರು ಎಲ್ಲಿದ್ದಾರೆ ಎಂಬುದನ್ನು ಕಾಂಗ್ರೆಸ್ ನಾಯಕರು ಜನತೆಗೆ ತಿಳಿಸಬೇಕು. ಸಾರ್ವಜನಿಕ ಜೀವನದಲ್ಲಿರುವ ನಾಯಕರಿಗೆ ಜನರ ಮುಂದೆ ಉತ್ತರದಾಯಿತ್ವ ಇರಬೇಕು ಎಂದು ಜೋಶಿ ಹೇಳಿದರು.
ಬರದ ವಿಚಾರದಲ್ಲಿ ರಾಜಕೀಯ ಬೇಡ
ರಾಜ್ಯದಲ್ಲಿ ಬರ ಪರಿಸ್ಥಿತಿ ಕುರಿತು ಕಾಂಗ್ರೆಸ್ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಮೊದಲು ರಾಜ್ಯ ಸರ್ಕಾರ ಸಮಗ್ರ ಅಧ್ಯಯನ ನಡೆಸಿ, ಯಾವ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಇದೆ ಎಂಬುದರ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಬೇಕು. ಅದನ್ನು ಬಿಟ್ಟು ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುವುದು ಸರಿಯಲ್ಲ ಎಂದರು.
ಕಾಂಗ್ರೆಸ್ ಪ್ರತಿಯೊಂದು ವಿಷಯಕ್ಕೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಣೆಗಾರರನ್ನಾಗಿ ಮಾಡುವ ರಾಜಕೀಯವನ್ನು ಬಿಡಬೇಕು. ಮಳೆ ಹೆಚ್ಚಾದರೂ ಮೋದಿ ಕಾರಣ, ಮಳೆ ಕಡಿಮೆಯಾದರೂ ಮೋದಿ ಕಾರಣ, ಜನಸಂಖ್ಯೆ ಹೆಚ್ಚಾದರೂ ಮೋದಿ ಕಾರಣ ಎನ್ನುವ ರೀತಿಯ ರಾಜಕೀಯವನ್ನು ಕಾಂಗ್ರೆಸ್ ನಿಲ್ಲಿಸಬೇಕು ಎಂದು ಪ್ರಲ್ಹಾದ ಜೋಶಿ ವಾಗ್ದಾಳಿ ನಡೆಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.