ಮಳೆ ಕೊರತೆಯ ನಡುವೆ ಬೆಳೆಗಳ ಸ್ಥಿತಿಗತಿ ಅವಲೋಕಿಸಿದ ಡಿಸಿ
ಗದಗ, 16 ಜುಲೈ (ಹಿ.ಸ.) ಆ್ಯಂಕರ್:- ಪ್ರಸಕ್ತ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಾದ್ಯಂತ ವಾಡಿಕೆಗಿಂತ ಕಡಿಮೆ ಮಳೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಗುರುವಾರ ಗದಗ ಹಾಗೂ ರೋಣ ತಾಲ್ಲೂಕಿನ ವಿವಿಧ ಗ್ರಾಮಗಳ ರೈತರ ಹೊಲಕ್ಕೆ ಭೇಟಿ ನೀಡಿ ಬೆಳೆಗಳ ಸ್ಥಿತಿಗ
ಫೋಟೋ


ಗದಗ, 16 ಜುಲೈ (ಹಿ.ಸ.)

ಆ್ಯಂಕರ್:- ಪ್ರಸಕ್ತ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಾದ್ಯಂತ ವಾಡಿಕೆಗಿಂತ ಕಡಿಮೆ ಮಳೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಗುರುವಾರ ಗದಗ ಹಾಗೂ ರೋಣ ತಾಲ್ಲೂಕಿನ ವಿವಿಧ ಗ್ರಾಮಗಳ ರೈತರ ಹೊಲಕ್ಕೆ ಭೇಟಿ ನೀಡಿ ಬೆಳೆಗಳ ಸ್ಥಿತಿಗತಿಯನ್ನು ಸ್ಥಳದಲ್ಲೇ ಅವಲೋಕಿಸಿದರು.

ಗದಗ ತಾಲ್ಲೂಕಿನ ದುಂದೂರ ಕ್ರಾಸ್, ಗಂಗಿಮಡಿ–ಹಿರೇಹಂದಿಗೋಳ ರಸ್ತೆ, ಹರ್ಲಾಪೂರ ಹಾಗೂ ಕೋಟುಮುಚಗಿ ಗ್ರಾಮಗಳಿಗೆ ಭೇಟಿ ನೀಡಿ ಹೆಸರು, ಉದ್ದು, ಶೇಂಗಾ, ಮೆಕ್ಕೆಜೋಳ ಹಾಗೂ ಹತ್ತಿ ಬೆಳೆಗಳ ಬೆಳವಣಿಗೆ ಮತ್ತು ಪ್ರಸ್ತುತ ಪರಿಸ್ಥಿತಿಯನ್ನು ಪರಿಶೀಲಿಸಿದರು.

ನಂತರ ರೋಣ ತಾಲ್ಲೂಕಿನ ನರೇಗಲ್ ಗ್ರಾಮಕ್ಕೆ ಭೇಟಿ ನೀಡಿ ಹೆಸರು, ಮೆಕ್ಕೆಜೋಳ ಹಾಗೂ ಶೇಂಗಾ ಬೆಳೆದ ರೈತರ ಜಮೀನುಗಳಲ್ಲಿ ಮಳೆ ಕೊರತೆಯಿಂದ ಒಣಗುತ್ತಿರುವ ಹಾಗೂ ಬಾಡುತ್ತಿರುವ ಬೆಳೆಗಳನ್ನು ವೀಕ್ಷಿಸಿದರು.

ಹೊಲಗಳಲ್ಲಿಯೇ ರೈತರೊಂದಿಗೆ ಸಮಾಲೋಚನೆ ನಡೆಸಿದ ಜಿಲ್ಲಾಧಿಕಾರಿಗಳು, ಬೆಳೆಗಳ ಸ್ಥಿತಿ, ನೀರಿನ ಲಭ್ಯತೆ ಹಾಗೂ ಎದುರಾಗಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಜಿಲ್ಲಾಧಿಕಾರಿಗಳು ರೈತರಿಗೆ ಧೈರ್ಯ ತುಂಬುತ್ತಾ, ಕೃಷಿ ಇಲಾಖೆಯ ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ನಿರಂತರವಾಗಿ ಬೆಳೆಗಳ ಮೇಲ್ವಿಚಾರಣೆ ನಡೆಸಬೇಕು. ಮಳೆ ಕೊರತೆಯಿಂದ ಬೆಳೆಗಳಲ್ಲಿ ಉಂಟಾಗುತ್ತಿರುವ ಹಾನಿಯನ್ನು ದಾಖಲಿಸಿ ರೈತರಿಗೆ ಅಗತ್ಯ ತಾಂತ್ರಿಕ ಸಲಹೆ ಹಾಗೂ ಮಾರ್ಗದರ್ಶನ ನೀಡಬೇಕು ಎಂದು ಸೂಚಿಸಿದರು.

ರೈತರೊಂದಿಗೆ ನೇರವಾಗಿ ಸಂವಾದ ನಡೆಸಿ ಮಳೆ ಕೊರತೆಯಿಂದ ಎದುರಾಗಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆದು, ಆತಂಕ ಪಡುವ ಅಗತ್ಯವಿಲ್ಲ ಎಂದು ರೈತರಿಗೆ ಧೈರ್ಯ ತುಂಬಿದರು.

ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾಗಿರುವ ವಿವಿಧ ಬೆಳೆಗಳ ಬೆಳವಣಿಗೆ, ಮಣ್ಣಿನ ತೇವಾಂಶ, ಮಳೆಯ ಪರಿಣಾಮ, ಬೆಳೆಗಳ ಆರೋಗ್ಯ ಹಾಗೂ ಕೃಷಿ ಚಟುವಟಿಕೆಗಳ ಪ್ರಗತಿಯನ್ನು ಸ್ಥಳದಲ್ಲಿಯೇ ಪರಿಶೀಲಿಸಿದರು. ರೈತರೊಂದಿಗೆ ಸಂವಾದ ನಡೆಸಿದ ಅವರು, ಈ ವರ್ಷದ ಮಳೆ, ಬಿತ್ತನೆ ಪ್ರಮಾಣ, ನೀರಿನ ಲಭ್ಯತೆ, ಬೆಳೆಗಳ ನಿರ್ವಹಣೆ ಹಾಗೂ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಂಡರು.

ಭೇಟಿಯ ವೇಳೆ ಕೃಷಿ ಇಲಾಖೆಯ ಅಧಿಕಾರಿಗಳು ಗ್ರಾಮವಾರು ಬಿತ್ತನೆ ಪ್ರಗತಿ, ಬೆಳೆವಾರು ವಿಸ್ತೀರ್ಣ, ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಹಾಗೂ ರೈತರಿಗೆ ನೀಡಲಾಗುತ್ತಿರುವ ತಾಂತ್ರಿಕ ಸಲಹೆಗಳ ಕುರಿತು ಜಿಲ್ಲಾಧಿಕಾರಿಗಳಿಗೆ ವಿವರಿಸಿದರು. ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಬೆಳೆಗಳ ಮೇಲೆ ನಿರಂತರ ನಿಗಾ ವಹಿಸುವಂತೆ ಹಾಗೂ ರೈತರಿಗೆ ಅಗತ್ಯ ಮಾರ್ಗದರ್ಶನವನ್ನು ತ್ವರಿತವಾಗಿ ನೀಡುವಂತೆ ಸೂಚಿಸಿದರು.

ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ರೈತರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಹವಾಮಾನ ವೈಪರೀತ್ಯ, ಕೀಟ ಹಾಗೂ ರೋಗಬಾಧೆ ಕಂಡುಬಂದಲ್ಲಿ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ರೈತರಿಗೆ ಕೃಷಿ ಇಲಾಖೆಯ ಸೇವೆಗಳು ಸಮಯಕ್ಕೆ ತಲುಪುವಂತೆ ನೋಡಿಕೊಳ್ಳಬೇಕು. ಕೃಷಿ, ಕಂದಾಯ ಹಾಗೂ ತೋಟಗಾರಿಕೆ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಮುಂಗಾರು ಹಂಗಾಮಿನ ಬೆಳೆಗಳ ಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಬೆಳೆ ವಿಮೆ ನೋಂದಣಿಗೆ ಜುಲೈ 22 ಕೊನೆಯ ದಿನ

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಬೆಳೆ ಸಾಲ ಪಡೆದ ರೈತರಿಗೆ (ಬ್ಯಾಂಕ್ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ) ಹೆಸರು (ಮಳೆ ಆಶ್ರಿತ) ಹಾಗೂ ಹತ್ತಿ (ಮಳೆ ಆಶ್ರಿತ ಮತ್ತು ನೀರಾವರಿ) ಬೆಳೆಗಳಿಗೆ ಜುಲೈ 22, 2026ರವರೆಗೆ ಬೆಳೆ ವಿಮೆ ನೋಂದಾಯಿಸಿಕೊಳ್ಳಲು ಅವಕಾಶವಿದೆ. ಅರ್ಹ ರೈತರು ಈ ಅವಕಾಶವನ್ನು ತಪ್ಪದೇ ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಅವರು ರೈತ ಬಾಂಧವರಲ್ಲಿ ಮನವಿ ಮಾಡಿದರು.

ಕೃಷಿ ಜಂಟಿ ನಿರ್ದೇಶಕಿ ಚೇತನಾ ಪಾಟಿಲ ಮಾಹಿತಿ ನೀಡುತ್ತಾ, ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಒಟ್ಟು 3,13,719 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ನಿಗದಿಪಡಿಸಲಾಗಿದ್ದು, ಇದುವರೆಗೆ 2,57,401 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಆದರೆ ಜೂನ್ 1ರಿಂದ ಜುಲೈ 16ರವರೆಗೆ 121.4 ಮಿ.ಮೀ. ವಾಡಿಕೆ ಮಳೆಯ ಬದಲಿಗೆ ಕೇವಲ 82.50 ಮಿ.ಮೀ. ಮಳೆಯಾಗಿದ್ದು, ಶೇ. 32.04ರಷ್ಟು ಮಳೆ ಕೊರತೆ ದಾಖಲಾಗಿದೆ ಎಂದರು.

ಈ ವೇಳೆ ಉಪವಿಭಾಗಾಧಿಕಾರಿ ಗಂಗಪ್ಪ ಎಂ, ತಹಶೀಲ್ದಾರ ಶ್ರೀನಿವಾಸಮೂರ್ತಿ ಕುಲಕರ್ಣಿ, ಜಂಟಿ ಕೃಷಿ ನಿರ್ದೇಶಕಿ ಶ್ರೀಮತಿ ಚೇತನಾ ಪಾಟೀಲ, ಕೃಷಿ, ಕಂದಾಯ ಹಾಗೂ ತೋಟಗಾರಿಕೆಯ ಇಲಾಖೆಯ ಅಧಿಕಾರಿಗಳು ಹಾಗೂ ರೈತ ಮುಖಂಡರು ಹಾಜರಿದ್ದರು.

ಜಿಲ್ಲೆಯ ರೈತರು ಯಾವುದೇ ರೀತಿಯ ತೊಂದರೆಗೆ ಒಳಗಾಗದಂತೆ ಕೃಷಿ ಇಲಾಖೆಯ ಅಧಿಕಾರಿಗಳು ನಿರಂತರವಾಗಿ ಹೊಲಗಳಿಗೆ ಭೇಟಿ ನೀಡಿ ಬೆಳೆಗಳ ಸ್ಥಿತಿಗತಿಯನ್ನು ಪರಿಶೀಲಿಸಬೇಕು. ರೈತರಿಗೆ ಅಗತ್ಯ ತಾಂತ್ರಿಕ ಸಲಹೆ, ಮಾರ್ಗದರ್ಶನ ಹಾಗೂ ಇಲಾಖೆಯ ಸೌಲಭ್ಯಗಳು ಸಮಯಕ್ಕೆ ತಲುಪುವಂತೆ ನೋಡಿಕೊಳ್ಳಬೇಕು. ಕೃಷಿ ಚಟುವಟಿಕೆಗಳ ಮೇಲೆ ನಿಗಾ ವಹಿಸಿ, ಸಮಸ್ಯೆ ಕಂಡುಬಂದ ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಳ್ಳುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande