ಬರ ನಿರ್ವಹಣೆ ಯುದ್ದೋಪಾದಿಯಲ್ಲಿ ಕಾರ್ಯನಿರ್ವಹಿಸಿ: ಹುಲಗಣ್ಣವರ
ಗದಗ, 16 ಜುಲೈ (ಹಿ.ಸ.) ಆ್ಯಂಕರ್: ಮಳೆಯ ಕೊರತೆಯಿಂದ ತಾಲೂಕಿನಲ್ಲಿ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಎಲ್ಲ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರಸ್ಥಾನದಲ್ಲೇ ಉಳಿದು ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಗದಗ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿಗಳಾದ
ಫೋಟೋ


ಗದಗ, 16 ಜುಲೈ (ಹಿ.ಸ.)

ಆ್ಯಂಕರ್: ಮಳೆಯ ಕೊರತೆಯಿಂದ ತಾಲೂಕಿನಲ್ಲಿ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಎಲ್ಲ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರಸ್ಥಾನದಲ್ಲೇ ಉಳಿದು ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಗದಗ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿಗಳಾದ ಹೆಚ್.ಬಿ. ಹುಲಗಣ್ಣವರ ಸೂಚಿಸಿದರು.

ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಗುರುವಾರ ನಡೆದ 2026–27ನೇ ಸಾಲಿನ ಮೊದಲ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಮಳೆಯ ಕೊರತೆಯಿಂದ ಬೆಳೆಗಳು ಒಣಗುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಬೆಳೆ ವಿಮೆ ಮಾಡಿಸಲು ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಬೀಜ ಹಾಗೂ ರಸಗೊಬ್ಬರ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ಸೂಚಿಸಿದರು.

ಬೆಳೆಗಳಲ್ಲಿ ಕಂಡುಬರುತ್ತಿರುವ ಹಳದಿ ರೋಗ ನಿಯಂತ್ರಣಕ್ಕೆ ಅಗತ್ಯ ಲಸಿಕೆ ಸಿಂಪಡಣೆ ಹಾಗೂ ತಾಂತ್ರಿಕ ಮಾಹಿತಿ ರೈತರಿಗೆ ತಲುಪಿಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಮಾತನಾಡಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಚಿನಗುಂಡಿ, ಮಳೆಗಾಲದಲ್ಲಿ ಡೆಂಗ್ಯೂ ಹಾಗೂ ಮಲೇರಿಯಾ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ವಿಶೇಷ ಅಭಿಯಾನದ ಮೂಲಕ ಪುನಃ ಶಾಲೆಗೆ ದಾಖಲಿಸಬೇಕು. ಮಧ್ಯಾಹ್ನದ ಬಿಸಿಯೂಟದ ಗುಣಮಟ್ಟ ಕಾಪಾಡಲು ಅಕ್ಷರ ದಾಸೋಹ ಇಲಾಖೆ ಅಧಿಕಾರಿಗಳು ಶಾಲೆಗಳಿಗೆ ನಿರಂತರ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.

ವಿಬಿಜಿರಾಮ್ ಜಿ ಯೋಜನೆಯಡಿ ಸರ್ಕಾರಿ ಕಟ್ಟಡ ನಿರ್ಮಾಣಕ್ಕೆ ಅವಕಾಶವಿದ್ದು, ವಿವಿಧ ಇಲಾಖೆಗಳು ಅಗತ್ಯ ಕಟ್ಟಡಗಳ ಪ್ರಸ್ತಾವನೆಗಳನ್ನು ತಾಲೂಕು ಪಂಚಾಯಿತಿ ಹಾಗೂ ಸಂಬಂಧಿತ ಗ್ರಾಮ ಪಂಚಾಯಿತಿಗಳಿಗೆ ಸಲ್ಲಿಸಿ ಕ್ರಿಯಾಯೋಜನೆಯಲ್ಲಿ ಸೇರಿಸಿಕೊಳ್ಳಬೇಕು ಎಂದರು.

ತಾಲೂಕಿನ 13 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳಿಗೆ ಸಭೆಯಲ್ಲಿ ಸೂಚಿಸಲಾಯಿತು.

ಇದಕ್ಕೆ ಪ್ರತಿಕ್ರಿಯಿಸಿದ ಇಲಾಖೆಯ ಅಧಿಕಾರಿಗಳು, ಇತ್ತೀಚೆಗೆ ಸುರಿದ ಮಳೆಯಿಂದ ನವಿಲುತೀರ್ಥ ಜಲಾಶಯದಲ್ಲಿ ಹೆಚ್ಚುವರಿಯಾಗಿ 4 ಟಿಎಂಸಿ ನೀರು ಸಂಗ್ರಹವಾಗಿದ್ದು, ಸರ್ಕಾರಿ ಹಾಗೂ ಖಾಸಗಿ ಕೊಳವೆಬಾವಿಗಳ ಮೂಲಕವೂ ನೀರು ಪೂರೈಕೆಗೆ ಸಿದ್ಧತೆ ಮಾಡಿಕೊಂಡಿರುವುದರಿಂದ ಸದ್ಯ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಆರೋಗ್ಯ, ಕೃಷಿ, ಪಂಚಾಯತ್ ರಾಜ್ ಇಂಜಿನಿಯರಿಂಗ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಶಾಲಾ ಶಿಕ್ಷಣ, ಅಕ್ಷರ ದಾಸೋಹ, ಪಶು ಸಂಗೋಪನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಮಾಜ ಕಲ್ಯಾಣ, ತೋಟಗಾರಿಕೆ, ಹೆಸ್ಕಾಂ, ಅರಣ್ಯ, ಲೋಕೋಪಯೋಗಿ, ಸಹಕಾರ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ತಾಲೂಕಿನ 13 ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande