
ಬಾಗಲಕೋಟೆ, 16 ಜುಲೈ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಜಗದಾಳ ಗ್ರಾಮದಲ್ಲಿ ಮಹಾರಾಷ್ಟ್ರ ಮೂಲದ ಕೂಲಿ ಕಾರ್ಮಿಕನನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಇಂದು ಬೆಳಕಿಗೆ ಬಂದಿದೆ. ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕೊಲೆಯಾದ ವ್ಯಕ್ತಿಯನ್ನು ಪ್ರಕಾಶ್ (40) ಎಂದು ಗುರುತಿಸಲಾಗಿದ್ದು, ಆತ ಮಹಾರಾಷ್ಟ್ರದ ಅರಗ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಕಳೆದ ಮೂರು ತಿಂಗಳಿಂದ ಜಗದಾಳ ಗ್ರಾಮದ ಎಲೆ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಪ್ರಕಾಶ್, ಪ್ರತಿದಿನ ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲೇ ರಾತ್ರಿ ಮಲಗುತ್ತಿದ್ದ ಎನ್ನಲಾಗಿದೆ.
ಬುಧವಾರ ರಾತ್ರಿ ಸಹ ಕೆಲಸ ಮುಗಿಸಿ ಊಟ ಮಾಡಿದ ಬಳಿಕ ಶಾಲೆಯ ಆವರಣದಲ್ಲಿ ಮಲಗಿದ್ದ ವೇಳೆ ದುಷ್ಕರ್ಮಿ ಕಲ್ಲಿನಿಂದ ತಲೆಗೆ ಜಜ್ಜಿ ಹತ್ಯೆ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಘಟನೆಗೂ ಮುನ್ನ ಮದ್ಯದ ಅಮಲಿನಲ್ಲಿದ್ದ ಅನಾಮಧೇಯ ವ್ಯಕ್ತಿಯೊಂದಿಗೆ ಪ್ರಕಾಶ್ಗೆ ಜಗಳ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಬಳಿಕ ಕೋಪೋದ್ರಿಕ್ತನಾದ ವ್ಯಕ್ತಿ ಕಲ್ಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬನಹಟ್ಟಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಸ್ಥಳದಲ್ಲಿದ್ದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ತನಿಖೆಯನ್ನು ಮುಂದುವರೆಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಬನಹಟ್ಟಿ ಪೊಲೀಸರು ಆರೋಪಿಯ ಪತ್ತೆಗೆ ವಿಶೇಷ ತಂಡವನ್ನು ರಚಿಸುವ ಸಾಧ್ಯತೆ ಇದ್ದು, ಸುತ್ತಮುತ್ತಲಿನ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಕೊಲೆಯ ನಿಖರ ಕಾರಣ ತನಿಖೆ ಬಳಿಕವೇ ತಿಳಿಯಬೇಕಿದೆ.
ಸ್ಥಳೀಯರ ಪ್ರಕಾರ, ಪ್ರಕಾಶ್ ಶಾಂತ ಸ್ವಭಾವದ ವ್ಯಕ್ತಿಯಾಗಿದ್ದು, ದಿನಗೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದನು. ಏಕಾಏಕಿ ನಡೆದ ಈ ಬರ್ಬರ ಹತ್ಯೆ ಗ್ರಾಮಸ್ಥರನ್ನು ಬೆಚ್ಚಿಬೀಳಿಸಿದೆ. ಪ್ರಕರಣದ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿರುವ ಪೊಲೀಸರು ಶೀಘ್ರದಲ್ಲೇ ಆರೋಪಿಯನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande