ಕನಿಷ್ಠ ವೇತನ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಹೊರಗುತ್ತಿಗೆ ನೌಕರರ ಪ್ರತಿಭಟನೆ
ಬಾಗಲಕೋಟೆ, 16 ಜುಲೈ (ಹಿ.ಸ.) ಆ್ಯಂಕರ್ : ಕನಿಷ್ಠ ವೇತನವನ್ನು ಕಡ್ಡಾಯವಾಗಿ ಜಾರಿಗೊಳಿಸುವುದು, ಉದ್ಯೋಗ ಭದ್ರತೆ ಕಲ್ಪಿಸುವುದು ಸೇರಿದಂತೆ ಹಲವು ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರು ಗುರುವಾರ ಬಾಗ
ಪ್ರೊಟೆಸ್ಟ್


ಬಾಗಲಕೋಟೆ, 16 ಜುಲೈ (ಹಿ.ಸ.)

ಆ್ಯಂಕರ್ : ಕನಿಷ್ಠ ವೇತನವನ್ನು ಕಡ್ಡಾಯವಾಗಿ ಜಾರಿಗೊಳಿಸುವುದು, ಉದ್ಯೋಗ ಭದ್ರತೆ ಕಲ್ಪಿಸುವುದು ಸೇರಿದಂತೆ ಹಲವು ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರು ಗುರುವಾರ ಬಾಗಲಕೋಟೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ರಾಜ್ಯದ ವಿವಿಧ ಸರ್ಕಾರಿ ಹಾಸ್ಟೆಲ್ಗಳು ಹಾಗೂ ವಸತಿ ಶಾಲೆಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರೂ, ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ, ಇಪಿಎಫ್, ಇಎಸ್ಐ ಸೇರಿದಂತೆ ಕಾರ್ಮಿಕ ಕಾನೂನಿನಡಿ ದೊರೆಯಬೇಕಾದ ಮೂಲಭೂತ ಸೌಲಭ್ಯಗಳು ಸಮರ್ಪಕವಾಗಿ ಲಭ್ಯವಾಗುತ್ತಿಲ್ಲ. ಇದರಿಂದ ನೌಕರರು ಹಾಗೂ ಅವರ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವುದಾಗಿ ಪ್ರತಿಭಟನಾಕಾರರು ಆರೋಪಿಸಿದರು.

ಹೊರಗುತ್ತಿಗೆ ಪದ್ಧತಿಯಿಂದ ನೌಕರರ ಹಕ್ಕುಗಳಿಗೆ ಧಕ್ಕೆ ಉಂಟಾಗುತ್ತಿದ್ದು, ಕಡಿಮೆ ಸಂಬಳದಲ್ಲಿ ಹೆಚ್ಚಿನ ಕೆಲಸ ಮಾಡಿಸಲಾಗುತ್ತಿದೆ. ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರೂ ಉದ್ಯೋಗಕ್ಕೆ ಯಾವುದೇ ಭದ್ರತೆ ಇಲ್ಲ. ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣವೇ ಕನಿಷ್ಠ ವೇತನ ಜಾರಿಗೊಳಿಸಬೇಕು ಹಾಗೂ ಕಾರ್ಮಿಕ ಕಾನೂನುಗಳ ಅನುಸಾರ ಎಲ್ಲ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಂಘದ ಮುಖಂಡರು ಮಾತನಾಡಿ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾವಿರಾರು ಹೊರಗುತ್ತಿಗೆ ನೌಕರರು ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಅವರಿಗೆ ನ್ಯಾಯಯುತ ವೇತನ, ರಜೆ ಸೌಲಭ್ಯ, ಸಾಮಾಜಿಕ ಭದ್ರತಾ ಯೋಜನೆಗಳು ಸೇರಿದಂತೆ ಮೂಲಭೂತ ಹಕ್ಕುಗಳೇ ದೊರೆಯುತ್ತಿಲ್ಲ. ಸರ್ಕಾರ ಈ ಅನ್ಯಾಯವನ್ನು ಸರಿಪಡಿಸಿ ನೌಕರರ ಬದುಕಿಗೆ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದರು.

ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ ಪ್ರತಿಭಟನಾಕಾರರು, ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು, ಸದಸ್ಯರು ಹಾಗೂ ವಿವಿಧ ತಾಲೂಕುಗಳ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande