ಗದಗ ವಿಧಾನಸಭಾ ಕ್ಷೇತ್ರದಲ್ಲಿ ಎಸ್ಐಆರ್ ಪ್ರಕ್ರಿಯೆ ಚುರುಕು
ಗದಗ, 16 ಜುಲೈ (ಹಿ.ಸ.) ಆ್ಯಂಕರ್:- ಗದಗ ವಿಧಾನಸಭಾ ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್-ಸ್ಪೆಷಲ್ ಇಂಟೆನ್ಸಿವ್ ರಿವಿಷನ್) ಕಾರ್ಯವು ವೇಗವಾಗಿ ಸಾಗುತ್ತಿದ್ದು, ಮನೆ ಮನೆಗೆ ಭೇಟಿ ನೀಡುತ್ತಿರುವ ಬೂತ್ ಮಟ್ಟದ ಅಧಿಕಾರಿಗಳು (ಬಿ.ಎಲ್.ಓ.) ಮತದಾರರಿಗೆ ಎನ್ಯುಮರೇಷನ್ ಫಾ
ಫೋಟೋ


ಗದಗ, 16 ಜುಲೈ (ಹಿ.ಸ.)

ಆ್ಯಂಕರ್:- ಗದಗ ವಿಧಾನಸಭಾ ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್-ಸ್ಪೆಷಲ್ ಇಂಟೆನ್ಸಿವ್ ರಿವಿಷನ್) ಕಾರ್ಯವು ವೇಗವಾಗಿ ಸಾಗುತ್ತಿದ್ದು, ಮನೆ ಮನೆಗೆ ಭೇಟಿ ನೀಡುತ್ತಿರುವ ಬೂತ್ ಮಟ್ಟದ ಅಧಿಕಾರಿಗಳು (ಬಿ.ಎಲ್.ಓ.) ಮತದಾರರಿಗೆ ಎನ್ಯುಮರೇಷನ್ ಫಾರ್ಮಗಳನ್ನು ವಿತರಿಸುವ ಕಾರ್ಯವನ್ನು ಸಮರ್ಪಕವಾಗಿ ನಡೆಸುತ್ತಿದ್ದಾರೆ. ಮತದಾರರ ಪಟ್ಟಿಯನ್ನು ಮತ್ತಷ್ಟು ನಿಖರ ಹಾಗೂ ದೋಷರಹಿತಗೊಳಿಸುವ ಉದ್ದೇಶದಿಂದ ಕೈಗೊಂಡಿರುವ ಈ ಅಭಿಯಾನದಲ್ಲಿ ಬಹುತೇಕ ಎಲ್ಲಾ ಮತದಾರರಿಗೆ ಎನ್ಯುಮರೇಷನ್ ಫಾರ್ಮಗಳನ್ನು ತಲುಪಿಸಲಾಗಿದೆ.

ಗದಗ ವಿಧಾನಸಭಾ ಮತಕ್ಷೇತ್ರದಲ್ಲಿ ಒಟ್ಟು 2,33,829 ಮತದಾರರು ನೋಂದಣಿಯಾಗಿದ್ದು, ಕ್ಷೇತ್ರದ ವ್ಯಾಪ್ತಿಯಲ್ಲಿ 226 ಮತಗಟ್ಟೆಗಳು ಕಾರ್ಯನಿರ್ವಹಿಸುತ್ತಿವೆ. ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ ನೇಮಕಗೊಂಡಿರುವ ಬಿ.ಎಲ್.ಓಗಳು ಮನೆ ಮನೆಗೆ ತೆರಳಿ ಮತದಾರರನ್ನು ಭೇಟಿ ಮಾಡಿ, ಎನ್ಯುಮರೇಷನ್ ಫಾರ್ಮಗಳನ್ನು ವಿತರಿಸುವುದರ ಜೊತೆಗೆ ಅಗತ್ಯ ಮಾಹಿತಿಯನ್ನು ಪರಿಶೀಲಿಸುತ್ತಿದ್ದಾರೆ.

ಈ ಕಾರ್ಯವು ಆಗಸ್ಟ್ 8ರವರೆಗೆ ಮುಂದುವರಿಯಲಿದ್ದು, ಯಾವುದೇ ಅರ್ಹ ಮತದಾರರು ಈ ಪ್ರಕ್ರಿಯೆಯಿಂದ ಹೊರಗುಳಿಯದಂತೆ ಅಧಿಕಾರಿಗಳು ವಿಶೇಷ ಗಮನ ಹರಿಸಿದ್ದಾರೆ.

ಗದಗ ಉಪವಿಭಾಗಾಧಿಕಾರಿಗಳು ಹಾಗೂ ಗದಗ ವಿಧಾನಸಭಾ ಮತಕ್ಷೇತ್ರದ ಮತದಾರರ ನೋಂದಣಾಧಿಕಾರಿಗಳು ನೀಡಿರುವ ಮಾಹಿತಿಯಂತೆ, ಒಟ್ಟು 2,33,822 ಎನ್ಯುಮರೇಷನ್ ಫಾರ್ಮಗಳನ್ನು ವಿತರಿಸಲಾಗಿದ್ದು, ಕ್ಷೇತ್ರದಲ್ಲಿರುವ ಒಟ್ಟು ಮತದಾರರ ಸಂಖ್ಯೆಗೆ ಸಮನಾದ ಮಟ್ಟದಲ್ಲಿ ವಿತರಣೆ ಕಾರ್ಯ ಪೂರ್ಣಗೊಂಡಿದೆ. ಇದು ಎಸ್ಐಆರ್ ಪ್ರಕ್ರಿಯೆಯ ಯಶಸ್ವಿ ಅನುಷ್ಠಾನಕ್ಕೆ ಮಹತ್ವದ ಹೆಜ್ಜೆಯಾಗಿದೆ.

ವಿತರಿಸಲಾದ ಫಾರ್ಮುಗಳಲ್ಲಿ 1,01,239 ಎನ್ಯುಮರೇಷನ್ ಫಾರ್ಮಗಳನ್ನು ಈಗಾಗಲೇ ಡಿಜಿಟಲೀಕರಣಗೊಳಿಸಲಾಗಿದೆ. ಮತದಾರರು ಸಲ್ಲಿಸಿರುವ ಮಾಹಿತಿಯನ್ನು ಚುನಾವಣಾ ಆಯೋಗದ ವ್ಯವಸ್ಥೆಯಲ್ಲಿ ದಾಖಲಿಸುವ ಕಾರ್ಯವನ್ನು ಅಧಿಕಾರಿಗಳು ನಿರಂತರವಾಗಿ ಕೈಗೊಳ್ಳುತ್ತಿದ್ದಾರೆ. ಉಳಿದ ಫಾರ್ಮುಗಳ ಡಿಜಿಟಲೀಕರಣ ಕಾರ್ಯವೂ ಹಂತ ಹಂತವಾಗಿ ಪೂರ್ಣಗೊಳ್ಳಲಿದ್ದು, ಅಂತಿಮ ಮತದಾರರ ಪಟ್ಟಿಯನ್ನು ದೋಷರಹಿತವಾಗಿ ಸಿದ್ಧಪಡಿಸುವ ಗುರಿಯನ್ನು ಚುನಾವಣಾ ಇಲಾಖೆ ಹೊಂದಿದೆ.

ಎಸ್ಐಆರ್ ಪ್ರಕ್ರಿಯೆಯ ಪ್ರಮುಖ ಉದ್ದೇಶ ಮತದಾರರ ಪಟ್ಟಿಯಲ್ಲಿರುವ ಹೆಸರು, ವಿಳಾಸ, ವಯಸ್ಸು ಸೇರಿದಂತೆ ವಿವಿಧ ಮಾಹಿತಿಗಳನ್ನು ನವೀಕರಿಸುವುದು, ಮರಣ ಹೊಂದಿರುವ ಅಥವಾ ಬೇರೆಡೆಗೆ ಸ್ಥಳಾಂತರಗೊಂಡಿರುವ ಮತದಾರರ ಮಾಹಿತಿಯನ್ನು ಪರಿಷ್ಕರಿಸುವುದು ಹಾಗೂ ಅರ್ಹ ಹೊಸ ಮತದಾರರನ್ನು ಸೇರ್ಪಡೆಗೊಳಿಸುವುದಾಗಿದೆ. ಇದರಿಂದ ಮುಂದಿನ ಚುನಾವಣೆಗಳಲ್ಲಿ ನಿಖರವಾದ ಮತದಾರರ ಪಟ್ಟಿಯನ್ನು ಬಳಸಲು ಸಾಧ್ಯವಾಗಲಿದೆ.

ಚುನಾವಣಾ ಅಧಿಕಾರಿಗಳು ಮತದಾರರಿಗೆ ಮನೆಗೆ ಬರುವ ಬಿ.ಎಲ್.ಓಗಳಿಗೆ ಅಗತ್ಯ ದಾಖಲೆಗಳನ್ನು ನೀಡಿ ಸಹಕರಿಸುವಂತೆ ಮನವಿ ಮಾಡಿದ್ದಾರೆ. ಎನ್ಯುಮರೇಷನ್ ಫಾರ್ಮವನ್ನು ಸರಿಯಾಗಿ ಭರ್ತಿ ಮಾಡಿ ನಿಗದಿತ ಅವಧಿಯೊಳಗೆ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯ ಯಶಸ್ವಿಗೊಳಿಸಬೇಕು ಎಂದು ಕೋರಿದ್ದಾರೆ.

ಜಿಲ್ಲೆಯಲ್ಲಿ ಎಸ್ಐಆರ್ ಪ್ರಕ್ರಿಯೆ ಪಾರದರ್ಶಕವಾಗಿ ಹಾಗೂ ಸುಗಮವಾಗಿ ನಡೆಯುತ್ತಿದ್ದು, ಅಧಿಕಾರಿಗಳು ಪ್ರತಿದಿನದ ಪ್ರಗತಿಯನ್ನು ಪರಿಶೀಲಿಸುತ್ತಿದ್ದಾರೆ. ಗದಗ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಬಹುತೇಕ ಎಲ್ಲ ಮತದಾರರನ್ನು ತಲುಪಿರುವ ಬಿ.ಎಲ್.ಓಗಳು, ಆಗಸ್ಟ್ 8ರೊಳಗೆ ಉಳಿದಿರುವ ಕಾರ್ಯವನ್ನೂ ಪೂರ್ಣಗೊಳಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮತದಾರರ ಪಟ್ಟಿಯು ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲಾಧಾರವಾಗಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕರೂ ಈ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ, ತಮ್ಮ ವಿವರಗಳನ್ನು ಪರಿಶೀಲಿಸಿ, ಅಗತ್ಯ ತಿದ್ದುಪಡಿಗಳನ್ನು ಮಾಡಿಸಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande